NEWSಕೃಷಿನಮ್ಮರಾಜ್ಯ

ಭಾರಿ ಮಳೆಗೆ ರಾಜ್ಯಾದ್ಯಂತ ಜನಜೀವನ ಅಸ್ತವ್ಯಸ್ತ: ಹಳಿ ತಪ್ಪಿದ ರೈಲು- ಜು.26ರವರೆಗೂ ವರುಣನ ಅಬ್ಬರ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ರಾಜ್ಯಾದ್ಯಂತ ಭಾರೀ ಮಳೆಯಾಗುತ್ತಿದೆ. ಬೆಳಗಾವಿ ಜಿಲ್ಲೆಯಲ್ಲಿ ಭಾರೀ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತವಾಗಿದೆ. ಜಿಲ್ಲೆಯಲ್ಲಿ ಖಾನಾಪುರ, ಸಂಕೇಶ್ವರ ಮೊದಲಾದ ತಾಲೂಕುಗಳಲ್ಲಿ ಜಮೀನು, ಮನೆಗಳಿಗೆ ನೀರು ನುಗ್ಗಿ ಜನರು ಆತಂಕಪಡುವ ಪರಿಸ್ಥಿತಿಯುಂಟಾಗಿದೆ. ಸಾವಿರಾರು ಎಕರೆ ಬೆಳೆಗೆ ಹಾನಿಯಾಗಿದೆ.

ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು, ಹಾಸನ, ರಾಯಚೂರು, ಹುಬ್ಬಳ್ಳಿ-ಧಾರವಾಡ ಸೇರಿದಂತೆ ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಸತತ ಮಳೆಯಾಗುತ್ತಿದೆ.

ಬೆಳಗಾವಿ ನಗರದಲ್ಲಿ ಕೂಡ ಭಾರೀ ಮಳೆಯಾಗುತ್ತಿದ್ದು ವಾಹನ ಸಂಚಾರಕ್ಕೆ ಅಡಚಣೆಯುಂಟಾಗಿದೆ. ಘಟಪ್ರಭ, ಮಲಪ್ರಭಾ ನದಿಗಳು ಸೇರಿದಂತೆ ಉಪ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ.

ನದಿ ತೀರದ ಜನರುಗಳಿಗೆ ಜಾನುವಾರುಗಳೊಂದಿಗೆ ಸುರಕ್ಷಿತ ಪ್ರದೇಶಗಳಿಗೆ ತೆರಳಲು ಸೂಚನೆ ನೀಡಲಾಗಿದೆ. ವೇದಗಂಗಾ ನದಿಯಲ್ಲಿ ನೀರು ಅಪಾಯದ ಮಟ್ಟ ಮೀರಿ ಹರಿಯುತ್ತಿರುವುದರಿಂದ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯನ್ನು ಸ್ಥಗಿತಗೊಳಿಸಲಾಗಿದೆ.

ಜಿಲ್ಲಾಧಿಕಾರಿಗಳಿಂದ ಮಾಹಿತಿ ಪಡೆದ ಸಿಎಂ : ಕೃಷ್ಣಾ ನದಿ ಪಾತ್ರದ ಪ್ರದೇಶಗಳಲ್ಲಿ ಮಳೆಯು ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಬೆಳಗಾವಿ ಜಿಲ್ಲಾಧಿಕಾರಿಗಳೊಂದಿಗೆ ದೂರವಾಣಿ ಮೂಲಕ ಮಾತನಾಡಿ ನದಿ ಪಾತ್ರದ ಜನರ ಬಗ್ಗೆ ನಿಗಾವಹಿಸುವಂತೆ ಸೂಚಿಸಿದ್ದಾರೆ.

ಅಗತ್ಯಬಿದ್ದರೆ ಗ್ರಾಮಸ್ಥರನ್ನು ತೆರವುಗೊಳಿಸುವಂತೆ ಸೂಚಿಸಿದ್ದಾರೆ. ಸರ್ಕಾರದಿಂದ ಹೆಚ್ಚಿನ ನೆರವು ಬೇಕಾದಲ್ಲಿ ಕೂಡಲೇ ಕರೆ ಮಾಡಿ ತಿಳಿಸುವಂತೆ ಸೂಚಿಸಿದ್ದಾರೆ. ಅದೇ ರೀತಿ ಬೇರೆ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೂ ಮುಖ್ಯಮಂತ್ರಿಗಳು ಕರೆ ಮಾಡಿ ಮಳೆ ಕುರಿತು ಮಾಹಿತಿ ಪಡೆಯುತ್ತಿದ್ದಾರೆ.

ಸ್ವಕ್ಷೇತ್ರ ಬಿಟ್ಟು ಹೋಗಬೇಡಿ: ಭಾರೀ ಮಳೆ ಹಿನ್ನೆಲೆಯಲ್ಲಿ ಪ್ರವಾಹ ಪರಿಸ್ಥಿತಿ ತಲೆದೋರಿರುವ ಕಾರಣ ಎಲ್ಲಾ ಜಿಲ್ಲೆಗಳ ಉಸ್ತುವಾರಿ ಸಚಿವರಿಗೆ ಜಿಲ್ಲೆಗಳನ್ನು ಬಿಟ್ಟು ಹೋಗದಂತೆ ಸಿಎಂ ಸೂಚಿಸಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಶಾಸಕರು ತಮ್ಮ ತಮ್ಮ ಕ್ಷೇತ್ರಗಳಲ್ಲಿದ್ದು ಜನರ ರಕ್ಷಣೆ ಮತ್ತು ಪರಿಹಾರ ಕಾರ್ಯಗಳ ಮೇಲ್ವಿಚಾರಣೆ ನೋಡಿಕೊಳ್ಳಬೇಕೆಂದು ಸೂಚಿಸಿದ್ದಾರೆ.

ಧಾರವಾಡದ ಅಂಬಲಿಕೊಪ್ಪ ಮತ್ತು ದೊಮಬ್ರಿಕೊಪ್ಪ ಮಧ್ಯೆ ನೀರು ಅಪಾಯದ ಮಟ್ಟ ಮೀರಿ ಹರಿಯುತ್ತಿರುವುದರಿಂದ ರಸ್ತೆ ಸಂಪರ್ಕ ಕಡಿತಗೊಂಡಿದೆ. ಭಾರೀ ಪ್ರಮಾಣದ ಭೂ ಕುಸಿತದಿಂದ ಮಂಗಳೂರು-ಮುಂಬೈ ರೈಲು ಸಂಪರ್ಕ ಕಡಿತಗೊಂಡಿದೆ. ಗೋವಾ-ಕರ್ನಾಟಕ ಗಡಿಭಾಗ ದೂದ್ ಸಾಗರ ಹತ್ತಿರ ಭೂ ಕುಸಿತ ಉಂಟಾಗಿದ್ದು ಪುನರ್ ಸ್ಥಾಪನೆ ಕಾರ್ಯ ನೆರವೇರುತ್ತಿದೆ.

ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ರಾಷ್ಡ್ರೀಯ ಹೆದ್ದಾರಿ 63 ಸಂಚಾರ ಸ್ಥಗಿತಗೊಂಡಿದೆ. ಮೊಗದ್ದೆ , ಹೆಬ್ಬುಳ ರಾಷ್ಟ್ರೀಯ ಹೆದ್ದಾರಿ 63ರ ಮೇಲೆ ಹೆಚ್ಚು ಮಳೆ ನೀರು ಬಂದ ಹಿನ್ನೆಲೆಯಲ್ಲಿ ಸ್ಥಗಿತಗೊಂಡಿದೆ.

ಪಶ್ಚಿಮ ಘಟ್ಟಗಳಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ನದಿ ಪಾತ್ರಗಳಲ್ಲಿರುವ ಮತ್ತು ತಗ್ಗು ಪ್ರದೇಶಗಳಲ್ಲಿರುವ ಕೃಷಿ ಭೂಮಿ ಸಂಪೂರ್ಣ ಜಲಾವೃತವಾಗುವ ಪರಿಸ್ಥಿತಿ ನಿರ್ಮಾಣವಾಗಿದೆ. ಬೆಳಗಾವಿ ಜಿಲ್ಲೆಯ ಉಕ್ಕೇರಿ ತಾಲ್ಲೂಕಿನ ಸಂಕೇಶ್ವರ ಪಟ್ಟಣದ ಮೂರ್ನಾಲ್ಕು ಕಾಲುವೆಗಳು ಸಂಪೂರ್ಣವಾಗಿ ಜಲಾವೃತಗೊಂಡಿವೆ.

ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆ: ನೆರೆಯ ಮಹಾರಾಷ್ಟ್ರದಲ್ಲಿನ ನಿರಂತರ ಮಳೆಯಿಂದಾಗಿ ಕೃಷ್ಣ ಹಾಗೂ ಉಪ ನದಿಗಳಾದ ವೇದಗಂಗಾ, ದೂದಗಂಗಾ, ಪಂಚಗಂಗಾ, ಮಲಪ್ರಭಾ ನದಿ ಹಾಗೂ ಅದರ ಉಪ ನದಿಗಳ ನೀರಿನ ಹರಿವು ಹೆಚ್ಚಾಗಿದೆ.

ಮಹಾರಾಷ್ಟ್ರದ ಕೊಯ್ನಾ ಜಲಾಶಯದಿಂದ ಇನ್ನೂ ನೀರು ಹೊರಬಿಡದ ಕಾರಣ ಬೆಳಗಾವಿ ಜಿಲ್ಲೆಯಲ್ಲಿ ಸದ್ಯ ಪ್ರವಾಹದ ಯಾವುದೇ ಭೀತಿಯಿಲ್ಲ. ಆದಾಗ್ಯೂ ಎಲ್ಲ ಮುನ್ನೆಚ್ಚರಿಕೆ ಕ್ರಮ ವಹಿಸಲಾಗಿದ್ದು, ಜಿಲ್ಲಾಡಳಿತ ಸೂಕ್ತ ವ್ಯವಸ್ಥೆ ಮಾಡಿಕೊಂಡಿದೆ ಎಂದು ಬೆಳಗಾವಿ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ತಿಳಿಸಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯಲ್ಲಿ ಕಳೆದೆರಡು ದಿನಗಳಿಂದ ಅಬ್ಬರಿಸುತ್ತಿರುವ ಮಳೆಗೆ ಜನಜೀವನ ಅಸ್ತವ್ಯಸ್ತಗೊಂಡಿದೆ. ಗಾಳಿ ಸಹಿತ ಸುರಿದ ಮಳೆಗೆ ಜೊಯಿಡಾ ತಾಲೂಕಿನ ಕುಂಬಾರವಾಡ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಿರವತ್ತಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಕಟ್ಟಡ ಕುಸಿದಿದೆ.

ಸೂಪಾ ಜಲಾಶಯಕ್ಕೆ ನೀರನ್ನು ಒದಗಿಸುವ ಕಾಳಿ ನದಿಯ ಉಪನದಿಗಳಾದ ಪಾಂಡರಿ ಹಾಗೂ ಕಾನೇರಿ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ಇದರಿಂದ ಆ ಭಾಗದ ಜನರ ಸಂಚಾರಕ್ಕೆ ಸಮಸ್ಯೆ ಎದುರಾಗಿದೆ.

ಕದ್ರಾ, ಕೊಡಸಳ್ಳಿ ಜಲಾಶಯಗಳಿಗೆ ನೀರಿನ ಒಳಹರಿವು ಹೆಚ್ಚಿದ್ದು, ಹೆಚ್ಚುವರಿ ನೀರನ್ನು ಜಲಾಶಯಗಳಿಂದ ಹೊರಬಿಡಲಾಗುತ್ತಿದೆ.

ಚಿಕ್ಕಮಗಳೂರು ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಹಲವೆಡೆ ಭೂಕುಸಿತ ಉಂಟಾಗಿದೆ. ತೀರ್ಥಹಳ್ಳಿ, ಶೃಂಗೇರಿ, ಮಂಗಳೂರು ಮಾರ್ಗದಲ್ಲಿ ಕಿರು ಸೇತುವೆಗಳು ಶಿಥಿಲವಾಗಿರುವುದರಿಂದ ಭಾರೀ ವಾಹನ ಸಂಚಾರವನ್ನು ನಿರ್ಬಂಧ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

ಶಿವಮೊಗ್ಗ ಜಿಲ್ಲೆಯಾದ್ಯಂತ ಎರಡು ದಿನಗಳಿಂದ ನಿರಂತರ ಮಳೆಯಾಗುತ್ತಿದೆ. ವರುಣನ ಅಬ್ಬರದಿಂದಾಗಿ ಜಿಲ್ಲೆಯ ಶರಾವತಿ, ತುಂಗಾ, ವರದಾ, ಕುಮದ್ವತಿ, ಮಾಲತಿ, ದಂಡಾವತಿ ಸೇರಿದಂತೆ ಇತರೆ ನದಿಗಳು ತುಂಬಿ ತುಳುಕುತ್ತಿದ್ದು, ಅಪಾಯದ ಮಟ್ಟ ತಲುಪಿವೆ. ಭದ್ರಾ ಜಲಾಶಯಕ್ಕೆ ಮೂರುವರೆ ಅಡಿ, ಲಿಂಗನಮಕ್ಕಿಗೆ ೭೩ ಸಾವಿರ ಕ್ಯುಸೆಕ್ ನೀರು ಹರಿದುಬಂದಿದೆ.

ಕೊಡಗು ಜಿಲ್ಲೆಯಾದ್ಯಂತ ಧಾರಾಕಾರ ಮಳೆ ಮುಂದುವರಿದಿದೆ. ಭಾಗಮಂಡಲದಲ್ಲಿ ಕಾವೇರಿ ನದಿ ನೀರಿನ ಮಟ್ಟದಲ್ಲಿ ಏರಿಕೆಯಾಗುತ್ತಿದ್ದು, ಕಾವೇರಿ ಮತ್ತು ಲಕ್ಷ್ಮಣತೀರ್ಥ ನದಿಗಳು ತುಂಬಿ ಹರಿಯುತ್ತಿವೆ.

ಬಂಗಾಳ ಕೊಲ್ಲಿಯಲ್ಲಿ ಮತ್ತೊಂದು ವಾಯುಭಾರ ಕುಸಿತ ಉಂಟಾಗುವ ಸಾಧ್ಯತೆಯಿದ್ದು, ಕಲ್ಯಾಣ ಕರ್ನಾಟಕ ಮತ್ತು ಉತ್ತರ ಕರ್ನಾಟಕ ಭಾಗದಲ್ಲಿ ಮಳೆ ನಿರಂತರವಾಗಿ ಮುಂದುವರಿಯಲಿದೆ ಎಂದು ಉತ್ತರ ಕರ್ನಾಟಕ ಹವಾಮಾನ ಮುನ್ಸೂಚನಾ ಕೇಂದ್ರದ ಮುಖ್ಯಸ್ಥ ಆರ್.ಎಚ್.ಪಾಟೀಲ್ ಹೇಳಿದ್ದಾರೆ.

Leave a Reply

error: Content is protected !!
LATEST
NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು