ವಿಜಯಪಥ ಸಮಗ್ರ ಸುದ್ದಿ
ತಿ.ನರಸೀಪುರ: ತಾಲೂಕಿನ ಬನ್ನೂರು ಹೋಬಳಿ ಬೀಡನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತರಾದ ಬಿ.ಎಲ್. ಕೃಷ್ಣೇಗೌಡ ಮತ್ತು ಉಪಾಧ್ಯಕ್ಷರಾಗಿ ಮಮತಾ ಇಂದು ಅವಿರೋಧವಾಗಿ ಆಯ್ಕೆಯಾದರು.
9 ಜನ ಸದಸ್ಯರನ್ನು ಹೊಂದಿರುವ ಗ್ರಾಪಂನಲ್ಲಿ ನಿಗದಿಯಂತೆ ಇಂದು ನಡೆದ ಚುನಾವಣೆಯಲ್ಲಿ ಅಧ್ಯಕ್ಷ ಪದವಿಗೆ ಬಿ.ಎಲ್. ಕೃಷ್ಣೇಗೌಡ ಮತ್ತು ಉಪಾಧ್ಯಕ್ಷೆ ಸ್ಥಾನಕ್ಕೆ ಮಮತಾ ಈ ಇಬ್ಬರು ಮಾತ್ರ ನಾಮಪತ್ರ ಸಲ್ಲಿಸಿದ್ದು ಬೇರಾರು ಸಲ್ಲಿಸದ ಹಿನ್ನೆಲೆಯಲ್ಲಿ ಇವರನ್ನು ಅಧ್ಯಕ್ಷ ಮತ್ತು ಉಪಾಧ್ಯಕ್ಷರಾಗಿ ಅವಿರೋಧ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಜಿ. ಮದ್ದಾನಪ್ಪ ಘೋಷಿಸಿದರು.
ಗ್ರಾಪಂ ನೂತನ ಅಧ್ಯಕ್ಷ ಬಿ.ಎಲ್. ಕೃಷ್ಣೇಗೌಡ ಮಾತನಾಡಿ, ಬೀಡನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಒಳಪಡುವ ಗ್ರಾಮಗಳಲ್ಲಿ ಸ್ವಚ್ಛತೆಗೆ ಮೊದಲ ಆದ್ಯತೆ ನೀಡಲಾಗುವುದು. ಕಟ್ಟಿಕೊಂಡಿರುವ ಚರಂಡಿಗಳನ್ನು ಸ್ವಚ್ಛಗೊಳಿಸುವ ಕಾರ್ಯ, ಕುಡಿಯುವ ನೀರು, ಪ್ರತಿಯೊಬ್ಬರಿಗೂ ವಿದ್ಯುತ್ ಮತ್ತು ಮನೆ ಇಲ್ಲದವರಿಗೆ ಸೂರು ಒದಗಿಸುವ ನಿಟ್ಟಿನಲ್ಲಿ ಮೊದಲ ಹೆಜ್ಜೆ ಇಡಲಾಗುವುದು ಎಂದು ತಿಳಿಸಿದರು.
ಈ ಹಿಂದಿನಿಂದಲೂ ನನಗೆ ಗ್ರಾಮಕ್ಕೆ ಏನಾದರೂ ಕೊಡುಗೆ ನೀಡಬೇಕು ಎಂಬ ಹಂಬಲವಿತ್ತು. ಹೀಗಾಗಿ ಗ್ರಾಪಂ ಚುನಾವಣೆಯಲ್ಲಿ ನಿಂತು ಗ್ರಾಮಸ್ಥರ ಬೆಂಬಲದಿಂದ ಸದಸ್ಯನಾಗಿ ಆಯ್ಕೆಯಾದೆ. ಈಗ ಅಧ್ಯಕ್ಷರಾಗಿ ಅವಿರೋಧ ಆಯ್ಕೆಯಾಗಿದ್ದು, ನನ್ನ ಅಧಿಕಾರವಧಿಯಲ್ಲಿ ಗ್ರಾಪಂ ವ್ಯಾಪ್ತಿಯಲ್ಲಿ ಒಳ್ಳೆ ಕೆಲಸ ಮಾಡುವ ಮೂಲಕ ಗ್ರಾಮಗಳ ಅಭಿವೃದ್ಧಿಗೆ ಶ್ರಮಿಸುತ್ತೇನೆ ಎಂದು ಹೇಳಿದರು.
ಇನ್ನು ಸರ್ಕಾರದಿಂದ ಪಂಚಾಯಿತಿಗೆ ಬರುವ ಅನುದಾನವನ್ನು ಸಮರ್ಪಕವಾಗಿ ಬಳಸಿಕೊಂಡು ಗ್ರಾಮವನ್ನು ಅಭಿವೃದ್ಧಿ ಮಾಡುವ ಗುರಿ ಇದೆ. ನನ್ನ ಅಧಿಕಾರ ಅವಧಿಯಲ್ಲಿ ಹೊಸ ಬದಲಾವಣೆ ತರಬೇಕು ಎಂಬ ಹಂಬಲವಿದೆ ಎಂದು ಕೃಷ್ಣೇಗೌಡ ತಿಳಿಸಿದರು.
ಕಾಂಗ್ರೆಸ್ ಮುಖಂಡರಾದ ಸುನೀಲ್ಬೋಸ್, ಕೇಶವ, ರಮೇಶ್, ವಕೀಲ ಸತೀಶ್ ಮತ್ತು ಕಾಂಗ್ರೆಸ್ ಕಾರ್ಯಕರ್ತರು ಇದ್ದರು.