- ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ಎರಡು ವರ್ಷಗಳಲ್ಲಿ ರಾಜಧಾನಿ ಬೆಂಗಳೂರಿನ ಚಹರೆ ಬದಲು ಮಾಡುತ್ತೇನೆ ಎಂದು ಮಿಷನ್ 2020 ಸಂವಾದದಲ್ಲಿ ಹೇಳಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರೇ, ಒಂದೇ ಒಂದು ಗಲ್ಲಿ, ಸರ್ಕಾರಿ ಶಾಲೆ, ಆಸ್ಪತ್ರೆಯನ್ನಾದರೂ ಅಭಿವೃದ್ಧಿ ಮಾಡಿ ತೋರಿಸಿ ಎಂದು ಆಮ್ ಆದ್ಮಿ ಪಕ್ಷದ ಬೆಂಗಳೂರು ನಗರ ಅಧ್ಯಕ್ಷ ಮೋಹನ್ ದಾಸರಿ ಸವಾಲು ಹಾಕಿದ್ದಾರೆ.
ಪುಲಿಕೇಶಿ ವಿಧಾನಸಭಾ ಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ ರಾಜ್ಯ ಬಿಜೆಪಿ ಸರ್ಕಾರದ ಹಾಗೂ ಬಿಬಿಎಂಪಿಯ ವೈಫಲ್ಯಗಳನ್ನು ಮನೆ, ಮನೆಗೆ ತಲುಪಿಸುವ ಬೃಹತ್ ಪಾದಯಾತ್ರೆಯನ್ನು ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಉದ್ಘಾಟಿಸಿ ಮಾತನಾಡಿದರು.
ಬಿಬಿಎಂಪಿಗೆ ಸರಿಯಾದ ಮಂತ್ರವಿಲ್ಲ, ಸ್ವತಂತ್ರವನ್ನೆಲ್ಲ ಕಿತ್ತುಕೊಂಡು ಈಗ ತಂತ್ರಾಂಶ ಆಧಾರಿತ ಸೇವೆ ನೀಡಲಾಗುವುದು ಎಂದು ಜನರ ಮೇಲೆ ಚಪ್ಪಡಿ ಕಲ್ಲು ಎಳೆಯಲು ಹೊರಟಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕಳ್ಳ ಮಾರ್ಗ ಹಿಡಿದಿರುವ ರಾಜ್ಯ ಬಿಜೆಪಿ ಸರ್ಕಾರ ನ್ಯಾಯಾಂಗದ ಮೂಲಕ ಬಿಬಿಎಂಪಿ ಚುನಾವಣೆಯನ್ನು ಮುಂದೂಡುತ್ತಲೇ ಇದೆ. ಬಿಜೆಪಿ ಯವರು ಏನೇ ಮಾಡಿದರೂ ಬಿಬಿಎಂಪಿ ಚುನಾವಣೆಯಲ್ಲಿ ಸೋಲು ಕಟ್ಟಿಟ್ಟ ಬುತ್ತಿ ಎಂದು ಹೇಳಿದರು.
ಪುಲಿಕೇಶಿ ವಿಧಾನಸಭಾ ಕ್ಷೇತ್ರ ಅಧ್ಯಕ್ಷ ಶಾಷಾವಲಿ ಮಾತನಾಡಿ, ಪುಲಿಕೇಶಿ ವಿಧಾನಸಭಾ ಕ್ಷೇತ್ರವನ್ನು ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಮೂರು ಪಕ್ಷಗಳು ಉಪಯೋಗಿಸಿಕೊಂಡಿದ್ದು, ಆಮ್ ಆದ್ಮಿ ಪಕ್ಷ ಇದಕ್ಕೆ ಮುಂದಿನ ದಿನಗಳಲ್ಲಿ ಅವಕಾಶ ಮಾಡಿಕೊಡುವುದಿಲ್ಲ ಎಂದು ಎಂದರು.
ಪಾದಯಾತ್ರೆಯಲ್ಲಿ ಪಕ್ಷದ ರಾಜ್ಯ ಸಹ ಸಂಚಾಲಕ ವಿಜಯ್ ಶರ್ಮ, ಮಾಧ್ಯಮ ಸಂಚಾಲಕ ಜಗದೀಶ್ ವಿ. ಸದಂ, ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಫರೀದ್, ಮುಖ್ಯ ವಕ್ತಾರ ಶರತ್ ಖಾದ್ರಿ ಸೇರಿ ಯುವ ಘಟಕದ ಸದಸ್ಯರು, ಪಕ್ಷದ ನೂರಾರು ಕಾರ್ಯಕರ್ತರು ಭಾಗವಹಿಸಿದ್ದರು.