ಬೆಂಗಳೂರು: ಶಿವಮೊಗ್ಗ ಜಿಲ್ಲೆಯಲ್ಲಿ ವಿಮಾನ ನಿಲ್ದಾಣ ನಿರ್ಮಾಣದಿಂದ ಜಿಲ್ಲೆ ಸೇರಿ ಸುತ್ತಮುತ್ತಲ ಪ್ರದೇಶ ಪ್ರವಾಸೋದ್ಯಮ ಮತ್ತು ಕೈಗಾರಿಕಾ ಕ್ಷೇತ್ರಗಳಿಗೆ ಉತ್ತೇಜನ ದೊರೆಯುವ ನಿರೀಕ್ಷೆ ಇದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು.
ವಿಮಾನ ನಿಲ್ದಾಣ ಕಾಮಗಾರಿಗೆ ಗೃಹ ಕಚೇರಿ ಕೃಷ್ಣಾ ದಿಂದಲೇ ಆನ್ಲೈನ್ ಮೂಲಕ ಸೋಮವಾರ ಚಾಲನೆ ಮತ್ತು ಶಿವಮೊಗ್ಗದ ರಾಷ್ಟ್ರೀಯ ಹೆದ್ದಾರಿ ವಿಭಾಗೀಯ ಕಚೇರಿಯನ್ನೂ ಉದ್ಘಾಟಿಸಿ ಮಾತನಾಡಿದರು.
ಶಿವಮೊಗ್ಗ ತಾಲೂಕಿನ ಸೋಗಾನೆ ಗ್ರಾಮದಲ್ಲಿ 220 ಕೋಟಿ ರೂ. ವೆಚ್ಚದಲ್ಲಿ 662.38 ಎಕರೆ ಪ್ರದೇಶದಲ್ಲಿ ಸುಸಜ್ಜಿತ ವಿಮಾನ ನಿಲ್ದಾಣ ನಿರ್ಮಿಸಲು ಇಂದು ಚಾಲನೆ ನೀಡಲಾಗಿದೆ. ಈ ಕಾಮಗಾರಿಯನ್ನು ಎರಡು ಹಂತದಲ್ಲಿ ಕೈಗೊಳ್ಳಲಾಗುತ್ತಿದ್ದು ವರ್ಷದಲ್ಲೇ ಪೂರ್ಣಗೊಳ್ಳುವ ನಿರೀಕ್ಷೆಯಿದೆ. ಜತೆಗೆ ಗುಣಮಟ್ಟದ ವಿಷಯದಲ್ಲಿ ಯಾವುದೇ ರಾಜಿ ಇಲ್ಲದೆ ನಿಗದಿತ ಸಮಯದೊಳಗೆ ಕಾಮಗಾರಿಯನ್ನು ಪೂರ್ಣಗೊಳಿಸಬೇಕು ಎಂದು ಗುತ್ತಿಗೆದಾರರಿಗೆ ಇದೇವೇಳೆ ತಾಕೀತು ಮಾಡಿದರು.
ಶಿವಮೊಗ್ಗ ರಾಷ್ಟ್ರೀಯ ಹೆದ್ದಾರಿ ನೂತನ ವಿಭಾಗ ಕಚೇರಿ ಆರಂಭಿಸುತ್ತಿರುವುದರಿಂದ ರಸ್ತೆ ಹಾಗೂ ಸೇತುವೆ ನಿರ್ಮಾಣ ಕಾಮಗಾರಿಗಳಿಗೆ ವೇಗ ದೊರೆಯಲಿದೆ. ಸಿಗಂದೂರು ಬಳಿ ಶರಾವತಿ ಹಿನ್ನೀರಿಗೆ ಕೆರೆ ನಿರ್ಮಾಣ ಕಾರ್ಯ ಆರಂಭಿಸುವ ಮೂಲಕ ಜಿಲ್ಲೆಯ ಆ ಭಾಗದ ಜನರ ಬಹುವರ್ಷಗಳ ಕನಸು ನೆನಸಾಗುತ್ತಿದೆ ಎಂದರು.
ಉಡಾನ್ ಯೋಜನೆಯಿಂದ ಜಿಲ್ಲೆಯ ಜನಸಾಮಾನ್ಯರು ವಿಮಾನಯಾನ ಕೈಗೊಳ್ಳುವ ವಾತಾವರಣವಿದೆ ಎಂದ ಸಿಎಂ, ಜಿಲ್ಲೆಯಲ್ಲಿ ನೀರಾವರಿ ಯೋಜನೆಗಳು, ಶಾಲೆಗಳಿಗೆ ಮೂಲಸೌಲಭ್ಯ, ಕುಡಿಯುವ ನೀರು, ರಸ್ತೆ ಸಂಪರ್ಕ ಅನುಷ್ಠಾನ, ಸ್ಮಾರ್ಟ್ ಸಿಟಿ ಯೋಜನೆಗೆ ವೇಗ ದೊರೆತಿದ್ದು, ಶಿವಮೊಗ್ಗ-ಶಿಕಾರಿಪುರ ರೈಲು ಮಾರ್ಗದ ಕಾಮಗಾರಿ ಪ್ರಗತಿ ಸೇರಿ ಅನೇಕ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ ಎಂದು ತಿಳಿಸಿದರು.
ಉಪ ಮುಖ್ಯಮಂತ್ರಿ ಹಾಗೂ ಲೋಕೋಪಯೋಗಿ ಸಚಿವ ಗೋವಿಂದ ಕಾರಜೋಳ ಮಾತನಾಡಿ, ವಿಮಾನ ನಿಲ್ದಾಣ ಕಾಮಗಾರಿ ಈಗಾಗಲೇ ಬಿಎಸ್‌ವೈ ಅವರು ಹೇಳಿದಂತೆ ಎರಡು ಹಂತಗಳಲ್ಲಿ ಕೈಗೊಳ್ಳಲಾಗುತ್ತಿದ್ದು ಪ್ರಥಮ ಹಂತದಲ್ಲಿ ರನ್ ವೇ, ಟ್ಯಾಕ್ಸಿ ವೇ, ಏಪ್ರಾನ್ ಅಪ್ರೋಚ್ ರಸ್ತೆ, ಪೆರಿಫೆರಲ್ ರಸ್ತೆ ಹಾಗೂ ಕಾಂಪೌಂಡ್ ಗೋಡೆ ನಿರ್ಮಾಣ ಕೈಗೊಳ್ಳಲಾಗಿದೆ. ಇನ್ನು ಎರಡನೇ ಹಂತದಲ್ಲಿ ಟರ್ಮಿನಲ್ ಕಟ್ಟಡ, ಎಟಿಸಿ ಟವರ್, ಅಗ್ನಿಶಾಮಕ ಕಟ್ಟಡ ಸೇರಿ ಇತ್ಯಾದಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು ಎಂದು ವಿವರಿಸಿದರು.
ಇನ್ನು ಶಿವಮೊಗ್ಗದಲ್ಲಿ ಮುಖ್ಯ ಇಂಜಿನಿಯರ್ ಕೇಂದ್ರ ವಲಯ ಮತ್ತು ರಾಷ್ಟ್ರೀಯ ಹೆದ್ದಾರಿ ವಿಭಾಗ ಕಚೇರಿಗಳನ್ನು ಆರಂಭಿಸುವ ಮೂಲಕ ಈ ಭಾಗದ ಅಭಿವೃದ್ಧಿಗೆ ಇನ್ನಷ್ಟು ವೇಗ ದೊರೆಯಲಿದ್ದು, ಗುಣಮಟ್ಟದ ಕೆಲಸಕ್ಕೆ ಮೊದಲ ಆದ್ಯತೆ ನೀಡಲಾಗುತ್ತಿದೆ ಎಂದು ಹೇಳಿದರು.
ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಶಂಕರಗೌಡ ಪಾಟೀಲ, ಲೋಕೋಪಯೋಗಿ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್, ಮೂಲಸೌಕರ್ಯ ಅಭಿವೃದ್ಧಿ ಇಲಾಖೆ ಪ್ರಧಾನ ಕಾರ್ಯದರ್ಶಿ ಕಪಿಲ್ ಮೋಹನ್ ಮತ್ತು ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.