ಬೆಂಗಳೂರು: ವಿಶ್ವಮಾರಿ ಕೊರೊನಾ ಸೋಂಕಿನ ಸಮಯದಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ನೆರವಿಗೆ ರಾಜ್ಯ ಸರಕಾರ ಕೂಡಲೇ ಧಾವಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು ಕೊರೊನಾ ವೈರಸ್ ಸೋಂಕಿನ ವೇಳೆ ಸಂಕಷ್ಟಕ್ಕೆ ಸಿಲುಕಿರುವ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರಿಗೆ ಸರ್ಕಾರ ಮೂರು ತಿಂಗಳ ವೇತನ ನೀಡುವ ಮೂಲಕ ಮಾನವೀಯ ನೆಲೆಗಟ್ಟಿನಲ್ಲಿ ತುರ್ತು ನೆರವಿಗೆ ಧಾವಿಸಬೇಕೆಂದು ಒತ್ತಾಯಿಸಿದ್ದಾರೆ.
ಅತಂತ್ರರಾಗಿರುವ ಅತಿಥಿ ಉಪನ್ಯಾಸಕರು ಹತಾಶೆಗೊಂಡು ಸುಮಾರು ಎಂಟು ಮಂದಿ ಆತ್ಮಹತ್ಯೆ ಮಾಡಿಕೊಂಡಿರುವುದು ಅತ್ಯಂತ ದುರದೃಷ್ಟಕರ. ಸರ್ಕಾರ ಅತಿಥಿ ಉಪನ್ಯಾಸಕರಿಗೆ ತಕ್ಷಣವೇ ಸ್ಪಂದಿಸಬೇಕು ಎಂದು ಆಗ್ರಹಿಸಿದ್ದಾರೆ.