NEWSನಮ್ಮಜಿಲ್ಲೆ

ಬೆಂಗಳೂರನ್ನು ಕನಿಷ್ಠ 20ದಿನ ಲಾಕ್‌ಡೌನ್‌ ಮಾಡಿ: ಮಾಜಿ ಸಿಎಂ ಎಚ್‌ಡಿಕೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ರಾಜ್ಯದಲ್ಲಿ ಲಾಕ್‌ಡೌನ್‌ ಸಡಿಲಿಕೆ ಮಾಡಿದ ನಂತರ ಕೊರೊನಾ ಸೋಂಕಿತರ ಪ್ರಕರಣಗಳು ಹೆಚ್ಚಾಗುತ್ತಿದ್ದು ಮೃತಪಡುವವರ ಸಂಖ್ಯೆಯಲ್ಲೂ ಗಣನೀಯ ಏರಿಕೆ ಆಗುತ್ತಿದೆ. ಆದ್ದರಿಂದ ಬೆಂಗಳೂರಿನ ಕೆಲ ಪ್ರದೇಶಗಳನ್ನು ಮಾತ್ರ ಸೀಲ್‌ಡೌನ್‌ ಮಾಡಿ ಕೈ ತೊಳೆದುಕೊಂಡರೆ ಸಾಲದು ಇಡೀ ಮಹಾನಗರವನ್ನೇ ಕನಿಷ್ಠ 20 ದಿನವಾದರೂ ಲಾಕ್‌ಡೌನ್‌ ಮಾಡಿ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಖಡಕ್‌ ಸಂದೇಶ ನೀಡಿದ್ದಾರೆ.

ಈ ಬಗ್ಗೆ ಟ್ವೀಟ್‌ ಮಾಡಿರುವ ಮಾಜಿ ಸಿಎಂ,  ಜನರ ಪ್ರಾಣದ ಜೊತೆ ಚೆಲ್ಲಾಟ ನಿಲ್ಲಿಸಿ. ಕೆಲವೇ ಪ್ರದೇಶಗಳಲ್ಲಿ ಸೀಲ್ ಡೌನ್ ಲಾಕ್ ಡೌನ್ ಮಾಡಿದರೆ ಪ್ರಯೋಜನವಿಲ್ಲ.‌ ಬೆಂಗಳೂರು ನಿವಾಸಿಗಳು ಬದುಕುಳಿಯಬೇಕಾದರೆ ಈ ಕೂಡಲೇ ಕನಿಷ್ಟ 20 ದಿನ‌ ಸಂಪೂರ್ಣ ಲಾಕ್ ಡೌನ್ ಮಾಡಿ. ಇಲ್ಲವಾದಲ್ಲಿ ಬೆಂಗಳೂರು ಮತ್ತೊಂದು ಬ್ರೆಜಿಲ್ ಆಗಲಿದೆ. ಜನರ ಆರೋಗ್ಯ ಮುಖ್ಯವೇ ಹೊರತು ಆರ್ಥಿಕತೆಯಲ್ಲ ಎಂದು ಸರ್ಕಾರಕ್ಕೆ ಸಲಹೆ ನೀಡಿದ್ದಾರೆ.

ಬರೀ ಪ್ಯಾಕೇಜ್ ಘೋಷಣೆ ಮಾಡಿದರೆ ಸಾಲದು. ಅದರ ಅನುಷ್ಠಾನಕ್ಕೆ ತಕ್ಷಣ ಕಾರ್ಯೋನ್ಮುಖವಾಗಬೇಕು. ಪ್ಯಾಕೇಜ್ ಘೋಷಣೆ ಮಾಡಿ, ಸರ್ಕಾರ ಅಂಗೈಯಲ್ಲಿ ಅರಮನೆ ತೋರಿಸಬಾರದು ಎಂದು ಹೇಳಿದ್ದಾರೆ.

ಬಡವರು, ಕಾರ್ಮಿಕರಿಗೆ ಕೂಡಲೇ ಪಡಿತರ ವಿತರಿಸಿ. ರಾಜ್ಯದ 50 ಲಕ್ಷ ಮಂದಿ ಶ್ರಮಿಕ ವರ್ಗಕ್ಕೆ ತಲಾ ಐದು ಸಾವಿರ ರೂಪಾಯಿ ಪರಿಹಾರ ನೀಡಬೇಕು. ಚಾಲಕರು, ನೇಕಾರರು, ಮಡಿವಾಳರು ಸೇರಿದಂತೆ ವಿವಿಧ ವರ್ಗಕ್ಕೆ ರಾಜ್ಯ ಸರ್ಕಾರ ಈಗಾಗಲೇ ಘೋಷಿಸಿರುವ ಪರಿಹಾರ ದಕ್ಕಿಲ್ಲ ಎಂದು ಕಿಡಿಕಾರಿದ್ದಾರೆ.

ಇನ್ನಾದರೂ ರಾಜ್ಯದಲ್ಲಿ ಕೊರೊನಾ ಸೋಂಕಿತರಿಗೆ ಬೇಕಾದ ವ್ಯವಸ್ಥೆ ಮಾಡಿ ಇಲ್ಲದಿದ್ದರೆ ಬೆಂಗಳೂರಿನಲ್ಲಿ ನೆಮ್ಮದಿಯಿಂದ ಇರಲು ಸಾಧ್ಯವಾಗುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.

H D Kumaraswamy @hd_kumaraswamy
 https://twitter.com/hd_kumaraswamy/status/1275242015219843073? 

Leave a Reply