ಬೆಂಗಳೂರು: ಲಂಚ ಕೊಡಲಿಲ್ಲ ಎಂಬ ಕಾರಣಕ್ಕೆ ಶಸ್ತ್ರಚಿಕಿತ್ಸೆ ವಿಷಯದ ಪ್ರಾಯೋಗಿಕ ಪರೀಕ್ಷೆಯಲ್ಲಿ ಕಲಬುರಗಿಯ ಖಾಜಾ ಬಂದೇ ನವಾಜ್ ವೈದ್ಯಕೀಯ ವಿಜ್ಞಾನ ಕಾಲೇಜಿನ ಏಳು ಎಂಬಿಬಿಎಸ್ ವಿದ್ಯಾರ್ಥಿಗಳನ್ನು ಅನುತ್ತೀರ್ಣ ಗೊಳಿಸಿದ ಆರೋಪಕ್ಕೆ ಸಂಬಂಧಿಸಿದ ವಿಚಾರಣಾ ವರದಿಯನ್ನು ಹೈಕೋರ್ಟ್ ರದ್ದುಪಡಿಸಿ, ಹೊಸ ವರದಿ ಸಲ್ಲಿಸುವಂತೆ ಸೂಚಿಸಿದೆ.
ವಿನೋದಿನಿ ಸೇರಿದಂತೆ ಏಳು ಮಂದಿ ಎಂಬಿಬಿಎಸ್ ವಿದ್ಯಾರ್ಥಿಗಳು ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಚ್. ಟಿ. ನರೇಂದ್ರ ಪ್ರಸಾದ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಶನಿವಾರ ವಿಚಾರಣೆ ನಡೆಸಿತು.
ಹೊಸದಾಗಿ ಸಮಿತಿ ರಚಿಸಬೇಕು. ಇದರಲ್ಲಿ ಬೇರೆ ಕಾಲೇಜಿನ ಪ್ರಾಧ್ಯಾಪಕರು ಇರಬೇಕು. ಈ ಸಮಿತಿ ವಿಚಾರಣೆ ನಡೆಸಿದ ವರದಿ ಸಲ್ಲಿಸಬೇಕು. ಸಮಿತಿ ರಚನೆ ಹಾಗೂ ವಿಚಾರಣಾ ವರದಿ ಸಲ್ಲಿಸುವ ಪ್ರಕ್ರಿಯೆ ಹದಿನೈದು ದಿನಗಳಲ್ಲಿ ಪೂರ್ಣಗೊಳಿಸಬೇಕು ಎಂದು ರಾಜೀವ್ ಗಾಂಧಿ ಆರೋಗ್ಯ ವಿವಿ ರಿಜಿಸ್ಟ್ರಾರ್ ಅವರಿಗೆ ನಿರ್ದೇಶಿಸಿ ಪೀಠ ವಿಚಾರಣೆ ಮುಂದೂಡಿತು.
ಪ್ರಕರಣ ಕುರಿತಂತೆ ವಿಚಾರಣೆಗೆ ಆದೇಶಿಸಬೇಕು ಹಾಗೂ ಮತ್ತೆ ಪ್ರಾಯೋಗಿಕ ವಿಷಯ ಪರೀಕ್ಷೆ ನಡೆಸಲು ವಿಶ್ವವಿದ್ಯಾಲಯಕ್ಕೆ ಆದೇಶಿಸಬೇಕು ಎಂದು ಅರ್ಜಿದಾರರ ಪರ ವಕೀಲ ರಹಮತ್ ಉಲ್ಲಾ ಕೊತ್ವಾಲ್ ವಾದ ಮಂಡಿಸಿದ್ದರು.