ಬೆಂಗಳೂರು: ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಗಳು ಇದೇ ಸೆಪ್ಟೆಂಬರ್ 7 ರ ಸೋಮವಾರದಿಂದ ರಾಜ್ಯಾದ್ಯಂತ ಜರುಗಲಿದ್ದು, ಯಾವುದೇ ಅಕ್ರಮಗಳಿಗೆ ಅವಕಾಶ ಇಲ್ಲದೆ ಪಾರದರ್ಶಕ ಪರೀಕ್ಷೆಗೆ ಕ್ರಮವಹಿಸುವಂತೆ ನಿಯೋಜಿತ ಅಧಿಕಾರಿಗಳಿಗೆ ಆಯಾಯ ಜಿಲ್ಲಾಧಿಕಾರಿಗಳು ಸೂಚನೆ ನೀಡಿದ್ದಾರೆ.
ಪ್ರತಿ ಪರೀಕ್ಷಾ ಕೇಂದ್ರಗಳಲ್ಲೂ ಕಡ್ಡಾಯವಾಗಿ ಕೋವಿಡ್ -19 ಮಾರ್ಗಸೂಚಿಯಂತೆ ವ್ಯವಸ್ಥೆಯನ್ನು ಕೈಗೊಳ್ಳಬೇಕು. ಪ್ರತಿ ಪರೀಕ್ಷಾ ಕೇಂದ್ರಗಳಲ್ಲಿ ಮುಖ್ಯ ಅಧೀಕ್ಷಕರಿದ್ದು ಅವರೊಂದಿಗೆ ಉಪಮುಖ್ಯ ಅಧೀಕ್ಷಕರು ಕಾರ್ಯನಿರ್ವಹಿಸುವರು ಹಾಗೂ ಎಲ್ಲಾ ಪರೀಕ್ಷಾ ಕೇಂದ್ರಗಳಿಗೆ ವಿಶೇಷ ಜಾಗೃತ ದಳ ಹಾಗೂ ಪ್ರಶ್ನೆ ಪತ್ರಿಕೆಗಳ ಸ್ವೀಕರಿಸುವ ಮತ್ತು ಕೇಂದ್ರಗಳಿಗೆ ರವಾನಿಸುವ ತಂಡಗಳು, ಬಿಗಿ ಪೊಲೀಸ್ ಬಂದೋಬಸ್ತ್‌ನಲ್ಲಿ ಕಾರ್ಯನಿರ್ವಹಿಸುತ್ತವೆ. ಈ ಸಮಯದಲ್ಲಿ ಅತ್ಯಂತ ಜವಾಬ್ದಾರಿ ಹಾಗೂ ಕಾಳಜಿಯಿಂದ ಕಾರ್ಯನಿರ್ವಸಬೇಕು. ಪರೀಕ್ಷಾ ಕೇಂದ್ರಗಳ ಸುತ್ತಲೂ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ. ನಿಷೇಧಾಜ್ಞೆ ಉಲ್ಲಂಘಿಸುವವರ ಮೇಲೆ ಕಠಿಣ ಕ್ರಮಕೈಗೊಳ್ಳಬೇಕು ಎಂದು ಎಚ್ಚರಿಕೆ ನೀಡಿದ್ದಾರೆ.
ಪರೀಕ್ಷಾ ಕೊಠಡಿಯೊಳಗೆ ಮೊಬೈಲ್ ಬಳಕೆ, ಇ ಕ್ಯಾಮರಾ, ಲ್ಯಾಪ್‌ಟಾಪ್ ಹಾಗೂ ಎಲೆಕ್ಟ್ರಾನಿಕ್ ಉಪಕರಣಗಳನ್ನು ತೆಗೆದುಕೊಂಡು ಹೋಗುವುದು ಹಾಗೂ ಬಳಕೆ ಮಾಡುವುದನ್ನು ನಿಷೇಧಿಸಲಾಗಿದೆ. ಎಲ್ಲ ಪರೀಕ್ಷಾ ಕೇಂದ್ರಗಳಲ್ಲೂ ಸಿಸಿ ಕ್ಯಾಮರಾ ಅಳವಡಿಸಲು ಸೂಚಿಸಲಾಗಿದೆ. ಇವುಗಳ ಕಾರ್ಯನಿರ್ವಹಣೆ ಕುರಿತು ಎಚ್ಚರ ವಹಿಸಬೇಕು ಎಂದು ತಿಳಿಸಿದ್ದಾರೆ.
ಈಗಾಗಲೇ ಎಸ್.ಎಸ್.ಎಲ್.ಸಿ., ಪಿ.ಯು.ಸಿ. ಹಾಗೂ ಕೆಪಿಎಸ್‍ಸಿ ಪರೀಕ್ಷೆಗಳನ್ನು ಕೋವಿಡ್ ಮಾರ್ಗ ಸೂಚಿ ಅನುಸಾರ ಯಶಸ್ವಿಯಾಗಿ ನಡೆಸಲಾಗಿದೆ. ಇದೇ ಮಾದರಿಯಲ್ಲಿ ಕಟ್ಟುನಿಟ್ಟಿನ ಕ್ರಮಗಳೊಂದಿಗೆ ಎಲ್ಲ ವಿದ್ಯಾರ್ಥಿಗಳಿಗೆ ಥರ್ಮಲ್ ಸ್ಕ್ಯಾನಿಂಗ್ ಹಾಗೂ ಮಾಸ್ಕ್ ಧರಿಸುವುದು ಕಡ್ಡಾಯವಾಗಿದೆ. ಸಾಮಾಜಿಕ ಅಂತರ ಕಾಯ್ದುಕೊಂಡು ಪರೀಕ್ಷೆ ಬರೆಯಬೇಕಾಗಿದೆ. ಈ ನಿಟ್ಟಿನಲ್ಲಿ ಕೊಠಡಿಯಲ್ಲಿ ಆಸನ ವ್ಯವಸ್ಥೆ ಕೈಗೊಳ್ಳಲು ಪರೀಕ್ಷಾ ಕೇಂದ್ರದ ಮುಖ್ಯ ಅಧೀಕ್ಷಕರು ಕ್ರಮವಹಿಸುವಂತೆ ಸೂಚನೆ ನೀಡಿದ್ದಾರೆ.
ಒಂದೊಮ್ಮೆ ಕೋವಿಡ್ ಪಾಸಿಟಿವ್ ಇರುವ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಮುಂದಾದರೆ ಪ್ರತ್ಯೇಕ ಕೊಠಡಿಯಲ್ಲಿ ಅವಕಾಶ ಕಲ್ಪಿಸಲು ಕ್ರಮವಹಿಸುವಂತೆ ಸೂಚನೆ ನೀಡಲಾಗಿದೆ. ಯಾವುದೇ ಕಾರಣಕ್ಕೂ ಗುರುತು ಚೀಟಿ ಇಲ್ಲದ ಸಿಬ್ಬಂದಿಗೆ ಕೊಠಡಿ ಪ್ರವೇಶಕ್ಕೆ ಅವಕಾಶ ಕಲ್ಪಿಸಬೇಡಿ. ಅನಧಿಕೃತ ವ್ಯಕ್ತಿಗಳನ್ನು ಕೇಂದ್ರದೊಳಗೆ ನಿರ್ಬಂಧಿಸಿ ಎಂದು ಸೂಚನೆ ನೀಡಿದ್ದಾರೆ.