ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ಚಿಕ್ಕಬಳ್ಳಾಪುರದ ಅಕ್ರಮ ಕಲ್ಲುಕ್ವಾರಿ ಬಳಿ ಜಿಲೆಟಿನ್ ಸ್ಫೋಟಿಸಿ 6ಮಂದಿ ಜೀವ ಕಳೆದುಕೊಂಡಿರುವುದಕ್ಕೆ ರಾಜ್ಯ ಸರ್ಕಾರದ ಬೇಜವಾಬ್ದಾರಿ ಕಾರಣ. ಸರ್ಕಾರದ ಈ ನಡೆಯಿಂದ ಇನ್ನೆಷ್ಟು ಅಮಾಯಕ ಜೀವಗಳು ಬಲಿಯಾಗಬೇಕು? ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಒಂದು ತಿಂಗಳಲ್ಲಿ ಎರಡು ಬಾರಿ ಇಂಥ ದುರ್ಘಟನೆ ಸಂಭವಿಸಿದೆ. ಶಿವಮೊಗ್ಗದಲ್ಲಿನ ಸ್ಫೋಟ ಸಮಯದಲ್ಲಿ ಸ್ಪೋಟಕಗಳ ನಿರ್ವಹಣೆ ಬಗ್ಗೆ ಒಂದು ಸುರಕ್ಷಿತ ವ್ಯವಸ್ಥೆ ನಿರ್ಮಿಸಬೇಕು. ನೀತಿ-ನಿಯಮಗಳ ಕಟ್ಟುನಿಟ್ಟಿನ ಕ್ರಮಕೈಗೊಳ್ಳಬೇಕು ಎಂದು ನಾನು ಹೇಳಿದ್ದೆ.
ಆದರೆ ತನ್ನ ಆಂತರಿಕ ಸಮಸ್ಯೆಗಳಲ್ಲಿ ಮುಳುಗಿಹೋಗಿರುವ ಸರ್ಕಾರಕ್ಕೆ ಈ ಬಗ್ಗೆ ಗಮನಹರಿಸಲು ಸಾಧ್ಯವಾಗಿಲ್ಲ. ಮಾಧ್ಯಮಗಳ ಮುಂದೆ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದ್ದು ಬಿಟ್ಟರೆ ಯಾವುದೇ ಕ್ರಮ ಕೈಗೊಳ್ಳಲಿಲ್ಲ. ಕ್ರಮ ಕೈಗೊಂಡಿದ್ದರೆ ಇಂಥ ದುರ್ಘಟನೆ ಮರುಕಳಿಸುತ್ತಿರಲಿಲ್ಲ ಎಂದು ಕಿಡಿಕಾರಿದರು.
ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಎನ್ನುವ ಮಾತು ಹಾಸ್ಯಸ್ಪದವಾಗಿದೆ. ಹೇಳಿಕೆ ನೀಡುವ ಸರ್ಕಾರದ ಪ್ರತಿನಿಧಿಗಳು ಜೋಕರ್ ಗಳಂತೆ ಕಾಣುತ್ತಿದ್ದಾರೆ. ಇದರ ಪರಿಣಾಮವೇ ಚಿಕ್ಕಬಳ್ಳಾಪುರದಲ್ಲಿ ಆರು ಮುಗ್ಧ ಜೀವಗಳು ಬಲಿಯಾಗಿರುವುದು. ಅಕ್ರಮ ಗಣಿಗಾರಿಕೆ ನಿಯಂತ್ರಣ ಮಾಡುತ್ತೇವೆ ಎನ್ನುವ ರಾಜ್ಯ ಸರ್ಕಾರ ಆ ನಿಟ್ಟಿನಲ್ಲಿ ಕಾರ್ಯಪ್ರವೃತ್ತವಾಗಿದೆ ಎಂಬುದಕ್ಕೆ ಈ ದುರಂತವೇ ಸಾಕ್ಷಿ ಎಂದರು.
ಈ ಸರ್ಕಾರ ಹೇಳುವುದೊಂದು ಮಾಡುವುದೊಂದು ಎಂದು ಟೀಕಿಸಿದ ಅವರು, ಸರ್ಕಾರ ಮೃತರ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕು. ಘಟನೆಗೆ ಕಾರಣವಾದ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು. ಜತೆಗೆ ಇನ್ನಾದರೂ ಎಚ್ಚೆತ್ತುಕೊಂಡು ಅಮಾಯಕ ಜೀವಗಳು ಬಲಿಯಾಗದಂತೆ ನೋಡಿಕೊಳ್ಳಬೇಕು ಎಂದು ಆಗ್ರಹಿಸಿದರು.