ವಿಜಯಪಥ ಸಮಗ್ರ ಸುದ್ದಿ
ಕಲಬುರಗಿ: ರಾಜ್ಯ ಸರ್ಕಾರದ ಸಚಿವ ಸಂಪುಟದಲ್ಲಿ ಪ್ರಾದೇಶಿಕ ಅಸಮತೋಲನವಿದೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜೇಂದ್ರ ಒಪ್ಪಿಕೊಂಡಿದ್ದಾರೆ.
ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬಿಎಸ್‌ವೈ ಪುತ್ರ ವಿಜಯೇಂದ್ರ, ಮುಖ್ಯಮಂತ್ರಿ ಯಡಿಯುರಪ್ಪ ಅವರು ಸಂಪುಟದಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶಕ್ಕೆ ಸರಿಯಾದ ಪ್ರಾತಿನಿಧ್ಯ ನೀಡಲು ಬಯಸಿದ್ದರೂ, ಬಿಜೆಪಿಯನ್ನು ಅಧಿಕಾರಕ್ಕೆ ತರಲು ಕೆಲವು ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರು ರಾಜೀನಾಮೆ ನೀಡಿದ್ದರಿಂದ ಅದು ಸಾಧ್ಯವಾಗಿಲ್ಲ ಮತ್ತು ಮುಂದಿನ ದಿನಗಳಲ್ಲಿ ಸಿಎಂ ಈ ಸಮಸ್ಯೆಯನ್ನು ಪರಿಹರಿಸಲಿದ್ದಾರೆ ಎಂದು ಹೇಳಿದರು.
ರಾಜೀನಾಮೆ ನೀಡಿ ನಮ್ಮ ಪಕ್ಷಕ್ಕೆ ಬಂದವರಿಗೆ ಸ್ಥಾನಮಾನ ಕಲ್ಪಿಸುವುದು ಪಕ್ಷದ ಕರ್ತವ್ಯವಾಗಿತ್ತು. ಹೀಗಾಗಿ ಅವರಿಗೆ ಸಂಪುಟದಲ್ಲಿ ಅವಕಾಶ ಕಲ್ಪಿಸಲಾಗಿದೆ ಹೇಳಿದ್ದಾರೆ.
ಇನ್ನು ನಿನ್ನೆ ನಡೆದ ಸಂಪುಟ ಸಭೆಯಲ್ಲಿ ಕೆಲವು ಸಚಿವರು ಗೈರಾಗಿರುವ ಬಗ್ಗೆ ಪ್ರತಿಕ್ರಿಯಿಸಿ, ಅದು ವೈಯಕ್ತಿಕ ಕಾರಣಗಳಿಂದ ಎಂದ ಅವರು, ಸಿಎಂ ಅವರೊಂದಿಗೆ ಮಾತನಾಡುತ್ತಾರೆ ಮತ್ತು ಅವರ ಸಮಸ್ಯೆಗಳನ್ನು ಪರಿಹರಿಸುತ್ತಾರೆ ಎಂದರು.
ಮುಂಬರುವ ಬಸವಕಲ್ಯಾಣ ಕ್ಷೇತ್ರದ ಉಪಚುನಾವಣೆಯಲ್ಲಿ ನೀವು ಸ್ಪರ್ಧಿಸುತ್ತಿರಾ? ಎಂಬ ಪ್ರಶ್ನೆಗೆ, ಬಿಜೆಪಿ ಹೈಕಮಾಂಡ್ ಬಸವಕಲ್ಯಾಣ ಅಭ್ಯರ್ಥಿಯನ್ನು ನಿರ್ಧರಿಸುತ್ತದೆ ಮತ್ತು ಹೈಕಮಾಂಡ್ ನಿರ್ಧಾರಕ್ಕೆ ಬದ್ಧರಾಗಿ ಕೆಲಸ ಮಾಡುತ್ತೇನೆ ಎಂದು ತಿಳಿಸಿದರು.