ಚಿಕ್ಕಮಗಳೂರು: ಎಲ್ಲಾ ವರ್ಗದ ಕಡು ಬಡವರಿಗೆ ಸೂರು ಕಲ್ಪಿಸುವ ನಿಟ್ಟಿನಲ್ಲಿ ಮುಂದಿನ ಎರಡು ವರ್ಷಗಳ ಅವಧಿಯಲ್ಲಿ ರಾಜ್ಯದಲ್ಲಿ 10 ಲಕ್ಷ ಮನೆಗಳ ನಿರ್ಮಾಣ ಮಾಡುವ ಗುರಿ ಹೊಂದಲಾಗಿದೆ ಎಂದು ವಸತಿ ಸಚಿವ ವಿ. ಸೋಮಣ್ಣ ಹೇಳಿದರು.
ಜಿಲ್ಲಾ ಪಂಚಾಯಿತಿ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ವಸತಿ ಇಲಾಖೆ ವ್ಯಾಪ್ತಿಯ ಕರ್ನಾಟಕ ಗೃಹ ಮಂಡಳಿ, ರಾಜೀವ್‌ಗಾಂಧಿ ವಸತಿ ನಿಗಮ ಹಾಗೂ ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿಯ ವಿವಿಧ ವಸತಿ ಯೋಜನೆಗಳ ಅನುಷ್ಠಾನ, ಅಭಿವೃದ್ಧಿ ಕಾಮಗಾರಿ ಕುರಿತು ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ದೇಶದ ಪ್ರಧಾನ ಮಂತ್ರಿಗಳ ಆಶಯದಂತೆ ಎಲ್ಲಾ ವರ್ಗದಲ್ಲಿನ ವಸತಿ ರಹಿತ ಕಡುಬಡವರಿಗೆ ಸೂರು ಒದಗಿಸುವ ಉದ್ದೇಶದಿಂದ ರಾಜ್ಯದಲ್ಲಿ ಮುಂದಿನ 2 ವರ್ಷಗಳ ಅವಧಿಯಲ್ಲಿ ವಿವಿಧ ಯೋಜನೆ ಅಡಿಯಲ್ಲಿ 10 ಲಕ್ಷಕ್ಕೂ ಹೆಚ್ಚು ಮನೆಗಳ ನಿರ್ಮಾಣ ಮಾಡುವ ಗುರಿ ಹೊಂದಲಾಗಿದ್ದು ಜಿಲ್ಲೆಯಲ್ಲಿ ಬಾಕಿ ಇರುವ ಮನೆ ನಿರ್ಮಾಣ ಕಾಮಗಾರಿಗಳನ್ನು ನಿಗದಿತ ಕಾಲದೊಳಗೆ ಸಂಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲೆಯಲ್ಲಿ ಅತಿವೃಷ್ಟಿಯಿಂದಾಗಿ ಮನೆಕಳೆದುಕೊಂಡವರ ಮನೆ ನಿರ್ಮಾಣಕ್ಕೆ ಮೊದಲ ಆದ್ಯತೆ ನೀಡಬೇಕು. ಕಳೆದ ಬಾರಿಯ ಪ್ರವಾಹ, ಭೂಕುಸಿತ ಒಳಗೊಂಡು ಅತಿವೃಷ್ಟಿಯಿಂದಾಗಿ 2525 ಮನೆಗಳು ಹಾನಿಯಾಗಿದ್ದು ಇದರಲ್ಲಿ ಸಂಪೂರ್ಣ ಹಾನಿ ಹಾಗೂ ಭಾಗಶಃ ಹಾನಿಗೊಳಗಾದ ಮನೆಗಳ ಪುನರ್ ನವೀಕರಣಕ್ಕಾಗಿ ಹಣ ಬಿಡುಗಡೆಗೊಳಿಸಲಾಗಿದೆ ಎಂದ ಅವರು ಆರ್ಥಿಕತೆಯ ಕಾರಣದಿಂದಾಗಿ ಯಾವುದೇ ಮನೆಗಳ ನಿರ್ಮಾಣ ವಿಳಂಬವಾಗದಂತೆ ನೋಡಿಕೊಳ್ಳಬೇಕು ಜತೆಗೆ ಪ್ರವಾಹ ಪರಿಸ್ಥಿತಿಯಿಂದಾಗಿ ಸಂಪೂರ್ಣ ಮನೆ ಕಳೆದುಕೊಂಡು ಬಾಡಿಗೆ ಮನೆಯಲ್ಲಿ ವಾಸವಿರುವವರಿಗೆ ಬಾಕಿ ಬಾಡಿಗೆ ಹಣ ಪಾವತಿಸಲು ಕ್ರಮವಹಿಸಲಾಗುವುದು ಎಂದರು.
ರಾಜ್ಯದಲ್ಲಿ ಅಲೆಮಾರಿ ಹಾಗೂ ಅರೆಅಲೆಮಾರಿ ಕುಟುಂಬಗಳಿಗೆ ವಸತಿ ಕಲ್ಪಿಸುವ ನಿಟ್ಟಿನಲ್ಲಿ 70 ಸಾವಿರ ಮನೆಗಳು ಹಾಗೂ ಗ್ರಾಮಪಂಚಾಯಿತಿ ಮಟ್ಟದಲ್ಲಿ ವಸತಿ ರಹಿತ ಹಾಗೂ ನಿವೇಶನ ಹೊಂದಿಲ್ಲದವರನ್ನು ಗ್ರಾಮಪಂಚಾಯಿತಿ ಅಧಿಕಾರಿಗಳು ಹಾಗೂ ತಾಲೂಕು ಕಾರ್ಯನಿರ್ವಾಹಕ ಅಧಿಕಾರಿಗಳು ಅರ್ಹ ಫಲಾನುಭವಿಗಳನ್ನು ಗುರ್ತಿಸಿ ಪಟ್ಟಿ ಮಾಡಿ ವಿವಿಧ ಯೋಜನೆಗಳಲ್ಲಿ ಮನೆ ನಿರ್ಮಾಣಕ್ಕೆ ಅವಕಾಶ ಕಲ್ಪಿಸಿಕೊಡಬೇಕು ಎಂದು ತಿಳಿಸಿದರು.
ಪ್ರವಾಸೋದ್ಯಮ, ಕನ್ನಡ ಮತ್ತು ಸಂಸ್ಖೃತಿ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಿ.ಟಿ. ರವಿ ಮಾತನಾಡಿ ಗ್ರಾಮಠಾಣಾ ವ್ಯಾಪ್ತಿಯಲ್ಲಿನ ಜಾಗವನ್ನು ಅನಧೀಕೃತವಾಗಿ ಒತ್ತುವರಿ ಮಾಡಿ ಅಕ್ರಮ ಖಾತೆಗಳನ್ನು ಮಾಡಿಕೊಂಡಿರುವ ಬಗ್ಗೆ ದೂರುಗಳಿದ್ದು ಈ ಬಗ್ಗೆ ತಾಲ್ಲೂಕು ಕಾರ್ಯನಿರ್ವಾಹಕ ಅಧಿಕಾರಿಗಳು ಸರ್ವೇ ಕಾರ್ಯ ನಡೆಸಿ ಪಟ್ಟಿ ಮಾಡಿ ಅಂತಹವುಗಳಿದ್ದಲ್ಲಿ ರದ್ದುಪಡಿಸಿ ಆ ಜಾಗದಲ್ಲಿ ವಸತಿ ರಹಿತರಿಗೆ ನಿವೇಶನ ಹಂಚಿಕೆ ಮಾಡುವಂತೆ ಸೂಚಿಸಿದರು.
ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಸುಜಾತ ಕೃಷ್ಣಪ್ಪ, ಶಾಸಕರುಗಳಾದ ಎಂ.ಪಿ. ಕುಮಾರಸ್ವಾಮಿ, ಟಿ.ಡಿ ರಾಜೇಗೌಡ, ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷ ಬಿ.ಜೆ ಸೋಮಶೇಖರಪ್ಪ, ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್, ಅಪರ ಜಿಲ್ಲಾಧಿಕಾರಿ ಡಾ. ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.
Uper
Super