ಮುಖ್ಯಮಂತ್ರಿ ಯಡಿಯೂರಪ್ಪಗೆ ಕೊರೊನಾ ಪಾಸಿಟಿವ್ ದೃಢ: ಮಣಿಪಾಲ್ ಆಸ್ಪತ್ರೆಗೆ ದಾಖಲು
ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ರಾಜ್ಯದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಮತ್ತೆ ಕೊರೊನಾ ಸೋಂಕು ದೃಢಪಟ್ಟಿದ್ದು, ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಕೊರೊನಾ ಪರೀಕ್ಷಾ ವರದಿಯಲ್ಲಿ ಪಾಸಿಟಿವ್ ಎಂದು ಬಂದಿದೆ. ಸ್ವಲ್ಪ ಮಟ್ಟದಲ್ಲಿ ರೋಗಲಕ್ಷಣಗಳು ಕಾಣಿಸಿಕೊಂಡಿದ್ದು, ಮುನ್ನೆಚ್ಚರಿಕೆ ದೃಷ್ಟಿಯಿಂದ ಕುಟುಂಬದವರು ಮತ್ತು ವೈದ್ಯರ ಸಲಹೆಯಂತೆ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಇಂದು ಮಧ್ಯಾಹ್ನ ಬೆಂಗಳೂರಿನ ಎಂ.ಎಸ್. ರಾಮಯ್ಯ ಆಸ್ಪತ್ರೆಗೆ ತಪಾಸಣೆಗೆ ಹಾಜರಾಗಿದ್ದರು. ಅಲ್ಲಿ ನಿಗದಿಯಂತೆ ಅವರನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಿದಾಗ ಪಾಸಿಟಿವ್ ಬಂದಿದ್ದು ಇದೀಗ ಅವರನ್ನು ಮಣಿಪಾಲ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.
ಮಣಿಪಾಲ್ ಆಸ್ಪತ್ರೆಯಲ್ಲಿ ಫ್ಯಾಮಿಲಿ ವೈದ್ಯರು ಇರುವುದರಿಂದ ಸಿಎಂ ಅವರನ್ನು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲು ಕುಟುಂಬದವರು ಹೇಳಿದ್ದರಿಂದ ಮಣಿಪಾಲ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.
ಕಳೆದ ವರ್ಷ ಆಗಸ್ಟ್ 2ರಂದು ಸಿಎಂ ಬಿಎಸ್ವೈ ಅವರಿಗೆ ಕೊರೊನಾ ಪಾಸಿಟಿವ್ ಆಗಿತ್ತು. ಅಂದು ಅವರೆ ಸ್ವತಃ ಟ್ವೀಟ್ ಮಾಡಿ ನನ್ನ ಕೊರೊನಾ ಪರೀಕ್ಷಾ ವರದಿಯಲ್ಲಿ ಪಾಸಿಟಿವ್ ಎಂದು ಬಂದಿದ್ದು, ರೋಗಲಕ್ಷಣಗಳು ಇಲ್ಲದಿದ್ದರೂ ಮುನ್ನೆಚ್ಚರಿಕೆ ದೃಷ್ಟಿಯಿಂದ, ವೈದ್ಯರ ಸಲಹೆಯಂತೆ ಆಸ್ಪತ್ರೆಗೆ ದಾಖಲಾಗುತ್ತಿದ್ದೇನೆ. ಕಳೆದ ಕೆಲವು ದಿನಗಳಲ್ಲಿ ನನ್ನ ಸಂಪರ್ಕಕ್ಕೆ ಬಂದಿರುವವರು, ಕ್ವಾರಂಟೈನ್ ನಲ್ಲಿದ್ದು ಮುಂಜಾಗ್ರತೆ ವಹಿಸಿ ಎಂದು ಕೋರಿದ್ದರು.
ಇಂದು ಎರಡನೇ ಬಾರಿಗೆ ಕೊರೊನಾ ಸೋಂಕು ತಗುಲಿದೆ. ಇದಕ್ಕೂ ಮುನ್ನಾ ರಾಜ್ಯದ ಮೂರು ಕಡೆ ಉಪಚುನಾವಣೆ ಪ್ರಚಾರದಲ್ಲಿ ತೊಡಗಿದ್ದರು. ಹೀಗಾಗಿ ನಿನ್ನೆ ಜ್ವರ ಕಾಣಿಸಿಕೊಂಡಿತ್ತು. ಆದರೂ ಚುನಾವಣೆ ಪ್ರಚಾರ ಮುಂದುವರಿಸಿ ನಿನ್ನೆ ಸಂಜೆ ಬೆಂಗಳೂರಿಗೆ ವಾಪಸ್ ಆಗಿದ್ದರು. ಇನ್ನು ಇವರ ಸಂಪರ್ಕಕ್ಕೆ ಬಂದಿದ್ದ ಹಲವರು ಕೂಡ ಈಗ ಪರೀಕ್ಷೆಗೆ ಒಳಪಡಬೇಕಿದೆ.
ಒಟ್ಟಾರೆ ಇಂದು ಕೂಡ ಹಲವು ಅಧಿಕಾರಿಗಳು ಮತ್ತು ಆರೋಗ್ಯ ಸಚಿವರೊಂದಿಗೆ ಸಭೆ ನಡೆಸಿದ್ದರು. ಜತೆಗೆ ಪತ್ರಕರ್ತರು ಈ ವೇಳೆ ಸ್ಥಳದಲ್ಲಿದ್ದರು. ಹೀಗಾಗಿ ಹಲವು ಮಂದಿ ಕೋವಿಡ್ ಟೆಸ್ಟ್ಗೆ ಒಳಪಡಬೇಕಿದೆ.
ಜ್ವರದ ಹಿನ್ನಲೆಯಲ್ಲಿ ಇಂದು ತಪಾಸಣೆಗೆ ಒಳಪಟ್ಟಾಗ ಕೋವಿಡ್ ಪರೀಕ್ಷಾ ವರದಿ ಪಾಸಿಟಿವ್ ಬಂದಿರುತ್ತದೆ. ಅಲ್ಪ ಪ್ರಮಾಣದಲ್ಲಿ ರೋಗ ಲಕ್ಷಣಗಳಿರುವುದರಿಂದ ವೈದ್ಯರ ಸಲಹೆಯಂತೆ ಮಣಿಪಾಲ್ ಆಸ್ಪತ್ರೆಗೆ ದಾಖಲಾಗುತ್ತಿದ್ದೇನೆ. ಕಳೆದ ಕೆಲವು ದಿನಗಳಲ್ಲಿ ಸಂಪರ್ಕಕ್ಕೆ ಬಂದಿದ್ದವರು ಕ್ವಾರಂಟೈನ್ ನಲ್ಲಿದ್ದು, ಒಮ್ಮೆ ಪರೀಕ್ಷಿಸಿಕೊಳ್ಳಿ ಎಂದು ಕೋರುತ್ತೇನೆ
— B.S. Yediyurappa (@BSYBJP) April 16, 2021