ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ರಾಜ್ಯದಲ್ಲಿ ಲಾಕ್ಡೌನ್ ಘೋಷಣೆ ಮಾಡಿರುವ ಕಾರಣ ವಿಶೇಷ ಪ್ಯಾಕೇಜ್ ಘೋಷಣೆ ಮಾಡುವ ಚಿಂತನೆ ಇಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ
ಮಂಗಳವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಕೋವಿಡ್ ಸ್ವಲ್ಪಮಟ್ಟಿಗೆ ನಿಯಂತ್ರಣಕ್ಕೆ ಬರುತ್ತಿದ್ದು ಪೂರ್ಣಪ್ರಮಾಣದ ನಿಯಂತ್ರಣಕ್ಕೆ ಸಾರ್ವಜನಿಕರು ಸಹಕಾರ ನೀಡಬೇಕೆಂದು ಮನವಿ ಮಾಡಿದರು.
ಕರ್ನಾಟಕದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಿದ್ದರೂ ನಿಯಂತ್ರಣಕ್ಕೆ ಬರುತ್ತಿದೆ. ಕೊರೊನಾ ನಿಯಂತ್ರಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಎಲ್ಲ ರೀತಿಯ ಸಹಕಾರ ನೀಡುತ್ತಿದೆ. ಪ್ರಧಾನಿ ಅವರು ಈ ಬಗ್ಗೆ ಮಾತನಾಡಿ ರಾಜ್ಯದ ಅಗತ್ಯತೆಯನ್ನು ವಿಚಾರಿಸಿದ್ದಾರೆ ಎಂದು ತಿಳಿಸಿದರು.
ಇನ್ನು ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಗುಣಮುಖ ಹೊಂದಿದವರು ಮನೆಗೆ ಹೋಗದೆ ಆಸ್ಪತ್ರೆಯಲ್ಲಿ ಉಳಿದಿರುವ ಪ್ರಕರಣಗಳು ಇವೆ. ವೈದ್ಯರು ಹೇಳಿದರು ಆಸ್ಪತ್ರೆ ಬಿಟ್ಟು ಹೋಗಲು ತಯಾರಿಲ್ಲ. ಈ ರೀತಿ 503 ಮಂದಿ ಗುಣಮುಖರಾದವರನ್ನು ಪತ್ತೆ ಮಾಡಲಾಗಿದೆ. ಅವರನ್ನು ಮನೆಗೆ ಕಳುಹಿಸಲಾಗುವುದು. ಇದರಿಂದ ಹಾಸಿಗೆ ಅಗತ್ಯವಿರುವ ರೋಗಿಗಳಿಗೆ ಅನುಕೂಲವಾಗಲಿದೆ ಎಂದು ಯಡಿಯೂರಪ್ಪ ಹೇಳಿದರು.
ರಾಜ್ಯದ ಕೋವಿಡ್ ವಾರ್ ರೂಂ ದೇಶದಲ್ಲಿ ಮಾದರಿಯಾಗುವ ರೀತಿಯಲ್ಲಿ ಕಾರ್ಯ ನಿರ್ವಹಿಸುತ್ತಿದೆ. ಇಂತಹ ವಾರ್ ರೂಂ ದೇಶದ ಯಾವುದೇ ಭಾಗದಲ್ಲೂ ಇಲ್ಲ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಬಿಜೆಪಿಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರ ಭೇಟಿಯಲ್ಲಿ ಯಾವುದೇ ವಿಶೇಷವಿಲ್ಲ. ಕಾರ್ಯನಿರ್ವಹಣೆ ಸಂಬಂಧಿಸಿದಂತೆ ಕೇಂದ್ರದಿಂದ ಅಗತ್ಯವಿರುವ ನೆರವು ನೀಡುವ ಬಗ್ಗೆ, ರಾಜ್ಯದ ಪರಿಸ್ಥಿತಿಯ ಕುರಿತು ಮಾಹಿತಿ ಪಡೆದರು ಎಂದರು.