ವಿಜಯಪಥ ಸಮಗ್ರ ಸುದ್ದಿ
ಮೈಸೂರು: ಕೆ.ಆರ್. ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿ ವಾರ್ಡ್ ಗಳ ಲಭ್ಯತೆ, ಕೋವಿಡ್ ಸೋಂಕಿತರಿಗೆ ನೀಡಲಾಗುತ್ತಿರುವ ಚಿಕಿತ್ಸೆ, ಔಷಧಗಳ ಲಭ್ಯತೆ, ಊಟ-ಉಪಾಹಾರ ಸರಬರಾಜು ಸೇರಿದಂತೆ ಕುಂದು-ಕೊರತೆಗಳ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವ ಎಸ್ ಟಿ ಸೋಮಶೇಖರ್ ಗೌಡ ಪರಿಶೀಲನೆ ನಡೆಸಿದರು.
ಮಂಗಳವಾರ ಆಸ್ಪತ್ರೆಗೆ ಭೇಟಿ ನೀಡಿದ ಅವರು, ವೈದ್ಯಾಧಿಕಾರಿಗಳು ಹಾಗೂ ಸೋಂಕಿತರಿಂದ ಮಾಹಿತಿ ಪಡೆದು, ಯಾವುದೇ ಸಮಸ್ಯೆಗಳಿದ್ದರೆ ನೇರವಾಗಿ ತಮ್ಮ ಗಮನಕ್ಕೆ ತರಬೇಕೆಂದು ತಿಳಿಸಿದರು.
ಕೋವಿಡ್ ಪ್ರಕರಣಗಳು ದಿನೇದಿನೇ ಹೆಚ್ಚಳಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಹಲವು ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳುತ್ತಿದೆ. ಔಷಧಗಳು ಸೇರಿದಂತೆ ಯಾವುದೇ ನ್ಯೂನ್ಯತೆಗಳು, ಸಮಸ್ಯೆಗಳಿದ್ದರೂ ನಮ್ಮ ಗಮನಕ್ಕೆ ತಂದರೆ ಕೂಡಲೇ ಸರ್ಕಾರದ ಗಮನಕ್ಕೆ ತಂದು ಸಮಸ್ಯೆ ಬಗೆಹರಿಸಲಾಗುವುದು ಎಂದು ಹೇಳಿದರು.
ಈಗ ಕಾಡುತ್ತಿರುವ ಕೋವಿಡ್ ಎರಡನೇ ಅಲೆ ಬಹಳ ಗಂಭೀರವಾಗಿದೆ. ಹೀಗಾಗಿ ಸಾರ್ವಜನಿಕರು ಸಹ ಇದನ್ನು ಅಷ್ಟೇ ಗಂಭೀರವಾಗಿ ಪರಿಗಣಿಸಬೇಕು. ಸ್ವಯಂಪ್ರೇರಿತವಾಗಿ ಸರ್ಕಾರದ ಜೊತೆಗೆ ಕೈಜೋಡಿಸಿ ನಮ್ಮ ನಾಡನ್ನು ಕೊರೊನಾ ಮುಕ್ತ ಮಾಡುವಲ್ಲಿ ಶ್ರಮವಹಿಸಬೇಕು ಎಂದು ಮನವಿ ಮಾಡಿದರು.
ಯಾರಿಗೇ ಸಹ ರೋಗ ಲಕ್ಷಣಗಳು ಕಂಡುಬಂದರೆ ತಕ್ಷಣ ಆಸ್ಪತ್ರೆಗಳಲ್ಲಿ ಕೋವಿಡ್ ಪರೀಕ್ಷೆ ಮಾಡಿಸಿಕೊಂಡು ಸೋಂಕು ಉಲ್ಬಣವಾಗದಂತೆ ನೋಡಿಕೊಳ್ಳಬೇಕು. ಜೊತೆಗೆ ಅನಾವಶ್ಯಕವಾಗಿ ಹೊರಗಡೆ ಯಾರೂ ಸಂಚರಿಸಬಾರದು. ಎಲ್ಲರೂ ಕಡ್ಡಾಯವಾಗಿ ಮಾಸ್ಕ್ ಗಳನ್ನು ಧರಿಸಿ, ಆಗಾಗ ಕೈಗಳನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು. ಜೊತೆಗೆ ಸಾಮಾಜಿಕ ಅಂತರವನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಹೇಳಿದರು.
ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ, ಸಂಸದ ಪ್ರತಾಪ್ ಸಿಂಹ, ಶಾಸಕ ಎಲ್.ನಾಗೇಂದ್ರ, ಮುಖಂಡರು, ಜನಪ್ರತಿನಿಧಿಗಳು ಹಾಗೂ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.