NEWSನಮ್ಮರಾಜ್ಯ

ಜನರಿಗೆ ನೆರವು ನೀಡಬೇಕಾಗಿ ಬರುತ್ತದೆಯೋ ಎಂಬ ದುರಾಲೋಚನೆ: ಲಾಕ್ ಡೌನ್ ಎಂದು ಧೈರ್ಯದಿಂದ ಹೇಳದ ಸರ್ಕಾರ-ಎಚ್‌ಡಿಕೆ ಆಕ್ರೋಶ

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ಲಾಕ್‌ಡೌನ್‌ ಮಾಡಿ ಎಂದು ನಾವು ಹೇಳಿದ್ದು, ಜನರಿಗೆ ದನಕ್ಕೆ ಬಡಿದಂತೆ ಬಡಿಯಲು ಅಲ್ಲ, ಕೊರೊನಾ ಸೋಂಕು ನಿಯಂತ್ರಿಸುವ ನಿಟ್ಟಿನಲ್ಲಿ ಮತ್ತು ಜನ ಜೀವನಕ್ಕೆ ಆಗುವ ತೊಂದರೆಗಳಿಗೆ ಪರಿಹಾರ ಕ್ರಮಗಳಿರಬೇಕು ಎಂದು. ಅದನ್ನೇ ಮರೆತು ಲಾಕ್‌ಡೌನ್‌ ಮಾಡಿರುವುದರಿಂದ ನಾಡಿನ ಜನತೆ ಸಂಕಷ್ಟಕ್ಕೆ ಸಿಲುಕುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅಸಮಾಧಾನ ಹೊರಹಾಕಿದ್ದಾರೆ.

ನಾಡಿನ ಬಡ ಜನರಿಗೆ ಬೇಕಾಗಿರುವುದು ಹಣವಲ್ಲಆಹಾರ ಅದನ್ನು ವ್ಯವಸ್ಥೆ ಮಾಡದೆ ಏಕಾಏಕಿ ಲಾಕ್‌ಡೌನ್‌ ಎಂದರೆ, ಇಂಥ ಬಡಜನರು ಒಪ್ಪೊತ್ತಿನ ಅನ್ನಕ್ಕಾಗಿ ಎಲ್ಲಿಗೆ ಹೋಗಬೇಕು. ಅವರಿಗೆ ಅನಾನುಕೂಲ ಮಾಡುವ ಲಾಕ್‌ಡೌನ್‌ ನಮಗೆ ಬೇಡ, ಮೊದಲು ಸಮರೋಪಾದಿಯಲ್ಲಿ ಆಹಾರ ನೀಡುವ ಕ್ರಮ ಕೈಗೊಳ್ಳಿ ಎಂದು ಸಿಎಂ ಬಿಎಸ್‌ವೈ ಅವರಲ್ಲಿ ಮನವಿ ಮಾಡಿದ್ದಾರೆ.

ಈ ಕುರಿತು ಸರಣಿ ಟ್ವೀಟ್‌ ಮಾಡಿರುವ ಕುಮಾರಸ್ವಾಮಿ ಅವರು, ಲಾಕ್ ಡೌನ್ ಅಲ್ಲದ ಕಠಿಣ ಲಾಕ್ ಡೌನ್, ಜನ ಹೊರಗೆ ಬಂದರೆ ದನಕ್ಕೆ ಬಡಿದಂತೆ ಬಡಿಯುವ ಲಾಕ್ ಡೌನ್ ಇಂದಿನಿಂದ ಜಾರಿಗೆ ಬರಲಿದೆ. ಜನಸಂಚಾರ ತಡೆಯುವುದೇ ಲಾಕ್ ಡೌನ್ ಎಂದು ಭಾವಿಸಿರುವ ಸರ್ಕಾರ ಸಂಕಷ್ಟದಲ್ಲಿ ನಾಗರಿಕರನ್ನು ಮರೆತಿರುವುದು ದುರಂತ. ನಾವು ಸೂಚಿಸಿದ ಲಾಕ್ ಡೌನ್ ಇದಾಗಿರಲಿಲ್ಲ. ನಾವು ಹೇಳಿದ್ದು ಜನಹಿತದ ಲಾಕ್ ಡೌನ್ ಆಗಿತ್ತು.

ಲಾಕ್ ಡೌನ್ ಮಾಡಿ ಜನರ ಜೀವ ಉಳಿಸಿ ಎಂದು ನಾನು ಮೊದಲೇ ಹೇಳಿದ್ದೆ. ಹಾಗೆ ಹೇಳುವಾಗ ಲಾಕ್ ಡೌನ್ ನಿಂದ ಜನ ಜೀವನಕ್ಕೆ ಆಗುವ ತೊಂದರೆಗಳಿಗೆ ಪರಿಹಾರ ಕ್ರಮಗಳಿರಬೇಕು, ಜನರ ಅಗತ್ಯವನ್ನು ಸರ್ಕಾರ ಭರಿಸಬೇಕೆಂದು ಹೇಳಿದ್ದೆ. ಆದರೆ, ಲಾಕ್ ಡೌನ್ ಸಂದರ್ಭದಲ್ಲಿ ನೀಡಬೇಕಾದ ಪರಿಹಾರ ಕ್ರಮಗಳಿಂದ ವಿಮುಖವಾಗಿರುವ ಸರ್ಕಾರ ಬೇಜವಾಬ್ದಾರಿತನ ತೋರಿದೆ ಎಂದು ಕಿಡಿಕಾರಿದ್ದಾರೆ.

ಜನರಿಗೆ ಎಲ್ಲಿ ಪರಿಹಾರ ನೀಡಬೇಕಾಗುತ್ತದೆಯೋ, ಜೀವನ ನಿರ್ವಹಣೆಗೆ ನೆರವು ನೀಡಬೇಕಾಗಿ ಬರುತ್ತದೆಯೋ ಎಂಬ ದುರಾಲೋಚನೆ ಮಾಡಿರುವ ಸರ್ಕಾರ ಲಾಕ್ ಡೌನ್ ಎಂಬ ಪದವನ್ನು ಧೈರ್ಯದಿಂದ ಹೇಳುತ್ತಲೇ ಇಲ್ಲ. ಕಠಿಣ ನಿಯಮ ಎಂದು ಹೇಳಿ ಲಾಕ್ ಡೌನ್ ನಿಂದ ದೂರ ನಿಂತಿದೆ. ಕೇಂದ್ರವೂ ಇದೇ ಕುತಂತ್ರದ ನಡೆಯನ್ನು ಅನುಸರಿಸಿ ಜವಾಬ್ದಾರಿಯಿಂದ ನುಣುಚಿಕೊಂಡಿದೆ.

ಲಾಕ್ ಡೌನ್ ಎಂದರೆ ಜನ ಹೊರ ಹೋಗಲಾಗದ ಪರಿಸ್ಥಿತಿ. ಬದುಕಿನ ಅಗತ್ಯವನ್ನು ದುಡಿದುಕೊಳ್ಳಲಾಗದ ದುಸ್ಥಿತಿ. ಸರ್ಕಾರವೇ ಇದರ ಹೊಣೆಗಾರ, ಅದಕ್ಕೆ ಸರ್ಕಾರವೇ ಪರಿಹಾರ ನೀಡಬೇಕು ಎಂಬುದೂ ನನ್ನ ನಿಲುವು, ಸಲಹೆ. ಸರ್ಕಾರ ಸಂಪೂರ್ಣ ಲಾಕ್ ಡೌನ್ ಘೋಷಿಸಬೇಕಿತ್ತು ಮತ್ತು ಪರಿಹಾರ ನೀಡಬೇಕಿತ್ತು. ಆದರೆ ಈವರೆಗೆ ಪರಿಹಾರ ಪ್ಯಾಕೇಜ್ ನ ಮಾತೇ ಇಲ್ಲ.

ಮಹಾರಾಷ್ಟ್ರ, ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಕೇಂದ್ರ ಸರ್ಕಾರಕ್ಕೆ ಕಾಯದೇ ಲಾಕ್ ಡೌನ್ ಮಾಡಿವೆ. ಜನರಿಗೆ ಆಹಾರ ಸೇರಿದಂತೆ ಪರಿಹಾರ ಘೋಷಿಸಿವೆ. ಆಂಧ್ರದಲ್ಲಿ ಸೋಂಕಿತರಿಗೆ ಉಚಿತ ಚಿಕಿತ್ಸೆ ಸಿಗುತ್ತಿದೆ. ಇದು ಸರ್ಕಾರಗಳ ಜವಾಬ್ದಾರಿಯುತ ನಡೆ. ಆದರೆ, ಜವಾಬ್ದಾರಿಯಿಂದ ನುಣುಚಿಕೊಳ್ಳುವ ಕೇಂದ್ರದ ದುರ್ನಡೆಯನ್ನು ರಾಜ್ಯ ಅನುಸರಿಸಬಾರದು ಎಂದು ಸಲಹೆ ನೀಡಿದ್ದಾರೆ.

ಮನೆಗಳಿಂದ ಹೊರ ಬರುವ ಜನರ ಮೇಲೆ ದರ್ಪ ಪ್ರದರ್ಶಿಸುವುದನ್ನು ಬಿಟ್ಟು, ಜನ ಹೊರಗೆ ಬಾರದಂತೆ ಅವರ ಅಗತ್ಯಗಳನ್ನು ಪೂರೈಸುವ, ಪರಿಹಾರ ಒದಗಿಸುವ ಕ್ರಮಗಳತ್ತ ಸರ್ಕಾರ ಗಮನಹರಿಸಬೇಕು. ಈ ವಿಚಾರದಲ್ಲಿ ನೆರೆ ರಾಜ್ಯಗಳು ಅನುಸರಿಸುತ್ತಿರುವ ಕ್ರಮಗಳನ್ನು ರಾಜ್ಯ ಅವಲೋಕಿಸಬೇಕು. ಜನರ ಆರೋಗ್ಯ ಎಷ್ಟು ಮುಖ್ಯವೋ ಜನರ ಬದುಕೂ ಅಷ್ಟೇ ಮುಖ್ಯವಾಗಬೇಕು ಎಂದು ಹೇಳಿದ್ದಾರೆ.

Leave a Reply

error: Content is protected !!
LATEST
ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ?