ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ಮಾಯಾನಗರಿ ಬೆಂಗಳೂರಿನಲ್ಲಿ ಮತ್ತೆ ಕೊರೊನಾ ಆತಂಕ ಶುರುವಾಗಿದೆ.
ರಾಜಧಾನಿಯಲ್ಲಿರುವ ಮಂಜುಶ್ರೀ ನರ್ಸಿಂಗ್ ಕಾಲೇಜಿನಲ್ಲಿ ಬರೋಬ್ಬರಿ 40 ಮಂದಿ ವಿದ್ಯಾರ್ಥಿಗಳಿಗೆ ಕೊರೊನಾ ಪಾಸಿಟಿವ್ ಇರುವುದು ದೃಢಪಟ್ಟಿದೆ.
ಕಾಲೇಜಿನಲ್ಲಿ ಒಟ್ಟು 210 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದು, ಅವರಲ್ಲಿ 40 ವಿದ್ಯಾರ್ಥಿಗಳಿಗೆ ಕೊರೊನಾ ದೃಢಪಟ್ಟಿದೆ ಎಂದು ಬಿಬಿಎಂಪಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಇನ್ನು ವಿದ್ಯಾರ್ಥಿಗಳಲ್ಲಿ ಕೊರೊನಾ ಸೋಂಕು ತಗುಲಿರುವುದು ದೃಢಪಡುತ್ತಿದ್ದಂತೆ ಎಚ್ಚೆತ್ತುಕೊಂಡಿರುವ ಬಿಬಿಎಂಪಿ ಆರೋಗ್ಯ ಅಧಿಕಾರಿಗಳು ಸೋಂಕು ಪೀಡಿತ ವಿದ್ಯಾರ್ಥಿಗಳ ಸಂಪರ್ಕದಲ್ಲಿದ್ದ ವಿದ್ಯಾರ್ಥಿಗಳ ಮೇಲೂ ಹೆಚ್ಚಿನ ನಿಗಾವಹಿಸಿದ್ದಾರೆ.
ಚಳಿ ದಿನದಿಂದ ದಿನಕ್ಕೆ ಸ್ವಲ್ಪಮಟ್ಟಿಗೆ ಹೆಚ್ಚಾಗುತ್ತಿರುವುದರಿಂದ ಕೊರೊನಾ ಸೋಂಕು ರಾಜಧಾನಿಯ ಮಂದಿಯಲ್ಲಿ ತುಸು ಹೆಚ್ಚಾಗಿಯೇ ಕಾಣಿಸಿಕೊಳ್ಳುತ್ತಿದೆ. ಇನ್ನು ಬೊಮ್ಮನಹಳ್ಳಿಯಲ್ಲಿರುವ ಬಹುಮಹಡಿ ಕಟ್ಟಡದಲ್ಲಿ 100ಕ್ಕೂ ಹೆಚ್ಚು ಮಂದಿಯಲ್ಲಿ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ.
ಇನ್ನು ಚಿಕ್ಕಪೇಟೆಯ ವ್ಯಾಪಾರಿಗಳಲ್ಲಿ ಏಳು ಮಂದಿಗೆ ಕೊರೊನಾ ಸೋಂಕು ತಗುಲಿರುವುದು ಖಚಿತವಾಗಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರು ಮತ್ತೆ ಕೊರೊನಾ ಹಬ್ ಆಗುತ್ತಿದೆಯೇ ಎಂಬ ಭಯದಲ್ಲಿ ಬದುಕುವಂತಾಗಿದೆ.