ಬೆಂಗಳೂರು: ರಾಜ್ಯದಲ್ಲಿ ಶಾಲೆಗಳ ಪುನಾರಂಭ ಕುರಿತು ಇನ್ನು ಐದು ದಿನಗಳಲ್ಲಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ತಿಳಿಸಿದ್ದಾರೆ.
ಶಿಕ್ಷಣ ಇಲಾಖೆಯ ಅಧಿಕಾರಿಗಳೊಂದಿಗೆ ಬುಧವಾರ ಸಭೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂಗಳವಾರದ ಸಭೆಯಲ್ಲಿ ಶಾಲಾ ಪುನಾರಂಭ ಕುರಿತು ಯಾವುದೇ ನಿರ್ಧಾರ ಕೈಗೊಂಡಿ. ಹೀಗಾಗಿ ಒಂದು ವಾರದೊಳಗೆ ಅಂತಿಮ ನಿರ್ಧಾರಕ್ಕೆ ಬರುವುದಾಗಿ ಹೇಳಿದರು.
ಶಿಕ್ಷಣಕ್ಕೆ ಸಂಬಂಧಿಸಿದ ಎಲ್ಲಾ ಇಲಾಖೆಗಳ ಹಿರಿಯ ಅಧಿಕಾರಿಗಳು ಮತ್ತು ಜಿಲ್ಲಾಧಿಕಾರಿಗಳೊಂದಿಗೆ ಸಭೆ ನಡೆಸಲಾಗುತ್ತದೆ ಮತ್ತು ಸನ್ನಿವೇಶಗಳನ್ನು ಪರಿಶೀಲಿಸಲಾಗುತ್ತಿದೆ. ಎಲ್ಲಾ ವಲಯಗಳಿಂದ ಪ್ರತಿಕ್ರಿಯೆ ಪಡೆದ ನಂತರ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಎಲ್ಲಾ ವಿದ್ಯಾರ್ಥಿಗಳಿಗೆ ಆನ್‌ಲೈನ್ ಶಿಕ್ಷಣವನ್ನು ಪಡೆಯಲು ಸಾಧ್ಯವಿಲ್ಲ, ಅದಕ್ಕಾಗಿಯೇ ನಾವು ಶಾಲೆಗಳನ್ನು ಪುನಃ ತೆರೆಯುವ ಬಗ್ಗೆ ಯೋಚಿಸುತ್ತಿದ್ದೇವೆ. ಹೀಗಾಗಿ ಹಂತ ಹಂತವಾಗಿ ಶಾಲೆಗಳನ್ನು ಮತ್ತೆ ತೆರೆದರೆ ಉತ್ತಮ ಎಂದು ತಜ್ಞರು ಸೂಚಿಸಿದ್ದಾರೆ ಎಂದು ಹೇಳಿದ್ದಾರೆ.