ಧಾರವಾಡ: ಜಿಲ್ಲೆಯಲ್ಲಿ ಎರಡು ವರ್ಷಗಳ ಕಾಲ ಸಲ್ಲಿಸಿದ ಸೇವಾನುಭವ ಅನನ್ಯವಾದುದು. ಕೆಲಸದಲ್ಲಿ ಶ್ರದ್ಧೆಯಿದ್ದರೆ ಮಾತ್ರ ಸಂತೃಪ್ತಿ ಸಿಗುತ್ತದೆ. ಬೇರೆ ಜಿಲ್ಲೆಗಳಿಗೆ ಹೋಲಿಸಿದರೆ ಧಾರವಾಡ ಎಲ್ಲ ಸಂದರ್ಭದಲ್ಲೂ ಉತ್ತಮ ಸಾಧನೆ ಮಾಡಿದೆ ನಿಕಟಪೂರ್ವ ಜಿಲ್ಲಾಧಿಕಾರಿ ದೀಪಾ ಚೋಳನ್ ಹೇಳಿದರು.
ಕೃಷಿ ವಿಶ್ವವಿದ್ಯಾಲಯದ ಭವನದಲ್ಲಿ ಕಂದಾಯ ಇಲಾಖೆ ಹಾಗೂ ವಿವಿಧ ಇಲಾಖೆಗಳ ನೌಕರರ ಸಂಘಟನೆಗಳು ಜಂಟಿಯಾಗಿ ಆಯೋಜಿಸಿದ್ದ “ನಿರ್ಗಮಿತ ಜಿಲ್ಲಾಧಿಕಾರಿ ದೀಪಾ ಚೋಳನ್ ಅವರ ಬೀಳ್ಕೊಡುಗೆ ಹಾಗೂ ನೂತನ ಜಿಲ್ಲಾಧಿಕಾರಿ ನಿತೇಶ್ ಕೆ. ಪಾಟೀಲ ಅವರ ಸ್ವಾಗತ” ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದರು.
ಜಿಲ್ಲಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುವಾಗ ಧಾರವಾಡ ಜಿಲ್ಲೆಯು ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ, ಕೋರ್ಟ್ ಕಟ್ಟಡ ಉದ್ಘಾಟನೆ ಸೇರಿದಂತೆ ಅನೇಕ ಐತಿಹಾಸಿಕ ಘಟನೆಗಳಿಗೆ ಸಾಕ್ಷಿಯಾಗಿದೆ. ನನ್ನ ವೃತ್ತಿ ಅನುಭವದ ವಿಸ್ತಾರವಾಗಿದೆ. ಧಾರವಾಡದ ಜನ, ಸಂಸ್ಕೃತಿ, ಸಾಹಿತ್ಯ, ಕಲೆ, ಹವಾಮಾನ ಸೇರಿದಂತೆ ಇಲ್ಲಿಯ ಸಂಸ್ಕಾರಗಳು ಅನೇಕ ಪಾಠ ಮತ್ತು ನೀತಿಗಳನ್ನು ಕಲಿಸಿದೆ. ಮುಖ್ಯವಾಗಿ ನನ್ನ ಮಕ್ಕಳು ಉತ್ತರಕರ್ನಾಟಕ ಶೈಲಿಯ ಅಚ್ಚಗನ್ನಡ ಕಲಿತಿರುವುದು ನನಗೆ ಹೆಮ್ಮೆ ತಂದಿದೆ. ನನ್ನ ವೃತ್ತಿ ಬದುಕಿನುದ್ದಕ್ಕೂ ಧಾರವಾಡದ ಅನುಭವಗಳನ್ನು ಮೆಲುಕು ಹಾಕುತ್ತೇನೆ. ಮತ್ತು ಅನುಸರಿಸುತ್ತೇನೆ ಎಂದು ಹೇಳಿದರು.
ಜಿಲ್ಲಾಡಳಿತದ ಜವಾಬ್ದಾರಿ ಬಹಳಷ್ಟಿದ್ದು, ಜಿಲ್ಲಾಧಿಕಾರಿಗಳಿಗೆ ಎಲ್ಲ ಅಧಿಕಾರಿಗಳು ಸಹಕಾರ ನೀಡುವುದರಿಂದ ಜನಸಾಮಾನ್ಯರ ಬೇಡಿಕೆಗಳನ್ನು ಈಡೇರಿಸಲು, ಅಭಿವೃದ್ಧಿ ಸಾಧಿಸಲು ಸಹಾಯವಾಗುತ್ತದೆ. ಆದ್ದರಿಂದ ಎಲ್ಲ ಇಲಾಖೆಗಳ ಎಲ್ಲಾ ಹಂತದ ಅಧಿಕಾರಿಗಳು ತಮ್ಮ ಜವಾಬ್ದಾರಿಗಳನ್ನು ಅರಿತು ಕರ್ತವ್ಯ ನಿರ್ವಹಿಸಬೇಕು ಮತ್ತು ಜಿಲ್ಲಾಡಳಿತಕ್ಕೆ ನೆರವಾಗಬೇಕೆಂದು ತಿಳಿಸಿದರು.
ನೂತನ ಜಿಲ್ಲಾಧಿಕಾರಿ ನಿತೇಶ್ ಕೆ. ಪಾಟೀಲ ಮಾತನಾಡಿ, ಜಿಲ್ಲೆಯ ಅಭಿವೃದ್ಧಿಗೆ ಆದ್ಯತೆ ನೀಡಿ, ಸರ್ಕಾರದ ಜನಪರ ಯೋಜನೆಗಳನ್ನು ಸಾರ್ವಜನಿಕರಿಗೆ ತಲುಪಿಸುವ ಮೂಲಕ ಜಿಲ್ಲೆಯ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸುತ್ತೇನೆ. ನಿರ್ಗಮಿತ ಜಿಲ್ಲಾಧಿಕಾರಿಗಳು ಜಿಲ್ಲೆಯ ಪ್ರಗತಿಗಾಗಿ ಅನೇಕ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿದ್ದಾರೆ. ಆಡಳಿತ ವ್ಯವಸ್ಥೆಯಲ್ಲಿ ಬದಲಾವಣೆ ತಂದಿದ್ದಾರೆ. ವಿವಿಧ ಸರ್ಕಾರಿ ಕಾರ್ಯಕ್ರಮಗಳನ್ನು ರಾಜ್ಯಮಟ್ಟದಲ್ಲಿ ಗುರುತಿಸುವಂತೆ ಸಾಧನೆ ಮಾಡಿದ್ದಾರೆ. ಮುಂದಿನ ದಿನಗಳಲ್ಲಿ ಹಿಂದಿನ ಕಾರ್ಯಶೈಲಿಯೊಂದಿಗೆ ಜಿಲ್ಲೆಯನ್ನು ಎಲ್ಲ ರೀತಿಯಿಂದಲೂ ಅಭಿವೃದ್ಧಿ ಸಾಧಿಸಲು ಕ್ರಮ ಕೈಗೊಳ್ಳಲಾಗುವುದು. ಸರ್ಕಾರದ ಯೋಜನೆಗಳು ಜನಸಾಮಾನ್ಯರಿಗೆ ತಲುಪಿಸಲು ಪರಿಣಾಮಕಾರಿ ಆಡಳಿತ ನೀಡುವುದಾಗಿ ಹೇಳಿದರು.
ಹೆಸ್ಕಾಂ ಪ್ರಧಾನ ವ್ಯವಸ್ಥಾಪಕ ಇಬ್ರಾಹಿಂ ಮೈಗೂರ ಮಾತನಾಡಿ, ಜಿಲ್ಲಾಧಿಕಾರಿಗಳಾಗಿ ದೀಪಾ ಚೋಳನ್ ಅವರು ಸಾರ್ವಜನಿಕರಿಗೆ ತಕ್ಷಣ ಸ್ಪಂದನೆಯ ಆಡಳಿತ ನೀಡಿ, ಜಿಲ್ಲಾಡಳಿತದ ಘನತೆ ಹೆಚ್ಚಿಸಿದ್ದಾರೆ. ಪ್ರತಿ ಸರಕಾರಿ ಕಾರ್ಯಕ್ರಮವನ್ನು ಜಿಲ್ಲೆಯಲ್ಲಿ ಅತ್ಯಂತ ಯಶಸ್ವಿಯಾಗಿ ಜಾರಿ ಮಾಡಿದ್ದಾರೆ. ಪ್ರತಿ ಹಂತದಲ್ಲೂ ಸಮರ್ಥವಾಗಿ ಜಿಲ್ಲೆಯನ್ನು ಮುನ್ನಡೆಸಿದ್ದಾರೆ ಎಂದು ಹೇಳಿದರು.
ವೇದಿಕೆಯಲ್ಲಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ರಾಜೇಂದ್ರ ಚೋಳನ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಬಿ.ಸಿ. ಸತೀಶ್, ಮಹಾನಗರ ಪಾಲಿಕೆ ಆಯುಕ್ತ ಡಾ.ಸುರೇಶ ಇಟ್ನಾಳ, ಕಿಮ್ಸ್ ನಿರ್ದೇಶಕ ಡಾ. ರಾಮಲಿಂಗಪ್ಪ ಅಂಟರಠಾಣಿ, ಮಹಾನಗರ ಉಪಪೆÇಲೀಸ್ ಆಯುಕ್ತ ಆರ್.ಬಿ. ಬಸರಗಿ, ಡಿವೈಎಸ್ಪಿ ರವಿ ನಾಯ್ಕ್, ಎಸಿಪಿ ಎಸ್.ಎಮ್. ಸಂದಿಗವಾಡ, ಎಸಿಪಿ ಅನುಷಾ ಜಿ. ಉಪಸ್ಥಿತರಿದ್ದರು.
ನಂದಾ ಹಣಬರಟ್ಟಿ ಪ್ರಾರ್ಥಿಸಿದರು. ಅಪರ ಜಿಲ್ಲಾಧಿಕಾರಿ ಶಿವಾನಂದ ಕರಾಳೆ ಸ್ವಾಗತಿಸಿದರು. ಉಪವಿಭಾಗಾಧಿಕಾರಿ ಮಹ್ಮದ ಜುಬೇರ ವಂದಿಸಿದರು.
Super