ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ಸಾರಿಗೆ ನೌಕರರು ತಮ್ಮ ನ್ಯಾಯಯುತ ಬೇಡಿಕೆಗಳ ಈಡೇರಿಕೆಗಾಗಿ ಏಪ್ರಿಲ್ 7 ರಿಂದ ನಡೆಸಲಿರುವ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಆಮ್ ಆದ್ಮಿ ಪಕ್ಷ ಸಂಪೂರ್ಣ ಬೆಂಬಲ ನೀಡಲಿದೆ ಎಂದು ಪಕ್ಷದ ರಾಜ್ಯ ಮಾಧ್ಯಮ ಸಂಚಾಲಕ ಜಗದೀಶ್ ವಿ. ಸದಂ ತಿಳಿಸಿದ್ದಾರೆ.
ಸೋಮವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾರಿಗೆ ಸಚಿವ ಲಕ್ಷ್ಮಣ ಸವದಿ ಅವರು ನೌಕರರೊಂದಿಗೆ ಯಾವುದೇ ಚರ್ಚೆಯನ್ನು ನಡೆಸದೆ ಏಕಪಕ್ಷೀಯವಾಗಿ ಕೆಲವೊಂದು ನಿರ್ಣಯಗಳನ್ನು ತೆಗೆದುಕೊಂಡು ಇವುಗಳನ್ನೇ ಬೇಡಿಕೆಗಳನ್ನು ಈಡೇರಿಸಿದ್ದೇವೆಂದು ರಾಜ್ಯದ ಜನತೆಗೆ ತಪ್ಪು ಮಾಹಿತಿಯನ್ನು ನೀಡುತ್ತಿದ್ದಾರೆ. ಮುಖ್ಯಮಂತ್ರಿಗಳಂತೂ ನೌಕರರ ಈ ಸಮಸ್ಯೆಗಳಿಗೆ ತಲೆಯನ್ನೇ ಕೆಡಿಸಿಕೊಳ್ಳುತ್ತಿಲ್ಲ ಎಂದು ಕಿಡಿಕಾರಿದರು.
ಮುಷ್ಕರದ ಭೀತಿಗೆ ಹೆದರಿ ಏಪ್ರಿಲ್ 2ರ ಒಳಗೆ ಆರನೇ ವೇತನ ಆಯೋಗದ ಅಂತಿಮ ನಿರ್ಧಾರವನ್ನು ತೆಗೆದುಕೊಳ್ಳಲಿದ್ದೇವೆ ಎಂದು ಸಾರಿಗೆ ಸಾರಿಗೆ ಸಚಿವರು ತಿಳಿಸಿದ್ದರೂ ಸಹ ಇದುವರೆವಿಗೂ ಆ ಬಗ್ಗೆ ಯಾವುದೇ ಕ್ರಮಗಳನ್ನು ತೆಗೆದುಕೊಂಡಿಲ್ಲ.
ಸಾರಿಗೆ ನೌಕರರನ್ನು ಜೀತದಾಳು ಗಳಂತೆ ನಡೆಸಿಕೊಳ್ಳುತ್ತಿರುವ ಸರ್ಕಾರದ ನೀತಿಗಳಿಗೆ ಆಮ್ ಆದ್ಮಿ ಪಕ್ಷ ಸಂಪೂರ್ಣವಾಗಿ ವಿರೋಧವನ್ನು ವ್ಯಕ್ತ ಪಡಿಸುತ್ತದೆ. ಈ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಪಕ್ಷವು ತನ್ನ ಸಂಪೂರ್ಣ ಬೆಂಬಲವನ್ನು ವ್ಯಕ್ತಪಡಿಸುತ್ತದೆ ಎಂದು ಜಗದೀಶ್ ತಿಳಿಸಿದರು.