ತುಮಕೂರು: ಕಾಂಗ್ರೆಸ್‌ನಲ್ಲಿ ಚುನಾವಣೆಗೂ ಮುನ್ನವೇ ನಾಯಕರು ಮುಖ್ಯಮಂತ್ರಿ ಸ್ಥಾನ ಅಲಂಕರಿಸುವ ತಿರುಕನ ಕನಸು ಕಾಣುತ್ತಿದ್ದಾರೆ ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದ್ದಾರೆ.
ಕೊರಟಗೆರೆಯಲ್ಲಿ ಶುಕ್ರವಾರ ಉಪನೋಂದಣಾಧಿಕಾರಿಗಳ ಕಚೇರಿ ಲೋಕಾರ್ಪಣೆಗೊಳಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಕೇಂದ್ರ ಹಾಗೂ ರಾಜ್ಯದಲ್ಲಿ ಕಾಂಗ್ರೆಸ್ ಇನ್ನೂ 20 ವರ್ಷ ಕಳೆದರೂ ಅಧಿಕಾರಕ್ಕೆ ಬರುವುದಿಲ್ಲ. ದೇಶದಲ್ಲಿ ಕಾಂಗ್ರೆಸ್ ಪಕ್ಷದ ನಾಯಕರೇ ಇಲ್ಲ ಎಂದು ಕಾಲೆಳೆದರು.
ಇನ್ನು ರಾಹುಲ್ ಗಾಂಧಿಯವರ ಹೆಸರು ಹೇಳಿಕೊಂಡು ಚುನಾವಣೆಗೆ ಹೋದರೆ ಕೇವಲ ನಾಲ್ಕು ವೋಟೂ ಬೀಳಲ್ಲ. ಕಾಂಗ್ರೆಸ್ ಪಕ್ಷದಲ್ಲಿ ಚುನಾವಣೆಗೂ ಮುನ್ನವೇ ಮುಖ್ಯಮಂತ್ರಿ ಕನಸು ಕಾಣಲಾಗುತ್ತಿದೆ. ಇದು ಕಾಂಗ್ರೆಸ್ ನಾಯಕರ ತಿರುಕನ ಕನಸು ಎನ್ನದೇ ಮತ್ತೇನು ಹೇಳಬೇಕು ಎಂದು ಕುಟುಕಿದರು.
ಚುನಾವಣೆಗೆ ಇನ್ನು ಎರಡು ವರ್ಷ ಬಾಕಿ ಇದೆ. ಆದರೆ ಕಾಂಗ್ರೆಸ್ ಪಕ್ಷದಲ್ಲಿ ಸಿಎಂ ಸ್ಥಾನಕ್ಕಾಗಿ 6 ಜನ ಟವಲ್ ಹಾಕಿದ್ದಾರೆ. ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್, ಡಾ.ಜಿ.ಪರಮೇಶ್ವರ್, ಮಲ್ಲಿಕಾರ್ಜುನ ಖರ್ಗೆ, ಎಸ್.ಆರ್.ಪಾಟೀಲ್ ಸೇರಿದಂತೆ ಆರು ಮಂದಿ ನಾಯಕರು ಚುನಾವಣೆಗೆ ಮುನ್ನವೇ ಮುಖ್ಯಮಂತ್ರಿ ಆಗುವ ಕನಸು ಕಾಣುತ್ತಿದ್ದಾರೆ. ಈ ತಿರುಕನ ಕನಸು ಯಾವುದೇ ಕಾರಣಕ್ಕೂ ಸಫಲವಾಗುವುದಿಲ್ಲ ಎಂದರು.