ಜೇವರ್ಗಿ: ನಗರದ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ತಾಲೂಕು ಆಡಳಿತ ವತಿಯಿಂದ ಕಾಲೇಜು ವಿದ್ಯಾರ್ಥಿಗಳಿಗೆ ಹಾಗೂ ಉಪನ್ಯಾಸಕರಿಗೆ ‘ವಿಶೇಷ ಕೋವಿಡ್ ಲಸಿಕಾ ಅಭಿಯಾನ ಕಾರ್ಯಕ್ರಮ’ ನಡೆಯಿತು.
ಲಸಿಕಾ ಅಭಿಯಾನಕ್ಕೆ ತಾಲೂಕು ತಹಸೀಲ್ದಾರ್ ವಿನಯಕುಮಾರ ಪಾಟೀಲ ಚಾಲನೆ ನೀಡಿದರು. ನಂತರ ಮಾತನಾಡಿದ ವಿನಯಕುಮಾರ ಪಾಟೀಲ, ವಿದ್ಯಾರ್ಥಿಗಳು ಯಾವುದೇ ವದಂತಿಗಳಿಗೆ ಕಿವಿಗೊಡದೆ ಕಡ್ಡಾಯವಾಗಿ ಲಸಿಕೆಯನ್ನು ಪಡೆಯಿರಿ ಎಂದು ಸಲಹೆ ನೀಡಿದರು.
ಸದ್ಯ ತಾಲೂಕಿನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಕೋವಿಡ್ ಲಸಿಕೆ ನೀಡಲಾಗುತ್ತಿದ್ದು ಎಲ್ಲರೂ ಇದರ ಪ್ರಯೋಜನ ಪಡೆದುಕೊಳ್ಳಲು ಮನವಿ ಮಾಡಿದರು.
ತಾಲೂಕು ವೈದ್ಯಾಧಿಕಾರಿ ಡಾ.ಸಿದ್ದು ಪಾಟೀಲ ಮಾತನಾಡಿ, ಕಲಬುರಗಿ ಜಿಲ್ಲೆಯಲ್ಲಿಯೇ ನಮ್ಮ ಜೇವರ್ಗಿ ತಾಲೂಕು ಕೋವಿಡ್ ಲಸಿಕೆಯನ್ನು ನೀಡುವಲ್ಲಿ ಮುಂಚೂಣಿಯಲ್ಲಿದೆ ಎಂದು ಹೇಳಿದರು.
ಪ್ರತಿನಿತ್ಯ 200 ರಿಂದ 300 ಜನರಿಗೆ ಲಸಿಕೆಯನ್ನು ನೀಡಲಾಗುತ್ತಿದೆ. ಇಲ್ಲಿಯವರೆಗೆ ತಾಲೂಕಿನಲ್ಲಿ 53,832 ಜನರಿಗೆ ಲಸಿಕೆ ನೀಡಲಾಗಿದೆ ಎಂದು ತಿಳಿಸಿದರು.
ಕಾಲೇಜಿನ ಪ್ರಾಚಾರ್ಯ ಬಸವರಾಜ ಕೊಂಬಿನ, ಉಪನ್ಯಾಸಕರಾದ ಡಾ.ಕರಿಗೂಳೇಶ್ವರ, ಡಾ.ವಿಷ್ಣುವರ್ಧನ ಮೂಲಿಮನಿ, ಡಾ.ಗುರುಪ್ರಕಾಶ ಹೂಗಾರ ಸೇರಿದಂತೆ ವಿದ್ಯಾರ್ಥಿಗಳು ಇದ್ದರು.