ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು ಗ್ರಾಮಾಂತರ: ಸ್ವಾತಂತ್ರ್ಯದ ಅಮೃತ ಮಹೋತ್ಸವದ ಪ್ರಾರಂಭೋತ್ಸವ ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಪಾಲ್ಗೊಂಡಿರುವ ವಿದ್ಯಾರ್ಥಿಗಳಿಂದ ಹೊಸ ಇತಿಹಾಸ ಸೃಷ್ಟಿಯಾಗಿದ್ದು, ಮುಂದಿನ ದಿನಗಳಲ್ಲಿ ಈ ದಿನ ನೆನಪಿನಲ್ಲಿ ಉಳಿಯುತ್ತದೆ ಎಂದು ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ತಿಳಿಸಿದರು.
ಭಾರತ ಸ್ವಾತಂತ್ರ್ಯ ಗಳಿಸಿ 2022ಕ್ಕೆ 75 ವರ್ಷ ತುಂಬುತ್ತಿರುವ ಸ್ಮಾರಕಾರ್ಥವಾಗಿ “ಸ್ವಾತಂತ್ರ್ಯದ ಅಮೃತ ಮಹೋತ್ಸವ”ದ ಕಾರ್ಯಕ್ರಮದಡಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಜಿಲ್ಲಾ ಮಟ್ಟದ ಎಲ್ಲಾ ಇಲಾಖೆಗಳ ಸಹಯೋಗದೊಂದಿಗೆ ದೇವನಹಳ್ಳಿಯ ಐತಿಹಾಸಿಕ ಕೋಟೆಯ ಆವರಣದಲ್ಲಿಂದು ಆಯೋಜಿಸಿದ್ದ “ಸ್ವಾತಂತ್ರ್ಯದ ಅಮೃತ ಮಹೋತ್ಸವ”ದ ಪ್ರಾರಂಭೋತ್ಸವ ಕಾರ್ಯಕ್ರಮದ ಅಂಗವಾಗಿ “ರಾಷ್ಟ್ರಪಿತ, ಮಹಾತ್ಮ ಗಾಂಧೀಜಿ” ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ, ಮಾತನಾಡಿದರು.
ವಿದ್ಯಾರ್ಥಿಗಳು ಸ್ವಾತಂತ್ರ್ಯ ಹೋರಾಟಗಾರ ಜೀವನ, ಚರಿತ್ರೆ ಮತ್ತು ಮಾರ್ಗದರ್ಶನ ತಿಳಿದುಕೊಳ್ಳಬೇಕು ಎಂದು ತಿಳಿಸಿದರು.
75 ವಾರಗಳ ಕಾಲ ನಡೆಯುವ ಈ ವಿಶೇಷ ಕಾರ್ಯಕ್ರಮಗಳನ್ನು ಮುಂದಿನ ದಿನಗಳಲ್ಲಿ ಹೋಬಳಿ ಮಟ್ಟದಲ್ಲಿಯೂ ಹಮ್ಮಿಕೊಳ್ಳಲಾಗುವುದು ಎಂದರಲ್ಲದೆ, ಕಾಲೇಜು ವಿದ್ಯಾರ್ಥಿಗಳಿಗೆ ಪ್ರಬಂಧ, ಪೇಂಟಿಂಗ್, ಉಪನ್ಯಾಸ ಕಾರ್ಯಕ್ರಮಗಳನ್ನು ಆಯೋಜಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಸ್ವಾತಂತ್ರ್ಯ ಹೋರಾಟದ ಬಗ್ಗೆ ಅರಿವು ಮೂಡಿಸುವುದು ಈ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದ್ದು, ಜಿಲ್ಲೆಯಲ್ಲಿರುವ ಐತಿಹಾಸಿಕ ಸ್ಥಳಗಳನ್ನು ಗುರುತಿಸಿ ಪ್ರತಿ ವಾರ ಕಾರ್ಯಕ್ರಮವನ್ನು ಆಚರಿಸಲಾಗುವುದು ಎಂದರು.
ಅಪರ ಜಿಲ್ಲಾಧಿಕಾರಿ ಡಾ.ಜಗದೀಶ.ಕೆ.ನಾಯಕ ಅವರು ಮಾತನಾಡಿ, ಸ್ವಾತಂತ್ರ್ಯ ದಿನಾಚರಣೆಯ 75ನೇ ವರ್ಷದ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಪ್ರಾರಂಭೋತ್ಸವಕ್ಕೆ ಇಂದು ದೇವನಹಳ್ಳಿ ಕೋಟೆಯಲ್ಲಿ ಚಾಲನೆ ನೀಡಲಾಗಿದ್ದು, ಜಿಲ್ಲೆಯಲ್ಲಿ ಮುಂದಿನ 75 ವಾರಗಳ ಕಾಲ ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಿದ್ದೇವೆ ಎಂದರಲ್ಲದೆ, ವಿದ್ಯಾರ್ಥಿಗಳು ನಮ್ಮ ನಾಡಿನ ಸಂಸ್ಕೃತಿ ತಿಳಿಯುವ ಅಗತ್ಯವಿದ್ದು, ಇಂತಹ ಕಾರ್ಯಕ್ರಮಗಳ ಮೂಲಕ ನಾಡಿನ ಸಂಸ್ಕೃತಿ ಅರಿಯಲು ಸಹಕಾರಿ ಎಂದು ತಿಳಿಸಿದರು.
ಜಿಲ್ಲಾ ಪಂಚಾಯಿತಿ ಸದಸ್ಯರಾದ ಪಿ.ಎನ್.ಅನಂತಕುಮಾರಿ ಚಿನ್ನಪ್ಪ ಮಾತನಾಡಿ, ಸ್ವಾತಂತ್ರ್ಯ ದಿನಾಚರಣೆಯ ಅಮೃತ ಮಹೋತ್ಸವದ ಅಂಗವಾಗಿ ಮ್ಯಾರಥಾನ್ ಹಾಗೂ ಶ್ರಮದಾನ ಏರ್ಪಡಿಸಿರುವುದು ಸಂತಸ ತಂದಿದ್ದು, ವಿದ್ಯಾರ್ಥಿಗಳು ಮೊಬೈಲ್‌ನಲ್ಲಿ ಕೇವಲ ಸಾಮಾಜಿಕ ಜಾಲತಾಣದಲ್ಲಿ ಸಮಯ ವ್ಯರ್ಥ ಮಾಡದೆ, ಸ್ವಾತಂತ್ರ್ಯದ ಹೋರಾಟದ ಬಗ್ಗೆ ತಿಳಿದುಕೊಳ್ಳಬೇಕು ಎಂದು ಸಲಹೆ ನೀಡಿದರು.
ದೇವನಹಳ್ಳಿ ಪುರಸಭೆ ಅಧ್ಯಕ್ಷರಾದ ರೇಖಾ ವೇಣುಗೋಪಾಲ್ ಮಾತನಾಡಿ, ಪ್ರತಿಯೊಬ್ಬರೂ ನಮ್ಮ ಕಲೆ, ಸಂಸ್ಕೃತಿ, ಭಾಷೆ, ಧರ್ಮವನ್ನು ಅನುಸರಿಸುವ ಅಗತ್ಯವಿದ್ದು, ಅನ್ಯ ಸಂಸ್ಕೃತಿ ಮತ್ತು ಭಾಷೆಯ ವ್ಯಾಮೋಹ ತೊರೆದು ನಮ್ಮ ಸಂಸ್ಕೃತಿಯನ್ನು ಗೌರವಿಸುವಂತಾಗಬೇಕು ಹಾಗೂ ಯುವಜನತೆ ಸ್ವಾತಂತ್ರ್ಯ ಹೋರಾಟದ ಬಗ್ಗೆ ತಿಳಿಯಬೇಕು ಎಂದು ತಿಳಿಸಿದರು.
ಸ್ವಾತಂತ್ರ್ಯ ಹೋರಾಟದ ಬಗ್ಗೆ ಬಿ.ಎನ್.ಕೃಷ್ಣಪ್ಪ ಅವರು ಉಪನ್ಯಾಸ ನೀಡಿದರು. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕಿ ಗೀತಾ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ಭವ್ಯ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ಸುಮ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಬಿ.ಮಂಜುನಾಥ್ ಆರಾಧ್ಯ, ತಾಲೂಕು ಕಾರ್ಯನಿರ್ವಾಹಣಾಧಿಕಾರಿ ವಸಂತ್‌ಕುಮಾರ್, ಬಿಇಒ ಅಶ್ವಥ್‌ನಾರಾಯಣ್, ಪುರಸಭೆ ಮುಖ್ಯಾಧಿಕಾರಿ ನಾಗರಾಜು, ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಧ್ಯಾಪಕರು, ಎನ್.ಎಸ್.ಎಸ್. ಘಟಕದ ವಿದ್ಯಾರ್ಥಿಗಳು, ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ, ಸರ್ಕಾರಿ ಹೆಣ್ಣು ಮಕ್ಕಳ ಪ್ರೌಢಶಾಲೆ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಕಾರ್ಯಕ್ರಮಕ್ಕೂ ಮುನ್ನ ದೇವನಹಳ್ಳಿ ಪುರಸಭೆ ಆವರಣದಲ್ಲಿ ಮ್ಯಾರಥಾನ್ ಓಟಕ್ಕೆ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಹಾಗೂ ಜಿಲ್ಲಾ ಪಂಚಾಯಿತಿ ಸದಸ್ಯೆ ಪಿ.ಎನ್.ಅನಂತಕುಮಾರಿ ಚಿನ್ನಪ್ಪ ಅವರು ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು.
ಮ್ಯಾರಥಾನ್ ಓಟದಲ್ಲಿ ಪಾಲ್ಗೊಂಡಿದ್ದ ವಿದ್ಯಾರ್ಥಿಗಳಿಗೆ ಯುವ ಸಬಲೀಕರಣ ಇಲಾಖೆ ಮತ್ತು ಕ್ರೀಡಾ ಇಲಾಖೆ ವತಿಯಿಂದ ಸಾಂಕೇತಿಕವಾಗಿ ಪ್ರಮಾಣ ಪತ್ರ ವಿತರಿಸಿದರು.
ವಕಾರ್ಯಕ್ರಮದ ನಂತರ ವಿದ್ಯಾರ್ಥಿಗಳು ದೇವನಹಳ್ಳಿ ಕೋಟೆ ಆವರಣದಲ್ಲಿ ಸ್ವಚ್ಛತಾ ಶ್ರಮದಾನ ಮಾಡಿದರು.