ವಿಜಯಪಥ ಸಮಗ್ರ ಸುದ್ದಿ
ತಿ.ನರಸೀಪುರ: ರಾಜ್ಯ ಸರ್ಕಾರ ಕಟ್ಟಡ ಕಾರ್ಮಿಕರಿಗೆ 3 ಸಾವಿರ ರೂ. ಪರಿಹಾರವನ್ನು ಘೋಷಣೆ ಮಾಡಿರುವುದು ಸ್ವಾಗತಾರ್ಹವಾದರೂ ಕಟ್ಟಡ ಕಾರ್ಮಿಕರು ಲಾಕ್ಡೌನ್ ಪರಿಣಾಮ ಕಳೆದ ಒಂದು ತಿಂಗಳಿಂದ ಕೆಲಸವಿಲ್ಲದೆ ಹಸಿವಿನಿಂದ ಬಳಲುತ್ತಿದ್ದಾರೆ. ಹೀಗಾಗಿ ಮುಖ್ಯಮಂತ್ರಿಗಳು ಹೆಚ್ಚಿನ ಪರಿಹಾರವನ್ನು ಪ್ಯಾಕೇಜ್ ನಲ್ಲಿ ನೀಡಬೇಕು ಎಂದು ಕಟ್ಟಡ ಕಾರ್ಮಿಕರ ಸಂಘಟನೆಯ ಪ್ರಧಾನ ಕಾರ್ಯದರ್ಶಿ ಸಿ.ಬಿ.ನವೀನ್ ಕುಮಾರ್ ಒತ್ತಾಯಿಸಿದ್ದಾರೆ.
ಕೊರೊನಾ ನಿಯಂತ್ರಣಕ್ಕೆ ರಾಜ್ಯಾದ್ಯಂತ ಲಾಕ್ ಡೌನ್ ಜಾರಿಗೊಳಿಸಿದ ಪರಿಣಾಮ ದುಡಿಮೆಯನ್ನೇ ನೆಚ್ಚಿಕೊಂಡಿದ್ದ ಕಟ್ಟಡ ಕಾರ್ಮಿಕರು ಜೀವನ ನಿರ್ವಹಣೆಗೆ ಉದ್ಯೋಗವಿಲ್ಲದೆ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ.
ಮುಖ್ಯಮಂತ್ರಿ ಯಡಿಯೂರಪ್ಪ ಅವರು ಪ್ಯಾಕೇಜ್ ಘೋಷಣೆ ಮಾಡುವ ಮೊದಲೇ ಕಟ್ಟಡ ಕಾರ್ಮಿಕರ ಸಂಕಷ್ಟದ ಪರಿಸ್ಥಿತಿಯಲ್ಲಿ 10 ಸಾವಿರ ರೂ.ಗಳ ಪರಿಹಾರ ನೀಡುವಂತೆ ಕಳೆದ ಮೇ 15 ರಂದು ತಾಲೂಕಿನಾದ್ಯಂತ ಸಿಐಟಿಯು ಸಂಘಟನೆಯಿಂದ ಪ್ರತಿಭಟನೆ ನಡೆಸಿದ್ದೇವು ಎಂದರು.
ಕಟ್ಟಡ ಕಾರ್ಮಿಕರಿಗೆ ವಾರಕ್ಕೆ 2500 ರೂಗಳಂತೆ ಕನಿಷ್ಠ 10 ಸಾವಿರ ರೂ.ಗಳ ಪರಿಹಾರ ನೀಡಬೇಕಾದ್ದರಿಂದ ರಾಜ್ಯ ಸರ್ಕಾರ ಘೋಷಣೆ ಮಾಡಿರುವ ಪ್ಯಾಕೇಜನ್ನು ಮಾರ್ಪಾಡು ಮಾಡಿ ತಕ್ಷಣ ಆದೇಶವನ್ನು ನೀಡಬೇಕೆಂದು ತಿ.ನರಸೀಪುರ ಸಿಐಟಿಯು ಸಂಘಟನೆಯ ಪರವಾಗಿಯೂ ನವೀನ್ ಕುಮಾರ್ ಆಗ್ರಹಿಸಿದ್ದಾರೆ.