ಬೆಂಗಳೂರು ಗ್ರಾಮಾಂತರ: ಅಲ್ಪಸಂಖ್ಯಾತರಿಗಾಗಿ ವಿವಿಧ ಇಲಾಖೆಗಳಲ್ಲಿ ಜಾರಿಯಲ್ಲಿರುವ ಯೋಜನೆಗಳ ಕುರಿತು ಕರಪತ್ರಗಳು ಹಾಗೂ ಮಾಧ್ಯಮಗಳ ಮೂಲಕ ಅಗತ್ಯ ಮಾಹಿತಿಗಳನ್ನು ನೀಡುವ ಮುಖೇನ ಅಲ್ಪಸಂಖ್ಯಾತರಿಗೆ ಸೌಲಭ್ಯಗಳ ಕುರಿತು ಅರಿವು ಮೂಡಿಸಬೇಕು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ತಿಳಿಸಿದರು.
ದೇವನಹಳ್ಳಿ ತಾಲೂಕಿನ ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಅಲ್ಪಸಂಖ್ಯಾತರ ಇಲಾಖೆ ವತಿಯಿಂದ ನಡೆದ ಪ್ರಧಾನಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮದಡಿಯಲ್ಲಿ 2020-21ನೇ ಸಾಲಿನಲ್ಲಿ ಮಾರ್ಚ್ 2021ರ ಅಂತ್ಯದವರೆಗಿನ 4ನೇ ತ್ರೈಮಾಸಿಕ ಮತ್ತು 2021-22ನೇ ಸಾಲಿನ ಜೂನ್ 2021ರ ವರೆಗಿನ 1ನೇ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಯೋಜನೆಗಳ ಕುರಿತು ಅಗತ್ಯ ಮಾಹಿತಿ ನೀಡಿದಾಗ ಮಾತ್ರ ಹೆಚ್ಚಿನ ಪ್ರಮಾಣದಲ್ಲಿ ಫಲಾನುಭವಿಗಳು ಅರ್ಜಿ ಸಲ್ಲಿಸಿ, ಸೌಲಭ್ಯಗಳನ್ನು ಪಡೆಯಲು ಸಾಧ್ಯ ಎಂದರು.
ಜಿಲ್ಲೆಯಲ್ಲಿರುವ ಅಲ್ಪಸಂಖ್ಯಾತರ ಯುವಕ-ಯುವತಿಯರ ದಾಖಲಾತಿ ಸಂಗ್ರಹಿಸಿ, ಅವರಿಗೆ ಆಸಕ್ತಿ ಇರುವ ಕ್ಷೇತ್ರದಲ್ಲಿ ಕೌಶಲ್ಯವನ್ನು ವೃದ್ಧಿಸುವಂತಹ ತರಬೇತಿ ನೀಡಿ, ನಿರುದ್ಯೋಗದಿಂದ ಮುಕ್ತಗೊಳಿಸುವ ನಿಟ್ಟಿನಲ್ಲಿ ಕೌಶಲ್ಯಾಭಿವೃದ್ಧಿ ಇಲಾಖೆ ಅಧಿಕಾರಿಗಳು ಕೆಲಸ ನಿರ್ವಹಿಸಬೇಕು ಎಂದು ಸೂಚಿಸಿದರು.
ವಿವಿಧ ಯೋಜನೆಗಳಡಿ ಸಾಲ ಸೌಲಭ್ಯಕ್ಕಾಗಿ ಬ್ಯಾಂಕ್ಗಳಲ್ಲಿ ಸಲ್ಲಿಸಿರುವ ಅರ್ಜಿಗಳಲ್ಲಿ ಅಲ್ಪಸಂಖ್ಯಾತ ಫಲಾನುಭವಿಗಳಿಗೆ ಆದ್ಯತೆ ಮೇರೆಗೆ ಸಾಲ ಸೌಲಭ್ಯ ಒದಗಿಸಬೇಕು ಎಂದರಲ್ಲದೆ, ಕೃಷಿ ಇಲಾಖೆ ವತಿಯಿಂದ ಅಲ್ಪಸಂಖ್ಯಾತ ರೈತರನ್ನು ಗುರುತಿಸಿ, ಅವರ ಜಮೀನಿನಲ್ಲಿ ಮಣ್ಣಿನ ಫಲವತ್ತತೆ ಹೆಚ್ಚಿಸುವ ರಸಗೊಬ್ಬರ ವಿತರಣೆ ಮಾಡಬೇಕು ಎಂದು ತಿಳಿಸಿದರು.
ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ವಿನುತಾರಾಣಿ.ಬಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಉಪ ನಿರ್ದೇಶಕ ಮೈಲಾರಪ್ಪ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ತಿಪ್ಪೇಸ್ವಾಮಿ, ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ನರೇಂದ್ರ ಬಾಬು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಉಪ ನಿರ್ದೇಶಕಿ ಭವ್ಯ, ಕೃಷಿ ಇಲಾಖೆ ಉಪ ನಿರ್ದೇಶಕಿ ವಿನುತಾ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕಿ ಅನಿತಾಲಕ್ಷೀ, ಪಶು ಸಂಗೋಪನಾ ಹಾಗೂ ಪಶು ವೈದ್ಯ ಸೇವಾ ಇಲಾಖೆ ಮುಖ್ಯ ವೈದ್ಯಾಧಿಕಾರಿ ಡಾ.ಅನಿಲ್ಕುಮಾರ್ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.