ವಿಜಯಪಥ ಸಮಗ್ರ ಸುದ್ದಿ
ಮೈಸೂರು: ಮೈಸೂರಿನಲ್ಲಿ ದಿನೇದಿನೆ ಕೊರೊನಾ ಪ್ರಕರಣ ಹೆಚ್ಚಾಗುತ್ತಿರುವ ಕಾರಣ ಮೈಸೂರಿನಲ್ಲೂ ಮೇ 29ರಿಂದ ಜೂನ್ 7ರವೆಗೆ ಸಂಪೂರ್ಣ ಲಾಕ್‌ಡೌನ್ ಜಾರಿ ಮಾಡಲಾಗುತ್ತಿದೆ.
ಜಿಲ್ಲೆಯಲ್ಲಿ ಎಷ್ಟೇ ಪ್ರಯತ್ನಪಟ್ಟರೂ ಕೊರೊನಾ ಸೋಂಕು ತಹಬದಿಗೆ ಬಾರದ ಕಾರಣ ಲಾಕ್‌ಡೌನ್ ಅನಿವಾರ್ಯವಾಗಿದ್ದು, ಜಿಲ್ಲಾಧಿಕಾರಿಗಳಿಂದ ಈಗಾಗಲೇ ಆದೇಶ ಹೊರಬಿದ್ದಿದೆ. ಸರ್ಕಾರದ ನಿಲುವಿಗೆ ಜನತೆ ಸಹಕರಿಸುವಂತೆ ಸಚಿವ ಎಸ್.ಟಿ.ಸೋಮಶೇಖರ್ ಮನವಿ ಮಾಡಿದ್ದಾರೆ.
ಇನ್ನು ಎರಡು ದಿನ ಮಾತ್ರ ಅಗತ್ಯ ವಸ್ತು ಖರೀದಿಗೆ ಅವಕಾಶ ನೀಡಲಾಗಿದೆ. ಸೋಮವಾರ ಮತ್ತು ಗುರುವಾರ ಖರೀದಿಗೆ ಅವಕಾಶವಿದ್ದು, ಬೆಳಗ್ಗೆ 6 ಗಂಟೆಯಿಂದ ಮಧ್ಯಾಹ್ನ 12 ಗಂಟೆಯವರೆಗೆ ಮಾತ್ರ ಕೊಳ್ಳಬಹುದು.
ಇನ್ನು ಬ್ಯಾಂಕ್ ಹಾಗೂ ಭಾರತೀಯ ವಿಮಾ ಯೋಜನೆಯ ವ್ಯವಹಾರಗಳಿಗೂ ಸಮಯ ನಿಗದಿ ಮಾಡಲಾಗಿದೆ. ಬೆಳಗ್ಗೆ 8 ಗಂಟೆಯಿಂದ ಮಧ್ಯಾಹ್ನ 12 ಗಂಟೆಯವರೆಗೆ ಮಾತ್ರ ಅವುಗಳಿಗೆ ಅವಕಾಶ ನೀಡಲಾಗಿದೆ.
ಹಾಲಿನ ಬೂತ್‌ಗಳು, ವೈದ್ಯಕೀಯ ಸೇವೆಗಳು, ಹಾಪ್ ಕಾಮ್ಸ್ ಅಡಿಯಲ್ಲಿ ಬರುವ ತರಕಾರಿ ಮತ್ತು ಹಣ್ಣಿನ ಅಂಗಡಿಗಳು, ನ್ಯಾಯ ಬೆಲೆ ಅಂಗಡಿಗಳನ್ನು ಹೊರತುಪಡಿಸಿ ಉಳಿದ ಎಲ್ಲಾ ರೀತಿಯ ಚಟುವಟಿಕೆಗಳನ್ನು ಸಂಪೂರ್ಣವಾಗಿ ನಿರ್ಬಂಧ ವಿಧಿಸಲಾಗಿದೆ.
ನಿಷೇಧಾಜ್ಞೆ ಅವಧಿಯಲ್ಲಿ ಸರಕು ಸಗಟು ವಾಹನಗಳಿಗೆ ಮಾತ್ರ ಅವಕಾಶ ಮಾಡಿಕೊಡಲಾಗಿದೆ. ಬೇರೆ ಯಾವುದೇ ವಾಹನ ಸಂಚಾರ ಜನರ ಓಡಾಟಕ್ಕೆ ನಿರ್ಬಂಧ ವಿಧಿಸಲಾಗಿದೆ. ನಿಯಮ ಉಲ್ಲಂಘಿಸಿದರೆ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸಚಿವರು ತಿಳಿಸಿದರು.
ಜಿಲ್ಲೆಯಲ್ಲಿ ಜಿಲ್ಲಾಡಳಿತ ಹಾಗೂ ಸರ್ಕಾರ ಹಲವಾರು ಕ್ರಮಗಳನ್ನು ತೆಗೆದುಕೊಂಡಿದೆ. ಆದರೂ ಸಹ ನಿಯಂತ್ರಣಕ್ಕೆ ಬರುತ್ತಿಲ್ಲ. ಪರಿಸ್ಥಿತಿ ಹೀಗೇ ಮುಂದುವರಿದರೆ ಕೈಮೀರುವ ಸಾಧ್ಯತೆ ಇದ್ದು, ಸಾರ್ವಜನಿಕರ ಹಿತದೃಷ್ಟಿಯಿಂದ ಲಾಕ್‌ಡೌನ್ ತೀರ್ಮಾನವನ್ನು ಕೈಗೊಳ್ಳಲಾಗಿದೆ.
ಅಲ್ಲದೆ, ಈ ಬಗ್ಗೆ ಈಗಾಗಲೇ ಜಿಲ್ಲೆಯ ಎಲ್ಲ ತಹಸಿಲ್ದಾರ್‌ಗಳು ಹಾಗೂ ಜಿಲ್ಲಾ ಹಾಗೂ ತಾಲೂಕುಗಳ ಟಾಸ್ಕ್ ಫೋರ್ಸ್ ಸಮಿತಿ ಸದಸ್ಯರ ಅಭಿಪ್ರಾಯಗಳನ್ನು ಪಡೆದು ಈ ತೀರ್ಮಾನವನ್ನು ತೆಗೆದುಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.