ವಿಜಯಪಥ ಸಮಗ್ರ ಸುದ್ದಿ
ಮೈಸೂರು: ಫೆ.24ರಂದು ನಗರಪಾಲಿಕೆಯ ಮೇಯರ್-ಉಪಮೇಯರ್ ಚುನಾವಣೆ ನಡೆದ ವಿಪಕ್ಷದ ನಾಯಕ ಸಿದ್ದರಾಮಯ್ಯ ಅವರ ವಿರುದ್ಧ ಘೋಷಣೆ ಕೂಗಿದ ಆರೋಪದ ಮೇಲೆ ಶಾಸಕ ತನ್ವೀರ್ ಸೇಠ್ ಬೆಂಬಲಿಗರನ್ನು ಪಕ್ಷದಿಂದ ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ.
ಮೈಸೂರು ನಗರ ಡಿಸಿಸಿ ಉಪಾಧ್ಯಕ್ಷ ಅನ್ವರ್ ಪಾಷಾ, ಅಜೀಜ್‌ಸೇಠ್ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಅಬ್ದುಲ್ ಖಾದರ್ ಶಾಹಿದ್, ಕೆಪಿಸಿಸಿ ಸದಸ್ಯ ಪಿ.ರಾಜು ಅವರನ್ನು ಅಮಾನತುಗೊಳಿಸಿದ್ದು, ತಕ್ಷಣದಿಂದ ಜಾರಿಗೆ ಬರುವಂತೆ ಪಕ್ಷದ ಶಿಸ್ತುಪಾಲನಾ ಸಮಿತಿಗೆ ಕಳುಹಿಸಲಾಗಿದೆ.
ಫೆ. 24ರಂದು ನಡೆದ ಘಟನೆಯನ್ನು ಪಕ್ಷ ವಿರೋಧಿ ಚಟುವಟಿಕೆ ಎಂದು ಪರಿಗಣಿಸಿ ಅಮಾನತುಗೊಳಿಸುವಂತೆ ನಗರ ಅಧ್ಯಕ್ಷ ಆರ್.ಮೂರ್ತಿ ಕೆಪಿಸಿಸಿಗೆ ಶಿಫಾರಸು ಮಾಡಿದ್ದರು. ಇದನ್ನು ಪರಿಗಣಿಸಿದ ಕೆಪಿಸಿಸಿಯು ಮೂವರನ್ನು ಅಮಾನತುಪಡಿಸಿ ಆದೇಶ ಹೊರಡಿಸಿದೆ ಎಂದು ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ತಿಳಿಸಿದ್ದಾರೆ.
ಮೇಯರ್-ಉಪಮೇಯರ್ ಚುನಾವಣೆ ವೇಳೆ ಜಿಲ್ಲೆಯ ಕಾಂಗ್ರೆಸ್ ಮುಖಂಡರು ರಾಜ್ಯ ನಾಯಕರ ವಿರುದ್ಧ ಪ್ರತಿಭಟನೆ ನಡೆಸಿ, ವೈಯಕ್ತಿಕವಾಗಿ ಘೋಷಣೆಗಳನ್ನು ಕೂಗಿದ್ದಾರೆಂದು ಮಾಧ್ಯಮಗಳಲ್ಲಿ ವರದಿಯಾಗಿತ್ತು. ಈ ಹಿನ್ನೆಲೆಯಲ್ಲಿ ಪಕ್ಷಕ್ಕೆ ಹಾನಿ ಉಂಟಾಗಿದ್ದು ಘಟನೆಯನ್ನು ಪಕ್ಷ ವಿರೋಧಿ ಚಟುವಟಿಕೆ ಎಂದು ಪರಿಗಣಿಸಿ ಅಮಾನತುಗೊಳಿಸುವಂತೆ ಮೂರ್ತಿ ಅವರು ಶಿಫಾರಸು ಮಾಡಿದ್ದನ್ನು ಕೆಪಿಸಿಸಿ ಪರಿಗಣಿಸಿ ಈ ಕ್ರಮ ಕೈಗೊಂಡಿದೆ.