ವಿಜಯಪಥ ಸಮಗ್ರ ಸುದ್ದಿ
ಹಾಸನ: ಎಚ್.ಡಿ. ಕುಮಾರಸ್ವಾಮಿ ಅವರ ಅಧಿಕಾರಾವಧಿಯಲ್ಲಿ ಕೈಗೊಂಡ ಕಾರ್ಯಗಳನ್ನು ರಾಜ್ಯ ಆಡಳಿತದ ಬಿಜೆಪಿ ಸರ್ಕಾರ ತಡೆ ಹಿಡಿದಿದ್ದು, ಅದನ್ನು ಖಂಡಿಸಿ ಸೋಮವಾರದಿಂದ ವಿಧಾನಸಭೆಯಲ್ಲಿ ಧರಣಿ ನಡೆಸಲಿದ್ದೇವೆ ಎಂದು ಮಾಜಿ ಸಚಿವ ಎಚ್.ಡಿ. ರೇವಣ್ಣ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ಒಂದೂವರೆ ವರ್ಷಗಳಿಂದ ಹಾಸನ ಜಿಲ್ಲೆ ಸೇರಿದಂತೆ ನಮ್ಮ ಪಕ್ಷದ ಶಾಸಕರ ಕ್ಷೇತ್ರದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ. ಈ ತಾರತಮ್ಯ ನೀತಿಯನ್ನು ಖಂಡಿಸಿ ನಮ್ಮ ಪಕ್ಷದ ಎಲ್ಲ ಶಾಸಕರು ಅಧಿವೇಶನದಲ್ಲಿ ಧರಣಿ ಮಾಡಲು ನಿರ್ಧರಿಸಿದ್ದೇವೆ ಎಂದು ತಿಳಿಸಿದರು.
ಇನ್ನು ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಹಲವು ಕಾಮಗಾರಿಗೆ ಚಾಲನೆ ನೀಡಲಾಗಿತ್ತು. ಆದರೆ ಅವು ಇನ್ನೂ ಪ್ರಾರಂಭವಾಗಿಲ್ಲ ಮತ್ತು ಅದಕ್ಕೆ ಬೇಕಾದ ಹಣವನ್ನು ಬಿಡುಗಡೆ ಮಾಡಿಲ್ಲ. ಟೆಂಡರ್ ಪ್ರಕ್ರಿಯೆ ಕೂಡ ನಡೆದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಜೆಡಿಎಸ್ ಶಾಸಕರ ಕ್ಷೇತ್ರಗಳನ್ನು ಸರ್ಕಾರ ಸಂಪೂರ್ಣವಾಗಿ ನಿರ್ಲಕ್ಷಿಸುತ್ತಿದೆ. ಸರಿಯಾಗಿ ಹಣ ಬಿಡುಗಡೆ ಮಾಡದೆ. ಅಭಿವೃದ್ಧಿ ಕಾಮಗಾರಿಗಳನ್ನು ಮಾಡಲು ಆಗುತ್ತಿಲ್ಲ ಎಂದು ಹೇಳಿದರು.