ಪಿರಿಯಾಪಟ್ಟಣ: ದೇಶದಲ್ಲಿ ಗ್ರಾಮೀಣ ಭಾಗದ ಜನರಿಗೆ ಸ್ಥಳೀಯವಾಗಿ ಅಧಿಕಾರವನ್ನು ಒದಗಿಸಿಕೊಡುವ ಉದ್ದೇಶದಿಂದ ಪಂಚಾಯತ್ ರಾಜ್ ವ್ಯವಸ್ಥೆ ಜಾರಿಗೊಳಿಸಿದ ಕೀರ್ತಿ ಕಾಂಗ್ರೆಸ್ ಪಕ್ಷಕ್ಕೆ ಸಲ್ಲುತ್ತದೆ ಎಂದು ಮಾಜಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ತಿಳಿಸಿದರು.
ಪಟ್ಟಣದ ಆದಿ ಚುಂಚನಗಿರಿ ಸಮುದಾಯ ಭವನದಲ್ಲಿ ಶನಿವಾರ ಪಿರಿಯಾಪಟ್ಟಣ ಮತ್ತು ಬೆಟ್ಟದಪುರ ಬ್ಲಾಕ್ ಕಾಂಗ್ರೆಸ್ ವತಿಯಿಂದ ಹಮ್ಮಿಕೊಂಡಿದ್ದ ಕಾರ್ಯಕರ್ತರ ಸಭೆ ಹಾಗೂ ವಿಧಾನ ಪರಿಷತ್ ಚುನಾವಣೆಯ ಪ್ರಚಾರ ಸಭೆಯಲ್ಲಿ ಮಾತನಾಡಿದರು.
ಪಂಚಾಯಿತ್ ರಾಜ್ ಇಲಾಖೆ ಪ್ರಧಾನಿ ರಾಜೀವ್ ಗಾಂಧಿಯವರ ಕನಸಿನ ಕೂಸು, ಗ್ರಾಮೀಣ ಜನರೇ ಆಡಳಿತದಲ್ಲಿ ನೇರವಾಗಿ ಭಾಗಿಯಾಗಬೇಕು, ಆ ಮೂಲಕ ಅವರೇ ಗ್ರಾಮದ ಅಭಿವೃದ್ಧಿ ಮಾಡಬೇಕು ಎಂದು ಆಲೋಚಿಸಿ ಸಂವಿಧಾನಕ್ಕೆ ತಿದ್ದುಪಡಿ ತಂದು ಗ್ರಾಮೀಣ ಜನರು ಅಧಿಕಾರದಲ್ಲಿ ಪಾಲ್ಗೊಳ್ಳಲು ಅವಕಾಶ ಕಲ್ಪಿಸಿಕೊಟ್ಟರು. ಆದರೆ ಸಂವಿಧಾನ ಬದಲಿಸಬೇಕು ಎಂದು ಹುಂಬುತನ ಪ್ರದರ್ಶಿಸುತ್ತಿರುವ ಕೋಮುವಾದಿಗಳು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬುಡಮೇಲು ಮಾಡುವ ಹುನ್ನಾರ ನಡೆಸಿದರು.
ಈ ಮೂಲಕ ಜನಪ್ರತಿನಿಧಿಗಳ ಅಧಿಕಾರವನ್ನು ಮೊಟಕು ಗೊಳಿಸಲು ಮುಂದಾಗಿದ್ದಾರೆ. ಆದ್ದರಿಂದ ದೇಶ ಹಾಗೂ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಗಟ್ಟಿಗೊಳಿಸಲು ಸಾಮಾಜಿಕ ತಳಹದಿ ಮತ್ತು ಸಾಮಾಜಿಕ ನ್ಯಾಯದ ಪರ ಇರುವ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸುವ ಮೂಲಕ ಸಿದ್ದರಾಮಯ್ಯನವರಿಗೆ ಶಕ್ತಿ ತುಂಬಬೇಕು ಎಂದರು.
ಮಾಜಿ ಶಾಸಕ ಕೆ.ವೆಂಕಟೇಶ್ ಮಾತನಾಡಿ, ಮೈಸೂರು ಮತ್ತು ಚಾಮರಾಜನಗರ ಜಿಲ್ಲೆ ಸೇರಿದಂತೆ ಎರಡು ಜಿಲ್ಲೆಗಳಿಂದ 4ಸಾವಿರಕ್ಕೂ ಹೆಚ್ಚಿನ ಸಂಖ್ಯೆಯಲ್ಲಿ ನಮ್ಮ ಪಕ್ಷದ ಬೆಂಬಲಿತ ಸದಸ್ಯರು ಆಯ್ಕೆಯಾಗಿರುವುದನ್ನು ಮನಗಂಡು ಎರಡು ಅಭ್ಯರ್ಥಿಗಳನ್ನು ನಿಲ್ಲಿಸುವ ಸಲಹೆ ನೀಡಿದ್ದೆ. ಆದರೆ ಪಕ್ಷದ ವರಿಷ್ಠರು ಗೊಂದಲವಾಗುವುದು ಬೇಡಾ ಎಂದು ಹಿರಿಯ ವೈದ್ಯಾಧಿಕಾರಿ ಸಮಾಜ ಸೇವಕ ಪಕ್ಷದ ನಿಷ್ಠಾವಂತ ಕಾರ್ಯಕರ್ತ ಡಾ.ಡಿ.ತಿಮ್ಮಯ್ಯನವರನ್ನು ಒಮ್ಮತದ ಅಭ್ಯರ್ಥಿಯಾಗಿ ಕಣಕ್ಕಿಳಿಸಿದೆ.
ನಮ್ಮ ಪಕ್ಷದ ಅಭ್ಯರ್ಥಿ ಗೆಲ್ಲಲು ಬೇರೆ ಪಕ್ಷದವರನ್ನು ಮತ ಕೇಳುವ ಅಗತ್ಯವಿಲ್ಲ ಸ್ಥಳೀಯ ಸಂಸ್ಥೆಗಳಿಂದ ಗೆಲುವು ಸಾಧಿಸಿರುವ ಎಲ್ಲಾ ಸದಸ್ಯರು ಮೊದಲ ಪ್ರಾಶಸ್ತ್ಯದ ಮತವನ್ನು ನಮ್ಮ ಅಭ್ಯರ್ಥಿಗೆ ನೀಡುವ ಮೂಲಕ ಹೆಚ್ಚು ಬಹುಮತದಿಂದ ಆಯ್ಕೆ ಮಾಡುವ ಮೂಲಕ ಪಕ್ಷ ನಿಷ್ಠೆಯನ್ನು ತೋರಬೇಕು ಎಂದರು.
ಈಗಾಗಲೇ ವಿರೋಧ ಪಕ್ಷದವರು ಸುಳ್ಳು ಆಮಿಷಗಳನ್ನು ನೀಡುವ ಮೂಲಕ ನಿಮ್ಮ ಮನೆ ಬಾಗಿಲಿಗೆ ಬರುತ್ತಿದ್ದಾರೆ ಇವರ ಕುತಂತ್ರಕ್ಕೆ ಯಾರೂ ಬಲಿಯಾಗಬಾರದು ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುತ್ತಿದೆ ಒಳ್ಳಯೆ ದಿನಗಳು ಬರಲಿದ್ದು ಎಚ್ಚರಿಕೆಯಿಂದ ಇರಬೇಕು ಎಂದು ಸಲಹೆ ನೀಡಿದರು.
ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಪುಷ್ಪ ಅಮರ್‌ನಾಥ್ ಮಾತನಾಡಿ, ಗ್ರಾಮ ಪಂಚಾಯಿತಿಗೆ ಸಶಕ್ತಿ ನೀಡಿದ್ದು ಕಾಂಗ್ರೆಸ್, ಪಂಚಾಯಿತಿ ರಾಜ್ ಕಾಯಿದೆಗೆ ತಿದ್ದುಪಡಿ ತಂದು ಗ್ರಾಮ ಸ್ವರಾಜ್ ಜಾರಿಗೆ ತಂದಿದ್ದು ಕಾಂಗ್ರೆಸ್, ಇಂದು ಅರ್ಧಕ್ಕಿಂತ ಹೆಚ್ಚು ಮಹಿಳೆಯರು ಚುನಾವಣೆಯಲ್ಲಿ ಗೆದ್ದು ಬರುತ್ತಿರುವುದಕ್ಕೆ ಸಂವಿಧಾನ ಕಾರಣ, ಶೇ.33 ರಷ್ಷು ಇದ್ದ ಮಹಿಳಾ ಮೀಸಲಾತಿಯನ್ನು 50 ನೀಡಿದ್ದು ಮನಮೋಹನ್ ಸಿಂಗ್ ನೇತೃತ್ವದ ಕಾಂಗ್ರೆಸ್.
ಆದರೆ ಮಹಿಳಾ ಮೀಸಲಾತಿ ವಿರುದ್ಧ ಬಿಜೆಪಿ ಯವರು ನ್ಯಾಯಾಲಯದ ಮೆಟ್ಟಿಲು ಏರಿ ಮೀಸಲಾತಿಯನ್ನು ಬುಡಮೇಲು ಮಾಡುವ ಹುನ್ನಾರ ನಡೆಸುತ್ತಿದ್ದಾರೆ ಅಚ್ಚೆದಿನ್ ಎಂದು ಸ್ವಾತಂತ್ರ್ಯ ಕಸಿಯುವ ಕೆಲಸ ಮಾಡುತ್ತಿದ್ದಾರೆ. ಸಿದ್ದರಾಮಯ್ಯ ನವರನ್ನು ದಲಿತ ವಿರೋಧಿ ಎಂದು ಬಿಂಬಿಸಲು ಮುಂದಾಗಿದ್ದಾರೆ. ಸಂವಿಧಾನ ಮತ್ತು ದಲಿತರ ನಿಜವಾದ ವಿರೋಧಿಗಳು ಬಿಜೆಪಿಯವರು ಎಂದರು.
ವಿಧಾನ ಪರಿಷತ್ ಚುನಾವಣೆಯ ಅಭ್ಯರ್ಥಿ ಡಾ.ಡಿ. ತಿಮ್ಮಯ್ಯ ಮಾತನಾಡಿ, ಪಕ್ಷದ ವರಿಷ್ಠರು ನನ್ನ ಮೇಲೆ ವಿಶ್ವಾಸವಿಟ್ಟು ಅವಕಾಶ ಕಲ್ಪಿಸಿ ಕೊಟ್ಟಿದ್ದಾರೆ. ಆದ್ದರಿಂದ ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳ ಗ್ರಾಪಂ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಸದಸ್ಯರು ಹಾಗೂ ಇತರ ಸ್ಥಳೀಯ ಸಂಸ್ಥೆಗಳ ಸದಸ್ಯರು ಹೆಚ್ಚಿನ ಮತ ನೀಡುವ ಮೂಲಕ ಸ್ಥಳೀಯ ಸಂಸ್ಥೆಗಳ ಧ್ವನಿಯಾಗಿ ವಿಧಾನ ಪರಿಷತ್ತಿನಲ್ಲಿ ಕೆಲಸ ಮಾಡಲು ಅವಕಾಶ ನೀಡಬೇಕು ಎಂದು ಮನವಿ ಮಾಡಿದರು.
ವಿಧಾನ ಪರಿಷತ್ ಸದಸ್ಯ ಆರ್.ಧರ್ಮಸೇನಾ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾ.ಬಿ.ಜೆ.ವಿಜಯಕುಮಾರ್, ತಾ.ಪಂ.ಮಾಜಿ ಸದಸ್ಯ ಐಲಾಪುರ ರಾಮು, ಮುಖಂಡರಾದ ಹೆಚ್.ಡಿ.ಗಣೇಶ್, ನಿತಿನ್ ವೆಂಕಟೇಶ್, ಪಿ.ಮಹದೇವ್, ಸೀಗೂರು ವಿಜಯಕುಮಾರ್ ಸೇರಿದಂತೆ ಮತ್ತಿತರರು ಇದ್ದರು.