ಕಲಬುರಗಿ: ರಾಜ್ಯ ಸಚಿವ ಸಂಪುಟ ವಿಸ್ತರಣೆ, ಪುನಾರಚನೆಯ ಯಾವುದೇ ಚಿಂತನೆಗಳೂ ಇಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.
ಶನಿವಾರ ನಗರದಕ್ಕೆ ಆಗಮಿಸಿದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ರಾಜ್ಯ ಸಚಿವ ಸಂಪುಟ ವಿಸ್ತರಣೆ, ಪುನಾರಚನೆಯ ಯಾವುದೇ ಚಿಂತನೆಗಳೂ ಇಲ್ಲ ಎಂದ ಅವರು, ಕೇಂದ್ರ ಸಂಪುಟದಲ್ಲಿ ರಾಜ್ಯದ ನಾಲ್ವರು ನಾಯಕರಿಗೆ ಸ್ಥಾನ ನೀಡಿರುವುದಕ್ಕೆ ಹರ್ಷ ವ್ಯಕ್ತಪಡಿಸಿ, ಇದು ಅಭಿವೃದ್ಧಿಗೆ ಪೂರಕವಾದ ನಡೆ ಎಂದರು.
ರಾಜ್ಯದಲ್ಲಿ ಕೋವಿಡ್ ಮೂರನೇ ಅಲೆ ಆರಂಭವಾಗುವ ಸಾಧ್ಯತೆಗಳಿದ್ದು, ಆ ಅಲೆಯನ್ನು ಪರಿಣಾಮಕಾರಿಯಾಗಿ ತಡೆಯಲು ಕ್ರಮ ಕೈಗೊಳ್ಳಬೇಕಿದೆ. ಅದರ ಜೊತೆಗೆ ಅಭಿವೃದ್ಧಿ ಕಾರ್ಯಗಳನ್ನೂ ನಡೆಸಬೇಕಿದೆ ಎಂದು ಹೇಳಿದರು.
ಇನ್ನು ಕೆಆರ್ಎಸ್ ಅಣೆಕಟ್ಟು ಬಿರುಕು ವಿಚಾರ ಸಂಬಂಧ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹಾಗೂ ಮಂಡ್ಯ ಸಂಸದೆ ಸುಮಲತಾ ನಡುವೆ ಮುಂದುವರಿದಿರುವ ವಾಕ್ಸಮರ ಕುರಿತ ಪ್ರಶ್ನೆಗೆ ಪ್ರತಿಕ್ರಿಯೆ ನೀಡಲು ನಿರಾಕರಿಸಿದರು.