ಬೆಂಗಳೂರು: ರೈತ ಹುಟ್ಟು ಸ್ವಾಭಿಮಾನಿ ಹಾಗೂ ಮರ್ಯಾದಸ್ಥ. ಸಾಲ ಕೊಟ್ಟವರು ಬಂದು ಕಿಬ್ಬದಿಯ ಕೀಲು ಮುರಿದಂತೆ ಪೀಡಿಸುವಾಗ ಮರ್ಯಾದೆಗೆ ಅಂಜಿ ದಿಕ್ಕು ತೋಚದಂತಾಗಿ ಆತ್ಮಹತ್ಯೆಗೆ ಶರಣಾಗುತ್ತಾನೆ. ಕೃಷಿ ಸಚಿವರು ಹೇಳಿದಂತೆ ರೈತ ಹೇಡಿಯಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.
ಹೆಂಡತಿ, ಮಕ್ಕಳು, ನೆಂಟರು, ಊರಿನವರ ಮುಂದೆ ಮರ್ಯಾದೆ ಹೋಯಿತಲ್ಲ ಎಂದು ಸಾವಿಗೆ ಶರಣಾಗುತ್ತಾನೆ. ಹೇಡಿತನದ ಪಟ್ಟ ಕಟ್ಟಿಕೊಳ್ಳಲು ಅಲ್ಲ. ಕೃಷಿ ಸಚಿವರ ಹೇಳಿಕೆ ರೈತ ಸಮುದಾಯಕ್ಕೆ ಮಾಡಿದ ಅಪಮಾನ ಎಂದು ಸರಣಿ ಟ್ವಿಟ್ ಮೂಲಕ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ರೈತ ರಾಜಕಾರಣಿಗಳಂತೆ ಅಧಿಕಾರಕ್ಕಾಗಿ ಬಣ್ಣ ಬದಲಿಸುವ ಗೋಸುಂಬೆ ವ್ಯಕ್ತಿತ್ವದವನಲ್ಲ. ನೆಲವನ್ನೇ ನಂಬಿ ಬದುಕುವ ಕಡು ಕಷ್ಟ ಜೀವಿ. ಇಂತಹ ರೈತ ಸಮುದಾಯಕ್ಕೆ ಕೇಂದ್ರ-ರಾಜ್ಯ ಸರ್ಕಾರಗಳು ರಟ್ಟೆಗೆ ಬಲ ತುಂಬುವ ಯೋಜನೆಗಳನ್ನು ರೂಪಿಸಿ ಅನುಷ್ಠಾನಗೊಳಿಸಬೇಕೇ ಹೊರತು, ಹೇಡಿ ಎಂಬ ಪಟ್ಟ ಕಟ್ಟಿ ಹೊಣೆಗೇಡಿತನ ಪ್ರದರ್ಶಿಸಬಾರದು ಎಂದು ಸಲಹೆ ನೀಡಿದ್ದಾರೆ.
ಕೃಷಿ ಸಚಿವರೇ ರೈತ ಸಮುದಾಯದ ವಿರುದ್ಧ ಎಲುಬಿಲ್ಲದ ನಾಲಿಗೆ ಹರಿ ಬಿಟ್ಟಿರುವುದು ಖಂಡನೀಯ. ರೈತ ಸಮುದಾಯಕ್ಕೆ ಬಹಿರಂಗವಾಗಿ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದ್ದಾರೆ.