ಬೆಂಗಳೂರು: ರಾಜ್ಯದ ಉತ್ತರ ಕರ್ನಾಟಕ, ಕರಾವಳಿ ಹಾಗೂ ಮಲೆನಾಡಿನ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಿಂದ ಸಂಭವಿಸಿರುವ ಬೆಳೆ ಹಾನಿ, ಆಸ್ತಿ ನಷ್ಟಕ್ಕೆ ಸರ್ಕಾರ ತಕ್ಷಣ ವಿಶೇಷ ಅನುದಾನ ಘೋಷಣೆ ಮಾಡಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಆಗ್ರಹಿಸಿದ್ದಾರೆ.
ಒಂದೇ ಸಮನೆ ಬೀಳುತ್ತಿರುವ ಮಳೆಗೆ ಜನರು ತತ್ತರಿಸಿ ಹೋಗಿದ್ದು, ನೆರೆಪೀಡಿತ ಪ್ರದೇಶಗಳ ಸಂಕಷ್ಟ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಅಧಿಕಾರಿಗಳು ಮತ್ತು ಸಚಿವರನ್ನು ತಕ್ಷಣವೇ ನಿಯೋಜಿಸಬೇಕು ಎಂದು ಟ್ವೀಟ್ ಮೂಲಕ ಒತ್ತಾಯಿಸಿದ್ದಾರೆ.
ಸತತ ಎರಡು ವರ್ಷಗಳಿಂದ ನೆರೆಯಿಂದ ತತ್ತರಿಸಿರುವ ರಾಜ್ಯದ ರೈತರು ಈ ಬಾರಿ ಮತ್ತೆ ಮಳೆಯಿಂದಾಗಿ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಬೆಳೆ, ಮನೆ-ಮಠ ಕಳೆದುಕೊಂಡು ನೆರೆಯಿಂದ ನೊಂದ ರಾಜ್ಯದ ರೈತರ ನೆರವಿಗೆ ರಾಜ್ಯ ಸರ್ಕಾರ ಧಾವಿಸುವ ಮೂಲಕ ವಿಶ್ವಾಸ ತುಂಬುವ ಕೆಲಸವನ್ನು ಸಮರೋಪಾದಿಯಲ್ಲಿ ಕೈಗೆತ್ತಿಕೊಳ್ಳಬೇಕು ಎಂದು ಹೇಳಿದ್ದಾರೆ.
ಕೊರೊನಾ ಸೋಂಕು ಹೆಚ್ಚುತ್ತಿರುವ ಬೆನ್ನಲ್ಲೇ ನೆರೆಹಾವಳಿಯಿಂದ ರೈತರು ದಿಕ್ಕೆಟ್ಟು ಹೋಗಿದ್ದಾರೆ. ಉಪಚುನಾವಣೆಗಳಿಗಿಂತ ರೈತರ ಸಂಕಷ್ಟಕ್ಕೆ ಆದ್ಯತೆಯ ಮೇರೆಗೆ ಸ್ಪಂದಿಸಿ ಸರ್ಕಾರ ತನ್ನ ಹೊಣೆಗಾರಿಕೆ ಪ್ರದರ್ಶಿಸಬೇಕಾದ ತುರ್ತು ಅಗತ್ಯವಿದೆ ಎಂದು ತಿಳಿಸಿದ್ದಾರೆ.
Adella madalla bidi kumaranna ivaru satvaru raitharalva tale yake kedisikollabeku