ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹೃದಯ ಭಾಗದಲ್ಲಿರುವ ಕಂಠೀರವ ಕ್ರೀಡಾಂಗಣಕ್ಕೆ ಹೈಟೆಕ್ ಸ್ಪರ್ಶ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಅದಕ್ಕಾಗಿ ಖಾಸಗಿ ಸಹಭಾಗಿತ್ವದಲ್ಲಿ ಅಂದಾಜು 1500 ಕೋಟಿ ರೂ. ವೆಚ್ಚದಲ್ಲಿ ಕ್ರೀಡಾಂಗಣವನ್ನು ಉನ್ನತೀಕರಿಸಲು ಉದ್ದೇಶಿಸಲಾಗಿದ್ದು, ಈಗಾಗಲೇ ನೀಲನಕ್ಷೆ ಸಿದ್ಧಗೊಂಡಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ನಾರಾಯಣಗೌಡ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಮಾತನಾಡಿದ ಅವರು, ಖಾಸಗಿ ಸಹಭಾಗಿತ್ವದಲ್ಲಿ ಕಂಪನಿಗಳ ಜೊತೆ ಮಾತುಕತೆ ನಡೆಸಲಾಗುತ್ತಿದೆ. ಅದು ಎರಡು ತಿಂಗಳಲ್ಲಿ ಕಾರ್ಯರೂಪಕ್ಕೆ ಬರಲಿದೆ. ಒಳಾಂಗಣ ಸೇರಿದಂತೆ ಇಡೀ ಕ್ರೀಡಾಂಗಣಕ್ಕೆ ಹೈಟೆಕ್ ಸ್ಪರ್ಶ ನೀಡಲಾಗುವುದು ಎಂದರು.
ಇಲ್ಲಿ ಬಹುಮಹಡಿ ಕಟ್ಟಡ, ತ್ರೀ ಸ್ಟಾರ್ ಹೋಟೆಲ್ ಮತ್ತು ಪಂಚತಾರಾ ಹೋಟೆಲ್ ಗಳು, ಪಾರ್ಕಿಂಗ್, ವಾಣಿಜ್ಯ ಮಳಿಗೆಗಳು ಒಳಗೊಂಡಿರುತ್ತವೆ ಎಂದು ಹೇಳಿದರು.
ಇನ್ನೂ ಜಿಲ್ಲೆಗಳ ಕ್ರೀಡಾಂಗಣವನ್ನು ಉನ್ನತೀಕರಿಸಲು ಉದ್ದೇಶಿಸಲಾಗಿದೆ. ಜಿಲ್ಲಾಮಟ್ಟದಲ್ಲಿ ಕ್ರೀಡಾಂಗಣ ಅಭಿವೃದ್ಧಿಗೆ ಖಾಸಗಿ ಕಂಪನಿಗಳು ಮುಂದೆ ಬಂದಲ್ಲಿ ಅವರೊಂದಿಗೆ ಮಾತುಕತೆ ನಡೆಸಲು ಸರ್ಕಾರ ನಿರ್ಧರಿಸಿದೆ. ಕ್ರೀಡಾಂಗಣದ ಅಭಿವೃದ್ಧಿಗೆ ಸಿಎಸ್ಆರ್ ಫಂಡ್ ಬಳಕೆ ಮಾಡಿಕೊಳ್ಳುವ ಬಗ್ಗೆಯೂ ಚರ್ಚಿಸಲಾಗಿದೆ ಎಂದು ತಿಳಿಸಿದರು.
ಇನ್ನು ರಾಜ್ಯದಿಂದ ಒಲಿಂಪಿಕ್ ಕ್ರೀಡಾಕೂಟದಲ್ಲಿ ಪಾಲ್ಗೊಳ್ಳುವ ಕ್ರೀಡಾಪಟುಗಳ ಸಂಖ್ಯೆ ಹೆಚ್ಚಾಗಬೇಕು ಎನ್ನುವುದು ಇದರ ಮೂಲ ಉದ್ದೇಶ. ಒಲಂಪಿಕ್ ನ 14 ವಿಧಗಳ ಕ್ರೀಡಾಂಗಣದಲ್ಲಿ ಪಾಲ್ಗೊಳ್ಳಲು ನೂರಕ್ಕೂ ಹೆಚ್ಚು ಕ್ರೀಡಾಪಟುಗಳು ರಾಜ್ಯದಲ್ಲಿ ಸಿದ್ಧವಾಗಬೇಕು. ಅವರಲ್ಲಿ ಕನಿಷ್ಠ 50 ಕ್ರೀಡಾಪಟುಗಳಾದರೂ ಅರ್ಹತೆ ಪಡೆಯಬೇಕು. ಆ ನಿಟ್ಟಿನಲ್ಲಿ ಅಗತ್ಯವಿರುವ ಕ್ರೀಡಾ ಸೌಲಭ್ಯ ತರಬೇತಿ ನೀಡಲು ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ ಎಂದರು.
ರಾಜ್ಯ ಬಜೆಟ್‌ನಲ್ಲಿ ಈಗಾಗಲೇ 1000 ಕೋಟಿ ರೂ. ನೀಡುವಂತೆ ಮನವಿ ಮಾಡಲಾಗಿದೆ. ಏಕೆಂದರೆ ಪಂಜಾಬ್ ಹಾಗೂ ಹರಿಯಾಣ ಸರ್ಕಾರಗಳು ಕ್ರೀಡಾಕ್ಷೇತ್ರ ಅಭಿವೃದ್ಧಿಗೆ ಹೆಚ್ಚಿನ ಅನುದಾನವನ್ನು ನೀಡುತ್ತಿವೆ. ನಾವು ಕೂಡ ಅನುದಾನವನ್ನು ಹೆಚ್ಚಿಸಬೇಕು. ರಾಜ್ಯದಲ್ಲಿ ಇರುವ ಕ್ರೀಡಾಪಟುಗಳನ್ನು ಗುರುತಿಸಿ ಅವರಿಗೆ ಎಲ್ಲ ಸೌಲಭ್ಯವನ್ನು ಒದಗಿಸಿದರೆ ರಾಜ್ಯಕ್ಕೆ ಮತ್ತು ರಾಷ್ಟ್ರಕ್ಕೆ ಕೀರ್ತಿ ತರಲಿದ್ದಾರೆ ಎಂದು ಹೇಳಿದರು.