ಹುಬ್ಬಳ್ಳಿ: ತೀವ್ರ ಅನಾರೋಗ್ಯದ ಹಿನ್ನೆಲೆಯಲ್ಲಿ ಹುಬ್ಬಳ್ಳಿ ನಗರ ಪೊಲೀಸ್ ಆಯುಕ್ತ ಲಾಬೂರಾಮ್ ಅವರನ್ನು ಮಧ್ಯರಾತ್ರಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ಏರ್ ಲಿಫ್ಟ್ ಮಾಡಲಾಗಿದೆ.
ಅನಾರೋಗ್ಯದ ಹಿನ್ನೆಲೆ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು, ಆದರೆ ಆರೋಗ್ಯ ತೀರಾ ಹದಗೆಟ್ಟ ಹಿನ್ನೆಲೆಯಲ್ಲಿ ಅವರನ್ನು ಮಧ್ಯರಾತ್ರಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.
ಇತ್ತೀಚೆಗೆ ಗಂಟಲುನೋವಿನ ಹಿನ್ನೆಲೆಯಲ್ಲಿ ಅವರು ಶಸ್ತ್ರಚಿಕಿತ್ಸೆಗೊಳಗಾಗಿದ್ದರು. ಕಳೆದ ಕೆಲವು ದಿನಗಳಿಂದ ಎಸ್ ಡಿ ಎಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಶಸ್ತ್ರ ಚಿಕಿತ್ಸೆ ನಂತರ ಕಳೆದ ಎರಡು ದಿನಗಳಿಂದ ತೀವ್ರ ಜ್ವರದಿಂದ ಬಳಲುತ್ತಿದ್ದರು. ಚಿಕಿತ್ಸೆಗೆ ಸ್ಪಂದಿಸದ ಹಿನ್ನೆಲೆಯಲ್ಲಿ ಬುಧವಾರ ರಾತ್ರಿ ಅವರನ್ನು ಬೆಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ.
ಹುಬ್ಬಳ್ಳಿ ಏರ್ ಪೋರ್ಟ್ ಮತ್ತು ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಅನುಮತಿ ಪಡೆದ ನಂತರ, ಬೆಂಗಳೂರಿನಿಂದ ಹುಬ್ಬಳ್ಳಿಗೆ ವಿಮಾನ ಬಂದಿತು. ರಾತ್ರಿ ಸುಮಾರು 2.30 ರ ವೇಳೆಗೆ ವಿಮಾನ ಬೆಂಗಳೂರು ತಲುಪಿದ್ದು, ಆಂಬುಲೆನ್ಸ್ ನಲ್ಲಿ ಅವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಅವರ ಆರೋಗ್ಯ ಸುಧಾರಿಸುತ್ತಿದ್ದು, ಆತಂಕ ಪಡುವ ಅಗತ್ವಿಲ್ಲ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಅಕ್ಟೋಬರ್ 22 ರಂದು ಆರ್-ದಿಲೀಪ್ ಬೆಂಗಳೂರಿಗೆ ವರ್ಗಾವಣೆಯಾದ ಬಳಿಕ, 2004ರ ಬ್ಯಾಚ್ ಐಪಿಎಸ್ ಅಧಿಕಾರಿ ಲಾಬೂ ರಾಮ್ ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ.