ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ಮಸ್ಕಿ, ಬಸವಕಲ್ಯಾಣ ಮತ್ತು ಸಿಂದಗಿ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ನಮ್ಮ ಪಕ್ಷದಿಂದ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗುವುದು ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್. ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ.
ನಗರದ ಅರಮನೆ ಮೈದಾನದಲ್ಲಿ ಭಾನುವಾರ ನಡೆದ ಪಕ್ಷದ ಸಮಾವೇಶದಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗುವುದು ಎಂದು ಘೋಷಣೆ ಮಾಡಿದ ಅವರು, ಮೂರು ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ಬೇಡ ಎಂಬ ನಿರ್ಧಾರವನ್ನು ಈ ಹಿಂದೆ ಕೈಗೊಳ್ಳಲಾಗಿತ್ತು. ಅದಕ್ಕೆ ಕಾರಣ ಪಕ್ಷಕ್ಕೆ ಆರ್ಥಿಕ ಶಕ್ತಿ ಇಲ್ಲ ಎಂಬುದಾಗಿತ್ತು.
ಹೀಗಾಗಿ ಈ ತೀರ್ಮಾನಕ್ಕೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ. ದೇವೇಗೌಡ ಅವರು ಪ್ರಕಟಿಸಿದ್ದರು. ಆದರೆ ಈಗ ಮೂರು ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ನಿರ್ಧರಿಸಲಾಗಿದೆ ಎಂದರು.
ಸ್ಪರ್ಧೆಯಿಂದ ಜೆಡಿಎಸ್ ದೂರ ಉಳಿಯಲಿದೆ ಎಂದಾಗ ಕೆಲವರು ಟೀಕಿಸಿದರು. ಬಿಜೆಪಿಗೆ ಅನುಕೂಲ ಮಾಡಿಕೊಡಲು ಜೆಡಿಎಸ್ ಮುಂದಾಗಿದೆ ಎಂಬ ಆರೋಪ ಮಾಡಿದ್ದರು. ಆದರೆ ಅಂತಹ ಯಾವ ಆಲೋಚನೆಯೂ ತಮ್ಮ ಪಕ್ಷಕ್ಕೆ ಇಲ್ಲ ಎಂದು ಇದೇ ವೇಳೆ ಹಿಯ್ಯಾಳಿಸಿದವರಿಗೆ ತಿರುಗೇಟು ನೀಡಿದರು.
ಇನ್ನು 2023ರಲ್ಲಿ ನಡೆಯುವ ವಿಧಾನಸಭಾ ಚುನಾವಣೆಯಲ್ಲಿಯೂ ಯಾವುದೇ ರಾಷ್ಟ್ರೀಯ ಪಕ್ಷಗಳ ಜೊತೆ ಜೆಡಿಎಸ್ ಮೈತ್ರಿ ಮಾಡಿಕೊಳ್ಳುವುದಿಲ್ಲ. ರಾಜ್ಯ ಎಲ್ಲ 224 ಕ್ಷೇತ್ರಗಳಲ್ಲೂ ಸ್ವತಂತ್ರವಾಗಿ ಪಕ್ಷ ಸ್ಪರ್ಧೆ ಮಾಡಲಿದೆ ಎಂದು ಕುಮಾರಸ್ವಾಮಿ ತಿಳಿಸಿದರು
ರಾಜ್ಯದಲ್ಲಿ ಪಕ್ಷದ ಎಲ್ಲಾ ಹಂತದ ಪದಾಧಿಕಾರಿಗಳನ್ನು ಪಾರದರ್ಶಕವಾಗಿ ನೇಮಕ ಮಾಡಲಾಗುವುದು. ಹಣ ಉಳ್ಳವರಿಗಿಂತಲೂ ಪಕ್ಷದ ನಿಷ್ಠೆ ಇರುವವರಿಗೆ ಆದ್ಯತೆ ನೀಡಲಾಗುತ್ತದೆ ಎಂದು ಹೇಳಿದರು.