ಮೈಸೂರು: ಮೈಸೂರು ಜಿಲ್ಲೆಯಲ್ಲಿ ವ್ಯಾಪಕವಾಗಿ ಕೋವಿಡ್-19 ಸೋಂಕು ಹರಡುತ್ತಿರುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ನಂಜನಗೂಡಿನ ನಂಜುಂಡೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಆಕ್ಟೋಬರ್ 17 ರಿಂದ ನವೆಂಬರ್ 1 ರವರೆಗೆ ಸಾರ್ವಜನಿಕರ ದರ್ಶನವನ್ನು ರದ್ಧುಪಡಿಸಲಾಗಿದೆ ಎಂದು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಆದೇಶ ಹೊರಡಿಸಿದ್ದಾರೆ.
ಕೇಂದ್ರ ಮತ್ತು ರಾಜ್ಯ ಸರ್ಕಾರ ಘೋಷಿಸಲ್ಪಟ್ಟ ಶಿಷ್ಟಾಚಾರ ವ್ಯವಸ್ಥೆ ಹೊಂದಿರುವ ಗಣ್ಯ ವ್ಯಕ್ತಿಗಳು, ಸರ್ಕಾರಿ ಕೆಲಸಗಳ ನಿಮಿತ್ತ ತೆರಳುವ ಅಧಿಕಾರಿಗಳನ್ನು ಹೊರತುಪಡಿಸಿ ಸಾರ್ವಜನಿಕರಿಗೆ ದೇಗುಲ ಪ್ರವೇಶವನ್ನು ನಿಷೇಧಿಸಲಾಗಿದೆ.
ಈ ಸಂದರ್ಭದಲ್ಲಿ ದೇವಾಲಯದಲ್ಲಿ ಜರುಗುವ ಧಾರ್ಮಿಕ ಕಾರ್ಯಕ್ರಮಗಳನ್ನು ದೇವಾಲಯದ ಅರ್ಚಕರು ಮತ್ತು ಸಿಬ್ಬಂದಿ ಉಪಸ್ಥಿತಿಯಲ್ಲಿ ದೇವಾಲಯದ ಒಳಭಾಗದಲ್ಲಿ ಎಂದಿನಂತೆ ನಡೆಸಬಹುದಾಗಿದೆ ಎಂದು ತಿಳಿಸಿದ್ದಾರೆ.
ಮೃಗಾಲಯ ಬಂದ್
ದಸರಾ ಹಿನ್ನೆಲೆ ಮೈಸೂರು ಪ್ರವಾಸಿ ತಾಣಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುವ ಸಂಭವ ಹಿನ್ನೆಲೆ ಕೋವಿಡ್-19 ಹರಡುವಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಮೈಸೂರು ಮೃಗಾಲಯವನ್ನು ಅಕ್ಟೋಬರ್ 17 ರಿಂದ ನವೆಂಬರ್ 1 ರವರೆಗೆ ಸಾರ್ವಜನಿಕರ ವೀಕ್ಷಣೆಗೆ ನಿರ್ಬಂಧಗೊಳಿಸಲಾಗಿದೆ ಎಂದು ಮೃಗಾಲಯದ ಕಾರ್ಯನಿರ್ವಾಹಕ ನಿರ್ದೇಶಕರು ತಿಳಿಸಿದ್ದಾರೆ.
ದಸರಾ ಸಂದರ್ಭದಲ್ಲಿ ಮೈಸೂರಿನ ಪ್ರವಾಸಿ ಸ್ಥಳಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುವ ಹಿನ್ನೆಲೆ ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ, ಜಿಲ್ಲಾಧಿಕಾರಿಗಳು ಮತ್ತು ದಸರಾ ವಿಶೇಷಾಧಿಕಾರಿಗಳ ಅಧ್ಯಕ್ಷತೆಯಲ್ಲಿ ದಸರಾ-2020 ರ ಪೂರ್ವಸಿದ್ಧತಾ ಸಭೆಯಲ್ಲಿ ನಿರ್ಣಯವಾದಂತೆ 16 ದಿನಗಳ ಕಾಲ ಮೃಗಾಲಯವನ್ನು ಪ್ರವಾಸಿಗರ ವೀಕ್ಷಣೆಗೆ ನಿರ್ಬಂಧಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ.