ತಿ.ನರಸೀಪುರ: ಗ್ರಾಮದಲ್ಲಿ ಹಾಕಿದ್ದ ಮಹಾನಾಯಕ ಧಾರವಾಹಿ ಫ್ಲೆಕ್ಸ್ ಹರಿದು ಅಂಬೇಡ್ಕರ್ ಅವರಿಗೆ ಅವಮಾನ ಮಾಡಿರುವ ಕಿಡಿಗೇಡಿಗಳನ್ನು ಬಂಧಿಸಬೇಕು ಎಂದು ಆಗ್ರಹಿಸಿ ನಾಗಲಗೆರೆ ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದಾರೆ.
ಮೈಸೂರು ಜಿಲ್ಲೆಯ ತಿ.ನರಸೀಪುರ ತಾಲೂಕಿನ ನಾಗಲಗೆರೆ ಗ್ರಾಮದಲ್ಲಿ ಹಾಕಿದ್ದ ಮಹಾನಾಯಕ ಧಾರವಾಹಿ ಫ್ಲೆಕ್ಸ್ ಅನ್ನು ಯಾರೋ ಹರಿದು ಹಾಕಿದ್ದು, ಕಿಡಿಗೇಡಿಗಳನ್ನು ಬಂಧಿಸಿ ಅವರಿಗೆ ತಕ್ಕ ಶಿಕ್ಷೆ ನೀಡಬೇಕು ಎಂದು ಆಗ್ರಹಿಸಿದರು.
ಖಾಸಗೀ ವಾಹಿನಿಯಲ್ಲಿ ಮೂಡಿಬರುತ್ತಿರುವ ಅಂಬೇಡ್ಕರ್ ಅವರ ಜೀವನಾಧಾರಿತ ಮಹಾನಾಯಕ ಧಾರವಾಹಿಯಲ್ಲಿನ ಮೌಲ್ಯಗಳನ್ನು ತಿಳಿಯದ ಇಂಥ ಅವಿವೇಕಿಗಳನ್ನು ಗಡಿಪಾರು ಮಾಡಬೇಕು ಎಂದು ಘಟನೆಯನ್ನು ತೀವ್ರವಾಗಿ ಖಂಡಿಸಿದರು. ಕೂಡಲೇ ಆರೋಪಿಗಳನ್ನು ಬಂಧಿಸಬೇಕು. ಅಸ್ಪೃಶ್ಯತೆ ಕಾಯ್ದೆಯಡಿ ಪ್ರಕರಣ ದಾಖಲಿಸಿ ಆರೋಪಿಗಳಿಗೆ ಉಗ್ರ ಶಿಕ್ಷೆ ನೀಡಬೇಕೆಂದು ದಲಿತ ಸಂಘರ್ಷ ಸಮಿತಿ ಸದಸ್ಯರು ಆಗ್ರಹಿಸಿದರು.
ಉಪನಿರೀಕ್ಷಕ ಮಂಜುನಾಥ್, ತಿ.ನರಸೀಪುರ ತಾಲೂಕು ಪೊಲೀಸ್ ಸಿಬ್ಬಂದಿ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳುವ ಭರಸವೆ ನೀಡಿದ ಬಳಿಕ ಪ್ರತಿಭಟನೆ ಕೈಬಿಟ್ಟರು.