ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು ಗ್ರಾಮಾಂತರ: ಜಿಲ್ಲೆಯ ವಿಜಯಪುರ ಪುರಸಭೆಗೆ ಇದೆ 27ರಂದು ನಡೆದ ಸಾರ್ವತ್ರಿಕ ಚುನಾವಣೆ-2021ರ ಮತ ಎಣಿಕೆ ಕಾರ್ಯ ದೇವನಹಳ್ಳಿ ತಹಸೀಲ್ದಾರ್ ಕಚೇರಿಯಲ್ಲಿ ಏಪ್ರಿಲ್ 30 ರಂದು ನಡೆಯುವ ಹಿನ್ನೆಲೆಯಲ್ಲಿ ಪಟ್ಟಣಾದ್ಯಂತ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ನಿಷೇಧಾಜ್ಞೆ ಜಾರಿ ಮಾಡಿ ಆದೇಶ ಹೊರಡಿಸಿದ್ದಾರೆ.
ಮತ ಎಣಿಕೆಯಲ್ಲಿ ಪಾಲ್ಗೊಳ್ಳುವ ಅಭ್ಯರ್ಥಿಗಳು, ರಾಜಕೀಯ ಪ್ರತಿನಿಧಿಗಳು, ಬೆಂಬಲಿಗರ ಆರೋಗ್ಯದ ಹಿತದೃಷ್ಟಿಯಿಂದ ಪರಿಣಾಮಕಾರಿಯಾಗಿ ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ಕಲಂ 144ರ ಮೇರೆಗೆ ದೇವನಹಳ್ಳಿ ಪಟ್ಟಣದಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಲಾಗಿದ್ದು ಎಲ್ಲರೂ ಸಹಕರಿಸಬೇಕು ಎಂದು ತಿಳಿಸಿದ್ದಾರೆ.
ಏಪ್ರಿಲ್ 30 ರಂದು ದೇವನಹಳ್ಳಿ ಪಟ್ಟಣದಾದ್ಯಂತ ಸಂತೆ, ಜಾತ್ರೆ, ಮೆರವಣಿಗೆ, ಸಮಾವೇಶ, ಸಮ್ಮೇಳನ, ಕ್ರೀಡಾಕೂಟ, ಸಮಾರಂಭಗಳು ಹಾಗೂ ಇತರ ಯಾವುದೇ ಧಾರ್ಮಿಕ ಸಮಾರಂಭಗಳನ್ನು ಪ್ರತಿಬಂಧಿಸಿ, ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವುದನ್ನು ಕಡ್ಡಾಯಗೊಳಿಸಿ, ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ ಹಾಗೂ ಚುನಾವಣೆಯಲ್ಲಿ ವಿಜೇತರಾದ ಅಭ್ಯರ್ಥಿಗಳು ಯಾವುದೇ ರೀತಿಯ ವಿಜಯೋತ್ಸವ ಆಚರಿಸುವುದನ್ನು ನಿರ್ಬಂಧಿಸಿದೆ.
ಆದೇಶವನ್ನು ಉಲ್ಲಂಘಿಸುವವರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ 2005ರಡಿ ಸೆಕ್ಷನ್ 22 ಹಾಗೂ ವಿಪತ್ತು ನಿರ್ವಹಣಾ ಕಾಯ್ದೆ 2005ರಡಿ ಸೆಕ್ಷನ್ 51 ರಿಂದ 60, ಐ.ಪಿ.ಸಿ. ಸೆಕ್ಷನ್ 188 ಮತ್ತು ಕರ್ನಾಟಕ ಸಾಂಕ್ರಾಮಿಕ ರೋಗಗಳ ಕಾಯ್ದೆ 2020ರ ಸೆಕ್ಷನ್ 4, 5 ಮತ್ತು 10ರಡಿ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆದ ಕೆ.ಶ್ರೀನಿವಾಸ್ ತಿಳಿಸಿದ್ದಾರೆ.