ಬೆಂಗಳೂರು: ಮಹಿಳಾ ಮತ್ತು ಮಕ್ಕಳ ಇಲಾಖೆಯಲ್ಲಿ ಮೊಟ್ಟೆ ಖರೀದಿಯಲ್ಲಿ ಅವ್ಯವಹಾರವಾಗಿದೆ ಎಂಬ ಕುಟುಕು ಕಾರ್ಯಾಚರಣೆಯಲ್ಲಿ ಪ್ರಸಾರವಾಗುತ್ತಿರುವ ಸುದ್ದಿ ಸತ್ಯಕ್ಕೆ ದೂರವಾಗಿದ್ದು, ಇದರ ಹಿಂದೆ ರಾಜಕೀಯ ಷಡ್ಯಂತ್ರ ಅಡಗಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣಾಭಿವೃದ್ಧಿ ಸಚಿವೆ ಶಶಿಕಲಾ ಜೊಲ್ಲೆ ಹೇಳಿದ್ದಾರೆ.
ಭ್ರಷ್ಟಾಚಾರದ ಬಗೆಗಿನ ಸುದ್ದಿ ಪ್ರಸಾರಕ್ಕೆ ಸ್ಪಷ್ಟನೆ ನೀಡಿರುವ ಜೊಲ್ಲೆ, ವೈಯಕ್ತಿಕವಾಗಿ ತೇಜೊವಧೆ ಮಾಡುವ ಪ್ರಯತ್ನ ನಡೆಸಲಾಗುತ್ತಿದೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಸಚಿವ ಸಂಪುಟದಲ್ಲಿ ಏಕೈಕ ಮಹಿಳಾ ಸಚಿವೆಯಾಗಿ ಮಹಿಳೆಯರು, ಮಕ್ಕಳು, ವೃದ್ಧರು, ವಿಕಲಚೇತನರ ಏಳಿಗೆಗಾಗಿ ನಿರಂತರ ಶ್ರಮಿಸುತ್ತಿದ್ದೇನೆ.
ಕೊರೊನಾ ಎರಡನೇ ಅಲೆಯ ಸಂದರ್ಭದಲ್ಲಿ ಮಕ್ಕಳು ಮತ್ತು ಮಹಿಳೆಯರ ಮೇಲೆ ಉಂಟಾದ ಸಮಸ್ಯೆ ಪರಿಹಾರಕ್ಕಾಗಿ ರಾಜ್ಯಾದ್ಯಂತ ಪ್ರವಾಸ ಮಾಡಿ ಇಲಾಖೆ ವತಿಯಿಂದ ಅಗತ್ಯ ಸೌಲಭ್ಯ ಒದಗಿಸುವ ಪ್ರಯತ್ನ ಮಾಡಿರುವುದಾಗಿ ತಿಳಿಸಿದ್ದಾರೆ.
ಕೊರೊನಾ ಮೂರನೇ ಅಲೆ ಮಕ್ಕಳ ಮೇಲೆ ಹೆಚ್ಚಿನ ಪರಿಣಾಮ ಬೀರುತ್ತದೆ ಎಂಬ ತಜ್ಞರ ವರದಿ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲ ತಾಲೂಕು ಹಾಗೂ ಜಿಲ್ಲಾ ಆಸ್ಪತ್ರೆಗಳಲ್ಲಿ ಮಕ್ಕಳಿಗಾಗಿ ಪ್ರತ್ಯೇಕ ವಾರ್ಡ್ ತೆರೆಯಲು ಕ್ರಮ ವಹಿಸಲಾಗಿದೆ. ರಾಜ್ಯದಲ್ಲಿ ಅಪೌಷ್ಠಿಕತೆ ಪ್ರಮಾಣವು ಶೇ 0.3 ರಷ್ಟಿತ್ತು.
ತಾನು ಅಧಿಕಾರ ಸ್ವೀಕರಿಸಿದ ಮೇಲೆ ಎರಡು ವರ್ಷಗಳಲ್ಲಿ ಶೇ 0.1ಕ್ಕೆ ಇಳಿಸಲಾಗಿದೆ.ಒಬ್ಬ ಮಹಿಳೆಯಾಗಿ ನನಗೆ ಪಕ್ಷ ಹಾಗೂ ಮುಖ್ಯಮಂತ್ರಿ ಯಡಿಯೂರಪ್ಪ ಅವರು ನೀಡಿರುವ ಅವಕಾಶದಲ್ಲಿ ಮಹಿಳೆಯರು ಮತ್ತು ಮಕ್ಕಳ ಏಳಿಗೆಗಾಗಿ ಶಕ್ತಿ ಮೀರಿ ಶ್ರಮಿಸುತ್ತಿರುವುದಾಗಿ ಹೇಳಿದ್ದಾರೆ.
ಮೊಟ್ಟೆ ಖರೀದಿಗೆ ಇದೂವರೆಗೂ ಯಾವುದೇ ಟೆಂಡರ್ ಕರೆದಿಲ್ಲ. ಟೆಂಡರ್ ನೀಡಲು ವೈಯಕ್ತಿಕವಾಗಿ ಯಾವುದೇ ವ್ಯಕ್ತಿ ಅಥವಾ ಸಂಸ್ಥೆಯಿಂದ ಹಣಕ್ಕಾಗಿ ಬೇಡಿಕೆ ಇಟ್ಟಿಲ್ಲ. ನಮ್ಮ ಬಿಜೆಪಿ ಪಕ್ಷದ ಶಾಸಕರಾದ ಪರಣ್ಣ ಮುನವಳ್ಳಿಯವರು ತಮ್ಮ ಸಂಬಂಧಿಕರು ಎಂದು ಕರೆದುಕೊಂಡು ಬಂದಾಗ ಕಾನೂನು ಪ್ರಕಾರ ಟೆಂಡರ್ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವಂತೆ ಸೂಚಿಸಿದ್ದೇನೆ.
ಇದರಲ್ಲಿ ಯಾವುದೇ ಹಣಕಾಸಿನ ವ್ಯವಹಾರದ ಕುರಿತು ನಾನು ಮಾತನಾಡಿಲ್ಲ. ನನ್ನ ವಿರುದ್ಧ ಆಧಾರರಹಿತವಾಗಿ ಷಡ್ಯಂತ್ರ ನಡೆಸುತ್ತಿರುವವರ ವಿರುದ್ಧ ಕಾನೂನು ಹೋರಾಟವನ್ನೂ ಮಾಡಲು ಚಿಂತನೆ ನಡೆಸುತ್ತಿದ್ದೇನೆ ಎಂದು ಜೊಲ್ಲೆ ತಿಳಿಸಿದ್ದಾರೆ.