NEWSಕೃಷಿದೇಶ-ವಿದೇಶರಾಜಕೀಯ

ವಿಪಕ್ಷಗಳ ಬಹಿಷ್ಕಾರದ ನಡುವೆ ಭಾಷಣ ಮಾಡಿದ ರಾಷ್ಟ್ರಪತಿ ರಾಮನಾಥ್ ಕೋವಿಂದ್ : ಮೋದಿ ಸರ್ಕಾರ ಕೊಂಡಾಡಿದರು

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ನ್ಯೂಡೆಲ್ಲಿ: ಕೃಷಿ ಕಾಯ್ದೆಗಳ ವಿರುದ್ಧ ನಡೆಯುತ್ತಿರುವ ಪ್ರತಿಭಟನೆಯ ಹಿನ್ನೆಲೆಯಲ್ಲಿ ತೀವ್ರ ಹಣಾಹಣಿ ನಡೆಯುವ ಸಾಧ್ಯತೆಯಿರುವ ಸಂಸತ್ತಿನ ಬಜೆಟ್ ಅಧಿವೇಶನ ಶುಕ್ರವಾರದಿಂದ ಆರಂಭವಾಗಿದೆ.

ವಿಪಕ್ಷಗಳಿಂದ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಭಾಷಣ ಬಹಿಷ್ಕರಿಸಲಾಗಿದೆ. ಈ ನಡುವೆಯೂ ಈ ವರ್ಷದ ಮೊದಲ ಸಂಸತ್ ಕಲಾಪದ, ಮೊದಲ ದಿನ ಲೋಕಸಭೆ ಹಾಗೂ ರಾಜ್ಯಸಭೆಯ ಜಂಟಿ ಅಧಿವೇಶನವನ್ನುದ್ದೇಶಿಸಿ ರಾಷ್ಟ್ರಪತಿಗಳು ಭಾಷಣ ಮಾಡುತ್ತಿದ್ದು, ಕೊರೊನಾ ಸಾಂಕ್ರಾಮಿಕ ರೋಗ ಆರಂಭವಾದ ದಿನಗಳಲ್ಲಿ ನಾವು ಸಾಕಷ್ಟು ಜನರನ್ನು ಕಳೆದುಕೊಂಡಿದ್ದೇವೆ. ಕೊರೊನಾ ಸಂದರ್ಭದಲ್ಲಿಯೇ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿಯವರು ನಿಧನ ಹೊಂದಿದ್ದರು. ಕೊರೊನಾದಿಂದ 6 ಸಂಸದರು ನಮ್ಮನ್ನು ಅಗಲಿದರು. ಈ ಎಲ್ಲರಿಗೂ ಗೌರವ ನಮನ ಸಲ್ಲಿಸಿದರು.

ಕೊರೊನಾ ಸಾಂಕ್ರಾಮಿಕ ರೋಗ ಹಿನ್ನೆಲೆಯಲ್ಲಿ ಈ ಜಂಟಿ ಅಧಿವೇಶನ ಅತ್ಯಗತ್ಯವಿತ್ತು. ಹೊಸ ವರ್ಷ, ಹೊಸ ದಶಕದ ಮೊದಲ ಅಧಿವೇಶನ ಇದಾಗಿದ್ದು, ಸಂಸತ್ತಿನ ಈ ಅಧಿವೇಶನ ಅತ್ಯಂತ ಮಹತ್ವಪೂರ್ಣವಾಗಿದೆ. ಸವಾಲುಗಳನ್ನು ಎದುರಿಸಿ ಭಾರತ ಮುನ್ನಡೆಯುತ್ತಿದೆ. ಭಾರತ ಅಸಾಧ್ಯವಾದುದನ್ನು ಸಾಧ್ಯ ಮಾಡಿ ತೋರಿಸಿದೆ. ಎಲ್ಲಾ ಪರಿಸ್ಥಿತಿಗಳನ್ನು ಯಶಸ್ವಿಯಾಗಿ ನಿಭಾಯಿಸಲಾಗಿದೆ ಎಂದು ಹೇಳಿದರು.

ಇಂದು ದೇಶದಲ್ಲಿ ಕೊರೊನಾ ಹೊಸ ಪ್ರಕರಣಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಗುಣಮುಖರಾಗುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದೆ. ಭಾರತದ ವಿಶ್ವದಲ್ಲಿಯೇ ಅತೀ ದೊಡ್ಡ ಲಸಿಕೆ ಅಭಿಯಾನಕ್ಕೆ ಚಾಲನೆ ನೀಡಿರುವುದು ಹೆಮ್ಮೆಯ ವಿಚಾರ. ಎರಡು ಲಸಿಕೆಗಳು ಸ್ವದೇಶಿ ನಿರ್ಮಿತ ಲಸಿಕೆಗಳಾಗಿವೆ. ನಮ್ಮ ಸರ್ಕಾರ ತೆಗೆದುಕೊಂಡ ಈ ಸಮಯೋಚಿತ ನಿರ್ಧಾರ ಲಕ್ಷಾಂತರ ನಾಗರಿಕರ ಜೀವವನ್ನು ಉಳಿಸಿದೆ ಇದು ನನಗೆ ತೃಪ್ತಿ ತಂದಿದೆ ಎಂದರು.

ಆತ್ಮನಿರ್ಭರತೆಯತ್ತ ನಾವು ವೇಗವಾಗಿ ಮುನ್ನಡೆಯಬೇಕು. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಎಲ್ಲಾ ವರ್ಗಗಳ ಕಲ್ಯಾಣಕ್ಕೆ ಶ್ರಮಿಸುತ್ತಿದೆ. ಕೊರೊನಾ ಸಂದರ್ಭದಲ್ಲಿ ಸರ್ಕಾರ ಹಲವು ಯೋಜನೆಗಳನ್ನು ನೀಡಿದೆ. ನಮ್ಮ ಒಂದು ಕೈಯಲ್ಲಿ ಕರ್ತವ್ಯ, ಮತ್ತೊಂದು ಕೈಯಲ್ಲಿ ಯಶಸ್ಸಿದೆ. ಇದೀಗ ಭಾರತ ವಿದೇಶಗಳಿಗೆ ಕೊರೊನಾ ಲಸಿಕೆ ಪೂರೈಸುತ್ತಿದೆ. ಈ ಮುನ್ನ ಕೊರೊನಾ ಸಂದರ್ಭದಲ್ಲಿ ಆರ್ಥಿಕ ಪ್ಯಾಕೇಜ್ ಘೋಷಿತ್ತು. ಈಗ ಕೊರೊನಾ ಲಸಿಕೆ ವಿಚಾರದಲ್ಲಿ ಭಾರತ ಆತ್ಮನಿರ್ಭರವಾಗಿದೆ ಎಂದು ತಿಳಿಸಿದರು.

ದೇಶದಲ್ಲಿ ಬಡವರಿಗೆ ಉಚಿತವಾಗಿ ಚಿಕಿತ್ಸೆ ಸಿಗುತ್ತಿದೆ. ಆಯುಷ್ಮಾನ್ ಭಾರತ್ ಯೋಜನೆಯಿಂದ ಬಡವರಿಗೆ ಸಹಾಯವಾಗುತ್ತಿದೆ. ಬಡವರಿಗೆ ರೂ.5 ಲಕ್ಷದವರೆಗೂ ಉಚಿತ ಚಿಕಿತ್ಸೆ ಸಿಗುತ್ತಿದೆ. ದೇಶದಲ್ಲಿ ಇದೀಗ 562 ವೈದ್ಯಕೀಯ ಕಾಲೇಜುಗಳಿವೆ. ರೈತರ ಉತ್ಪನ್ನಕ್ಕೆ ಒಂದೂವರೆ ಪಟ್ಟು ಕನಿಷ್ಠ ಬೆಂಬಲ ಬೆಲೆ ನೀಡಲು ನಿರ್ಧಾರ ಹಾಗೂ ನೀರಾವರಿ ಯೋಜನೆಗಳಲ್ಲಿ ಸುಧಾರಣೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಇನ್ನು ಕೊರೊನಾ ಸೋಂಕಿನಿಂದ ದೇಶದಲ್ಲಿ ಉಂಟಾಗಿರುವ ಬಿಕ್ಕಟ್ಟಿನಲ್ಲಿಯೂ ಭಾರತ ಮಾನವೀಯತೆಯನ್ನು ತೋರಿದೆ. ಹಲವಾರು ರಾಷ್ಟ್ರಗಳಿಗೆ ಲಕ್ಷಾಂತರ ಲಸಿಕೆಗಳನ್ನು ನೀಡಿದೆ. ಜನೌಷಧ ಕೇಂದ್ರಗಳ ಮೂಲಕ ಕಡಿಮೆ ದರದಲ್ಲಿ ದೇಶವಾಸಿಗಳಿಗೂ ಔಷಧ ನೀಡಲಾಗಿದೆ ಎಂದರು.

ಗಣರಾಜ್ಯೋತ್ಸವ ದಿನ ಹಿಂಸಾಚಾರ: ಖಂಡನೆ
ಕೃಷಿ ಕಾಯ್ದೆಗಳ ಜಾರಿಗೆ ಮುನ್ನ ರೈತರಿಗೆ ನೀಡಲಾಗಿದ್ದ ಹಕ್ಕುಗಳನ್ನು ಕಸಿಯುವುದಿಲ್ಲ. ಬದಲಿಗೆ ಹೆಚ್ಚುವರಿ ಸೌಲಭ್ಯ, ಹಕ್ಕುಗಳನ್ನು ಕೃಷಿ ಕಾಯ್ದೆಗಳ ಮೂಲಕ ನೀಡಲಾಗಿದೆ. ಇನ್ನು ಗಣರಾಜ್ಯೋತ್ಸವ ದಿನ ನಡೆದ ಅಪಮಾನ ದೌರ್ಭಾಗ್ಯಪೂರ್ಣ. ರಾಷ್ಟ್ರಧ್ವಜ ಮತ್ತು ಗಣರಾಜ್ಯೋತ್ಸವದ ಪವಿತ್ರ ದಿನವನ್ನೇ ಅವಮಾನಿಸಲಾಯಿತು. ಸಂವಿಧಾನವು ನಮಗೆ ವಾಕ್ ಸ್ವಾತಂತ್ರ್ಯ ನೀಡುತ್ತದೆ. ಅದೇ ಸಂವಿಧಾನವು ಕಾನೂನು ಮತ್ತು ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದೂ ಕೂಡ ಹೇಳುತ್ತದೆ ಎಂದರು.

100ಕ್ಕೂ ಹೆಚ್ಚು ಕೃಷಿ ರೈಲುಗಳನ್ನು ಓಡಿಸಲಾಗುತ್ತಿದೆ. ಡೇರಿ ಕ್ಷೇತ್ರದ ಅಭಿವೃದ್ಧಿ ನಿಟ್ಟಿನಲ್ಲಿ ಕೆಲಸ ಮಾಡಲಾಗುತ್ತಿದೆ. ಅನ್ನದಾತರನ್ನು ಇಂಧನದಾತರನ್ನಾಗಿಯೂ ಮಾಡಲಾಗುತ್ತಿದೆ. ಇಥೆನಾಲ್ ಉತ್ಪಾದನೆಯಿಂದ ರೈತರ ಆದಾಯ ಹೆಚ್ಚಾಗಲಿದೆ. ಈ ಮೂಲಕ ಸಣ್ಣ ರೈತರಿಗೆ ದೊಡ್ಡ ರೈತರಷ್ಟೇ ಆದಾಯ ಸಿಗುವಂತಾಗಬೇಕು ಎಂಬ ದೃಷ್ಟಿಯಿಂದ ಕೃಷಿ ಆದಾಯ ಹೆಚ್ಚಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ನಿರತವಾಗಿದೆ ಎಂದರು.

ಕೃಷಿ ತಿದ್ದುಪಡಿ ಕಾಯ್ದೆಗಳ ಬಗ್ಗೆ ವದಂತಿ ಹಬ್ಬಿಸಲಾಗುತ್ತಿದೆ. ಸಣ್ಣ ಉದ್ಯಮಗಳನ್ನು ಸಶಕ್ತಗೊಳಿಸಲಾಗುತ್ತಿದೆ. 1 ರೂಪಾಯಿಗೆ ಸ್ಯಾನಿಟರಿ ಪ್ಯಾಡ್ ನೀಡಲು ಯೋಜನೆ ಹಮ್ಮಿಕೊಳ್ಳಲಾಗಿದೆ. ದೇಶದಲ್ಲಿ ಬಾಣಂತಿಯರ ಸಾವಿನ ಸಂಖ್ಯೆ ಕಡಿಮೆಯಾಗಿದೆ ಎಂದು ಹೇಳಿದರು.

ಇನ್ನು ಕೃಷಿ ಕ್ಷೇತ್ರವನ್ನು ಲಾಭದಾಯಕಗೊಳಿಸುವ ನಿಟ್ಟಿನಲ್ಲಿ ಹೆಜ್ಜೆ ಇಟ್ಟಿದ್ದು, ಗ್ರಾಮಗಳಲ್ಲಿ ಎಲ್ಲ ರೀತಿಯ ಸೌಲಭ್ಯ ಕಲ್ಪಿಸಲು ಯೋಜನೆ ಹಮ್ಮಿಕೊಳ್ಳಲಾಗಿದೆ. ದೇಶದ ಕಾನೂನನ್ನು ಗಂಭೀರವಾಗಿ ಪಾಲಿಸುವ ಅಗತ್ಯವಿದೆ ಎಂಬ ಅಭಿಪ್ರಾಯವನ್ನು ಪಟ್ಟರು.

Leave a Reply

error: Content is protected !!
LATEST
NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು