ಬೆಂಗಳೂರು: ರಾಜ್ಯದ ಪ್ರವಾಹ ಪೀಡಿತ ಜಿಲ್ಲೆಗಳಿಗೆ 85.49 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗಿದ್ದು, ಪ್ರವಾಹ ಸಂತ್ರಸ್ತರ ನೋವಿಗೆ ಸ್ಪಂದಿಸಿ, ನೆರೆ ನಿರ್ವಹಣೆಗೆ ಸೂಕ್ತ ಕ್ರಮ ಕೈಗೊಳ್ಳಬೇಕು. ಎಂದು 12 ಜಿಲ್ಲೆಗಳ ಅಧಿಕಾರಿಗಳಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೂಚಿಸಿದ್ದಾರೆ.
ಪ್ರವಾಹದಿಂದ ಹಾನಿಗೊಳಗಾದ ಜಿಲ್ಲೆಗಳ ಡಿಸಿಗಳು ಮತ್ತು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾ ಧಿಕಾರಿಗಳೊಂದಿಗೆ ಶುಕ್ರವಾರ ಗೃಹ ಕಚೇರಿ ಕೃಷ್ಣಾದಲ್ಲಿ ವಿಡಿಯೋ ಸಂವಾದ ನಡೆಸಿ ಸೂಚನೆ ನೀಡಿದರು.
ವಾಡಿಕೆಗಿಂತ ಹೆಚ್ಚು ಮಳೆಯಾಗಿದ್ದು, ವಾಸ್ತವ ಸ್ಥಿತಿಯ ಚಿತ್ರಣ ನೀಡಿ. ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಅಕ್ಟೋಬರ್ 10 ರಿಂದ 15 ರವರೆಗೆ ಕಲಬುರಗಿ, ಬೀದರ್, ಯಾದಗಿರಿ, ಬಳ್ಳಾರಿ, ರಾಯಚೂರು, ಬಾಗಲಕೋಟೆ, ದಾವಣಗೆರೆ, ಕೊಪ್ಪಳ, ದಕ್ಷಿಣ ಕನ್ನಡ, ಶಿವಮೊಗ್ಗ, ಉಡುಪಿ, ವಿಜಯಪುರ ಹಾಗೂ ಬೆಳಗಾವಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಿಂದ ಭೀಮಾ ಮತ್ತು ಇದರ ಉಪನದಿಗಳಲ್ಲಿ ದಾಖಲೆ ಪ್ರಮಾಣದ ಒಳಹರಿವು ಕಂಡುಬಂದಿದೆ ಎಂದು ಮಾಹಿತಿ ನೀಡಿದರು.
ಪ್ರವಾಹ ಪೀಡಿತ ಜಿಲ್ಲೆಗಳಿಗೆ 85.49 ಕೋಟಿ ರೂ.ಗಳನ್ನು ತುರ್ತು ಪರಿಹಾರಕ್ಕಾಗಿ ಈಗಾಗಲೇ ಬಿಡುಗಡೆ ಮಾಡಲಾಗಿದ್ದು, ರಕ್ಷಣಾ ಕಾರ್ಯಗಳಿಗೆ ಅಗತ್ಯವಿರುವ ಸಂಪನ್ಮೂಲಗಳನ್ನೂ ಜಿಲ್ಲಾಡಳಿತಗಳಿಗೆ ಒದಗಿಸಲಾಗಿದೆ. ಪ್ರವಾಹ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸಲು ಸಮರೋಪಾದಿಯಲ್ಲಿ ಸನ್ನದ್ಧರಾಗಬೇಕು ಎಂದು ಜಿಲ್ಲಾಧಿಕಾರಿಗಳಿಗೆ ತಿಳಿಸಿದರು.
ಪ್ರವಾಹಕ್ಕೆ ತುತ್ತಾಗಬಹುದಾದ ಗ್ರಾಮಗಳ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರ ಮಾಡಲು ಕ್ರಮ ವಹಿಸಿ. ಸಂತ್ರಸ್ತರಿಗೆ ಉತ್ತಮ ಆಹಾರ ಪೂರೈಕೆಯಾಗಬೇಕು, ಕೋವಿಡ್ ಪರಿಸ್ಥಿತಿ ಹಿನ್ನೆಲೆ ಕಾಳಜಿ ಕೇಂದ್ರಗಳಲ್ಲಿ ಎಸ್.ಒ.ಪಿ ಪಾಲನೆ ಮಾಡಿ. ಈ ಬಗ್ಗೆ ಯಾವುದೇ ದೂರುಗಳು ಬರಬಾರದು. ಜಾನುವಾರುಗಳಿಗೂ ರಕ್ಷಣೆ ನೀಡಿ, ಮೇವು ಪೂರೈಕೆಯಾಗಬೇಕು ಎಂದು ತಿಳಿಸಿದರು.
ನೆರೆ ಸಂತ್ರಸ್ತರ ರಕ್ಷಣೆಗಾಗಿ ಪುಣೆ ಮತ್ತು ಚನ್ನೈ ನಿಂದ ಎನ್‍ಡಿಆರ್‍ಎಫ್ ನ ಆರು ಹೆಚ್ಚುವರಿ ತಂಡಗಳು ಸೇರಿದಂತೆ ಒಟ್ಟು 12 ಎನ್‍ಡಿಆರ್‍ಎಫ್ ತಂಡಗಳನ್ನು ನಿಯೋಜಿಸಲಾಗಿದೆ. ಕಲಬುರಗಿಗೆ ಮೂರು, ಯಾದಗಿರಿಗೆ ಎರಡು ಹಾಗೂ ರಾಯಚೂರಿಗೆ ಒಂದು ತಂಡವನ್ನು ರಕ್ಷಣಾ ಕಾರ್ಯಗಳಿಗೆ ನಿಯೋಜಿಸಲಾಗಿದೆ.
ಕೋವಿಡ್-19 ಹಿನ್ನೆಲೆ ಕಾಳಜಿ ಕೇಂದ್ರಗಳಲ್ಲಿ ಸಾಮಾಜಿಕ ಅಂತರ, ಮಾಸ್ಕ್ ಗಳ ಪೂರೈಕೆ ಸೇರಿ ವೈದ್ಯರು ಭೇಟಿ ನೀಡಿ ತಪಾಸಣೆ ಮಾಡುವಂತೆ ವ್ಯವಸ್ಥೆ ಕೈಗೊಳ್ಳಲು ಹಾಗೂ ಕೋವಿಡ್ ಲಕ್ಷಣಗಳಿರುವವರು ಕಂಡುಬಂದಲ್ಲಿ ಆಸ್ಪತ್ರೆಗಳಿಗೆ ತಕ್ಷಣ ಸ್ಥಳಾಂತರಿಸಲು ಸಿಎಂ ಸೂಚಿಸಿದರು.
ಉಡುಪಿ, ದಕ್ಷಿಣ ಕನ್ನಡ, ಬಾಗಲಕೋಟೆ ಹಾಗೂ ಬಳ್ಳಾರಿ ಜಿಲ್ಲೆಗಳಿಂದ 14 ದೋಣಿಗಳನ್ನು ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳಿಗೆ ಕಳುಹಿಸಲಾಗಿದೆ. ನೆರೆ ಸಂತ್ರಸ್ತರ ರಕ್ಷಣೆಗಾಗಿ ರಕ್ಷಣಾ ಹೆಲಿಕಾಪ್ಟರ್‍ಗಳನ್ನು ಕಳುಹಿಸಲಾಗಿದೆ. ಸಂಘ ಸಂಸ್ಥೆಗಳು, ಸಾರ್ವಜನಿಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸ ನಿರ್ವಹಿಸಿ. ಜನರ ನೋವಿಗೆ ತಕ್ಷಣ ಸ್ಪಂದಿಸಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಪ್ರವಾಹದಿಂದ ಬೆಳೆ ಹಾನಿಯಾದ 51,810 ಸಂತ್ರಸ್ತ ರೈತರ ಬ್ಯಾಂಕ್ ಖಾತೆಗೆ 36.57 ಕೋಟಿ ರೂ.ಗಳ ಇನ್‍ಪುಟ್ ಸಬ್ಸಿಡಿಯನ್ನು ನೇರವಾಗಿ ಬಿ.ಎಸ್.ಯಡಿಯೂರಪ್ಪ ಇಂದು ಆನ್‍ಲೈನ್ ಮೂಲಕ ಜಮೆ ಮಾಡಿದರು. ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್, ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ಡಾ.ಇ.ವಿ.ರಮಣರೆಡ್ಡಿ, ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಐ.ಎಸ್.ಎನ್. ಪ್ರಸಾದ್ ಹಾಗೂ ಹಿರಿಯ ಅಧಿಕಾರಿಗಳು ಇದ್ದರು.