ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ಮಹಿಳೆಯರಿಗೆ ಆಸರೆಯಾಗಿದ್ದ ಸಾಂತ್ವನ ಕೇಂದ್ರಗಳಿಗೆ ಸರ್ಕಾರ ಬೀಗ ಜಡಿಯಲ್ಲ ಎಂದಿದ್ದ ಮುಖ್ಯಮಂತ್ರಿಗಳು ಸದ್ದಿಲ್ಲದಂತೆ ಎಲ್ಲಾ ಜಿಲ್ಲಾ ಮತ್ತು ಕೆಲವು ತಾಲೂಕು ಮಟ್ಟದ 71 ಕೇಂದ್ರಗಳ ಸಾಂತ್ವನ ಕೇಂದ್ರಗಳಿಗೆ ಬೀಗ ಜಡಿಸಿ ಮಾತು ತಪ್ಪಿದ್ದಾರೆ ಎಂದು ಮಾಜಿ ಮುಖ್ಯಮಂತಿ ಎಚ್.ಡಿ. ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕೋವಿಡ್ 19 ಸಂಕಷ್ಟದಲ್ಲಿ ಸ್ತ್ರೀಯರಿಗೆ ಮತ್ತೊಂದು ಬರೆ ಎಳೆದಂತಾಗಿದೆ. ಕೌಟುಂಬಿಕ ಹಿಂಸಾಚಾರ ನಿಯಂತ್ರಿಸಿ ಮಹಿಳೆಯರು ಮತ್ತು ಮಕ್ಕಳಿಗೆ ರಕ್ಷಣೆ ಒದಗಿಸುವ ವಿಶ್ವಸಂಸ್ಥೆಯ ಆಶಯ ಬದಿಗೊತ್ತಿರುವುದು ಖಂಡನೀಯ ಎಂದು ಕಿಡಿರಿದ್ದಾರೆ.
ಕಳೆದ ಎರಡು ದಶಕಗಳಿಂದ ಸಾಂತ್ವನ ಯೋಜನೆ ಅತ್ಯಂತ ಯಶಸ್ವಿಯಾಗಿ ನಡೆಯುತ್ತಿದ್ದು, ಜಿಲ್ಲಾ, ತಾಲೂಕು ಮಟ್ಟದಲ್ಲಿನ ಸಾಂತ್ವನ ಕೇಂದ್ರಗಳು ಮಹಿಳೆಯರ ಸಮಸ್ಯೆಗಳಿಗೆ ಧ್ವನಿಯಾಗಿ, ಆತ್ಮವಿಶ್ವಾಸ ಮೂಡಿಸುತ್ತಿವೆ.
ರಾಜ್ಯದ ಪ್ರತಿ ಜಿಲ್ಲೆ ಹಾಗೂ ತಾಲೂಕುಗಳಲ್ಲಿ ಆರಂಭಗೊಂಡಿದ್ದ ಸಾಂತ್ವನ ಕೇಂದ್ರಗಳನ್ನು ಸ್ಥಗಿತಗೊಳಿಸಿ ಅದೇಶ ಹೊರಡಿಸಿರುವುದು ದೂರು ದುಮ್ಮಾನ ಪರಿಹರಿಸುವವರು ಯಾರು ಎಂಬ ಪ್ರಶ್ನೆ ಈಗ ಎದುರಾಗಿದೆ. ಜಿಲ್ಲೆಗೆ ಕೇವಲ ಒಂದೇ ಒಂದು ಕೇಂದ್ರ ಇರುವ ಕಾರಣ ಎಲ್ಲರಿಗೂ ಸುಲಭವಾಗಿ ನೆರವು ಸಿಗಲು ಸಾಧ್ಯವಾಗುತ್ತಿಲ್ಲ ಎಂದು ಹೇಳಿದ್ದಾರೆ.
ಇನ್ನು ಕೌಟುಂಬಿಕ ಸಮಸ್ಯೆ ಎದುರಿಸುತ್ತಿರುವ ಮಹಿಳೆಯರ ಕಷ್ಟವನ್ನು ದೇವರೇ ಕಾಪಾಡಬೇಕಿದೆ. ಈ ಸಮಯದಲ್ಲಿ ಸಾಂತ್ವನ ಸಿಬ್ಬಂದಿಯನ್ನು ಕೆಲಸದಿಂದ ತೆಗೆಯುವುದು ಸೂಕ್ತವಲ್ಲ.
ಮುಖ್ಯಮಂತ್ರಿ ಯಡಿಯೂರಪ್ಪನವರೇ ಈ ಕೂಡಲೇ ಅದೇಶ ಹಿಂಪಡೆದು ಸಾಂತ್ವನ ಕೇಂದ್ರಗಳನ್ನು ಮುಂದುವರಿಸಿ. ಶೋಷಿತ ಮಹಿಳೆಯರಿಗೆ ಸಾಂತ್ವನ ಕೇಂದ್ರಗಳು ಆಸರೆಯಾಗಲಿ ಎಂದು ಸಲಹೆ ನೀಡಿದ್ದಾರೆ.