ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ಕೊರೊನಾ ಸೋಂಕಿನಿಂದ ರಾಜ್ಯ ನಲುಗಿ ಹೋಗುತ್ತಿರುವ ಸಂದರ್ಭದಲ್ಲಿ ಮತ್ತು ಉಪ ಚುನಾವಣೆ ಫಲಿತಾಂಶದ ಮಧ್ಯೆಯೇ ಡಿಸಿಎಂ ಹಾಗೂ ಕೆಲವು ಸಚಿವರಿಗೆ ಜಿಲ್ಲಾ ಉಸ್ತುವಾರಿ ಸಚಿವ ಸ್ಥಾನ ನೀಡಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಆದೇಶ ಹೊರಡಿಸಿದ್ದಾರೆ.
ಈಗಾಗಲೇ ಸಿಎಂ ಸೂಚಿಸಿದ ಹೆಸರುಗಳಿಗೆ ರಾಜ್ಯಪಾಲರು ಅಂಕಿತ ಹಾಕಿದ್ದು, ಅದರಂತೆ, ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರು ಬೆಳಗಾವಿ ಉಸ್ತುವಾರಿ ಸಚಿವರಾಗಿದ್ದಾರೆ.
ಇನ್ನು ಆಹಾರ ಮತ್ತು ನಾಗರಿಕ ಇಲಾಖೆ ಸಚಿವ ಉಮೇಶ್ ಕತ್ತಿ ಅವರಿಗೆ ಬಾಗಲಕೋಟೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಅರವಿಂದ ಲಿಂಬಾವಳಿ ಅವರನ್ನು ಬೀದರ್ ಜಿಲ್ಲೆ ಉಸ್ತುವಾರಿ ಸಚಿವರನ್ನಾಗಿ ನೇಮಕ ಮಾಡಲಾಗಿದೆ.
ಪೌರಾಡಳಿತ ಸಚಿವ ಎಂಟಿಬಿ ನಾಗರಾಜ್ ಅವರಿಗೆ ಕೋಲಾರ, ಗಣಿ ಇಲಾಖೆ ಸಚಿವ ಮುರುಗೇಶ್ ನಿರಾಣಿ ಅವರಿಗೆ ಕಲಬುರಗಿ ಮತ್ತು ಮೀನುಗಾರಿಕೆ ಇಲಾಖೆ ಸಚಿವ ಎಸ್ ಅಂಗಾರ ಅವರಿಗೆ ಚಿಕ್ಕಮಗಳೂರು ಜಿಲ್ಲೆಯ ಉಸ್ತುವಾರಿ ಸಚಿವ ಸ್ಥಾನವನ್ನು ನೀಡಿ ಆದೇಶ ಹೊರಡಿಸಲಾಗಿದೆ.