ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರ ಮಾಧ್ಯಮ ಸಮನ್ವಯ ಅಧಿಕಾರಿಯಾಗಿದ್ದ ಹಿರಿಯ ಪತ್ರಕರ್ತ ಕೆ.ಸಿ.ಸದಾನಂದ ನಿಧನರಾಗಿದ್ದಾರೆ.
ತೀವ್ರ ಹೃದಯಾಘಾತದಿಂದ ತಡರಾತ್ರಿ 12 ಗಂಟೆ ಸುಮಾರಿಗೆ ನಿಧನ ಹೊಂದಿದ್ದಾರೆ. ಪತ್ನಿ ಮತ್ತು ಪುತ್ರನನ್ನು ಅಗಲಿದ್ದಾರೆ.
ತೀವ್ರ ಹೃದಯಾಘಾತಕ್ಕೀಡಾದ ಅವರನ್ನು ಕೂಡಲೇ ಎಂ.ಎಸ್.ರಾಮಯ್ಯ ಆಸ್ಪತ್ರೆಗೆ ಕರೆದೊಯ್ಯಲಾಗುತ್ತಿತ್ತು. ಆದರೆ ಮಾರ್ಗ ಮಧ್ಯೆಯೇ ಅಸುನೀಗಿದ್ದಾರೆ ಎಂದು ಕುಟುಂಬದ ಮೂಲಗಳು ಖಚಿತಪಡಿಸಿವೆ.
ಮಾಜಿ ಸಿಎಂ ಕುಮಾರಸ್ವಾಮಿ ಅವರು 2018ರಲ್ಲಿ ರಾಜ್ಯದ ಸಿಎಂ ಆಗಿದ್ದಾಗ ಹಿರಿಯ ಪತ್ರಕರ್ತ ಸದಾನಂದ ಕೆ.ಸಿ ಅವರನ್ನು ಮಾಧ್ಯಮ ಸಮನ್ವಯ ಅಧಿಕಾರಿಯನ್ನಾಗಿ ನೇಮಿಸಿದ್ದರು. ಅವರು ಈ ಹಿಂದೆ ಸಂಜೆವಾಣಿ, ಕರ್ನಾಟಕ ಮಲ್ಲ ಪತ್ರಿಕೆಗಳಲ್ಲಿ ಸುದೀರ್ಘ ಕಾಲ ಪತ್ರಕರ್ತರಾಗಿ ಸೇವೆ ಸಲ್ಲಿಸಿದ್ದರು.
ನಿನ್ನೆವರೆಗೂ ಅವರು ಕುಮಾರಸ್ವಾಮಿ ಅವರ ಬಳಿ ಮಾಧ್ಯಮ ನಿರ್ವಹಣೆ ಮಾಡುತ್ತಿದ್ದರು.
ಮಾಜಿ ಸಿಎಂ ಕುಮಾರಸ್ವಾಮಿ ಸಂತಾಪ
ದೀರ್ಘ ಕಾಲದ ನನ್ನ ಒಡನಾಡಿ, ಹಿರಿಯ ಪತ್ರಕರ್ತ, ಮಾಧ್ಯಮ ಕಾರ್ಯದರ್ಶಿಯೂ ಆಗಿದ್ದ ಕೆ.ಸಿ. ಸದಾನಂದ ನಿಧನರಾಗಿದ್ದಾರೆ. ಅವರ ಅಗಲಿಕೆ ನನ್ನನ್ನು ನೋವಿಗೆ ತಳ್ಳಿದೆ. ಎಂಥ ಆಮಿಷಗಳಿಗೂ ಜಗ್ಗದ ಸದಾನಂದ ಕರ್ತವ್ಯನಿಷ್ಠೆ, ಸ್ವಾಮಿನಿಷ್ಠೆಯನ್ನೂ ಪ್ರದರ್ಶಿಸಿದ್ದರು. ಅವರ ಕುಟುಂಬದ ನೋವು ನನ್ನದೂ ಕೂಡ. ನೀವು ನಿರ್ಗಮಿಸಿದರೂ ‘ಸದಾ’ ನೆನಪಲ್ಲಿರುತ್ತೀರಿ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಸಂತಾಪ ಸೂಚಿಸಿದ್ದಾರೆ.