ಬೆಂಗಳೂರು: ಭದ್ರಾ ಮೇಲ್ದಂಡೆ ಯೋಜನೆಯ 20 ಸಾವಿರ ಕೋಟಿ ರೂ. ಮೊತ್ತದ ಕಾಮಗಾರಿಯಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಪುತ್ರ ವಿಜಯೇಂದ್ರ ಕಿಕ್‌ಬ್ಯಾಕ್ ಪಡೆದಿರುವ ಆರೋಪದಲ್ಲಿ ಯಾವುದೇ ಹುರುಳಿಲ್ಲ. ಹೀಗಾಗಿ ಈ ಬಗ್ಗೆ ತನಿಖೆ ನಡೆಸುವ ಅವಶ್ಯಕತೆ ಇಲ್ಲ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಬಗ್ಗೆ ಆರೋಪ ಕೇಳಿ ಬಂದ ತಕ್ಷಣ ಜಲ ಸಂಪನ್ಮೂಲ ಇಲಾಖೆ ಕಾರ್ಯದರ್ಶಿ ಅವರು ದಾಖಲೆಗಳ ಸಹಿತ ಸತ್ಯಾಂಶ ಬಹಿರಂಗಪಡಿಸಿದ್ದಾರೆ. ಹೀಗಾಗಿ ಈ ಬಗ್ಗೆ ತನಿಖೆಯ ಅವಶ‍್ಯಕತೆ ಇಲ್ಲ ಎಂದು ತಿಳಿಸಿದರು.
ಈ ವಿಚಾರವಾಗಿ ವಿಪಕ್ಷದವರು ಅನಗತ್ಯವಾಗಿ ಟೀಕೆ ಮಾಡುತ್ತಿದ್ದಾರೆ. ವಿಪಕ್ಷದವರು ಟೀಕೆ ಮಾಡುವುದು ಸಹಜ. ಆದರೆ, ಟೆಂಡರ್ ಪ್ರಕ್ರಿಯೆ ಪ್ರಾರದರ್ಶಕವಾಗಿರುವ ಹಿನ್ನೆಲೆಯಲ್ಲಿ ತನಿಖೆ ನಡೆಸುವ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ಇನ್ನು ಶಾಸಕ ಅರವಿಂದ ಬೆಲ್ಲದ್ ಅವರ ಫೋನ್ ಕದ್ದಾಲಿಕೆ ಪ್ರಕರಣದ ಕುರಿತು ತನಿಖೆ ನಡೆಯುತ್ತಿದೆ. ಬೆಲ್ಲದ್ ಅವರೊಂದಿಗೆ ತನಿಖಾಧಿಕಾರಿ ಮಾತುಕತೆ ನಡೆಸಿದ್ದಾರೆ ಎಂದು ತಳಿಸಿದರು.