ಬೆಂಗಳೂರು: ರಾಜ್ಯ ಬಿಜೆಪಿಯ ಮಹತ್ವದ ಬೆಳವಣಿಗೆಯೊಂದರಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯನ್ನು ಇಂದು (ಮಂಗಳವಾರ) ಸಂಜೆ 7.30ಕ್ಕೆ ಕರೆಯಲಾಗಿದೆ. ಇಂದೇ ರಾಜ್ಯದ ನೂತನ ಮುಖ್ಯಮಂತ್ರಿ ಆಯ್ಕೆ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
ಮುಖ್ಯಮಂತ್ರಿ ಸ್ಥಾನಕ್ಕೆ ಯಡಿಯೂರಪ್ಪ ರಾಜೀನಾಮೆ ನೀಡಿರುವ ಹಿನ್ನೆಲೆಯಲ್ಲಿ ಬಿಜೆಪಿ ವರಿಷ್ಠರು ಇಂದು ಸಂಜೆ ಖಾಸಗಿ ಹೊಟೇಲ್ ವೊಂದರಲ್ಲಿ ಬಿಜೆಪಿ ಶಾಸಕಾಂಗ ಸಭೆ ಕರೆದಿದ್ದಾರೆ ಎಂದು ತಿಳಿದುಬಂದಿದೆ.
ಇಂದು ಸಂಜೆ ಬಿಜೆಪಿ ಶಾಸಕಾಂಗ ಸಭೆ ನಿಗದಿಯಾಗಿದ್ದು, ಸಭೆಯಲ್ಲಿ ಶಾಸಕಾಂಗ ಪಕ್ಷದ ನಾಯಕ ಹಾಗೂ ಸಿಎಂ ಆಯ್ಕೆ ಬಗ್ಗೆ ಕೇಂದ್ರದ ಬಿಜೆಪಿ ವೀಕ್ಷಕರು ಶಾಸಕರ ಅಭಿಪ್ರಾಯ ಸಂಗ್ರಹಿಸಿ ವರದಿಯನ್ನು ಕೇಂದ್ರದ ವರಿಷ್ಠರಿಗೆ ಸಲ್ಲಿಸಲಿದ್ದಾರೆ ಎನ್ನಲಾಗುತ್ತಿದೆ.
ನೂತನ ಮುಖ್ಯಮಂತ್ರಿ ಆಯ್ಕೆ ಮಾಡುವ ನಿಟ್ಟಿನಲ್ಲಿ ಹೈಕಮಾಂಡ್ ನೇಮಕ ಮಾಡಿರುವ ವೀಕ್ಷಕ ಧರ್ಮೆಂದ್ರ ಪ್ರಧಾನ್ ಹಾಗೂ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ದೆಹಲಿಯಿಂದ ಬೆಂಗಳೂರಿಗೆ ಬಂದಿಳಿಯಲಿದ್ದಾರೆ.
ಶಾಸಕಾಂಗ ಪಕ್ಷದ ಸಭೆಯಲ್ಲಿ ಮುಂದಿನ ಮುಖ್ಯಮಂತ್ರಿ ಯಾರು ಎಂಬುದನ್ನು ಶಾಸಕರಿಗೆ ವೀಕ್ಷಕರು ತಿಳಿಸಲಿದ್ದಾರೆ. ಆ ಬಳಿಕ ನೂತನ ಶಾಸಕಾಂಗ ಪಕ್ಷದ ನಾಯಕನ ಹೆಸರನ್ನು ಹಿರಿಯ ಶಾಸಕರು ಅನುಮೋದಿಸಲಿದ್ದಾರೆ ಎಂದು ತಿಳಿದುಬಂದಿದೆ.