ಸರ್ಕಾರಿ ಭೂಮಿ ಒತ್ತುವರಿಯಾಗದಂತೆ ಕ್ರಮವಹಿಸಿ: ಪ್ರಾದೇಶಿಕ ಆಯುಕ್ತ ನವೀನ್ ರಾಜ್ ಸಿಂಗ್
ಬೆಂಗಳೂರು ಗ್ರಾಮಾಂತರ: ಸರ್ಕಾರದ ಭೂಮಿಯನ್ನು ಅಕ್ರಮವಾಗಿ ಒತ್ತುವರಿ ಮಾಡಿರುವವರ ವಿರುದ್ಧ ಕ್ರಿಮಿನಲ್ ಪ್ರಕರಣಗಳನ್ನು ದಾಖಲಿಸಿ, ಸರ್ಕಾರದ ಭೂಮಿಗಳನ್ನು ಮರಳಿ ವಶಪಡಿಸಿಕೊಳ್ಳುವ ಮೂಲಕ ಸರ್ಕಾರಿ ಭೂಮಿ ಒತ್ತುವರಿಯಾಗದಂತೆ ಅಧಿಕಾರಿಗಳು ಕ್ರಮವಹಿಸಬೇಕು ಎಂದು ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತ ನವೀನ್ ರಾಜ್ ಸಿಂಗ್ ತಿಳಿಸಿದರು.
ದೇವನಹಳ್ಳಿ ತಾಲೂಕಿನ ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ನಡೆದ ‘ಪ್ರಗತಿ ಪರಿಶೀಲನಾ ಸಭೆ’ಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಕಂದಾಯ ಗ್ರಾಮಗಳ ರಚನೆಗೆ ಸಂಬಂಧಿಸಿದಂತೆ ಹಾಗೂ ಕೋವಿಡ್ ನಿಯಮಗಳನ್ನು ಪಾಲಿಸಿ, ಕಂದಾಯ ಅದಾಲತ್ ಪ್ರಾರಂಭಿಸಲು ಸೂಚಿಸಿದರಲ್ಲದೆ, ಸಭೆಯಲ್ಲಿ ಆರ್.ಟಿ.ಸಿ ಪ್ರಗತಿಯ ಕುರಿತು ವಿವಿಧ ಆಯಾಮಗಳಲ್ಲಿ ಚರ್ಚಿಸಿದರು.
ನಾಡಕಚೇರಿಗಳ ನಿರ್ಮಾಣಕ್ಕೆ ಸ್ಥಳ ಹಾಗೂ ಹಣ ಮಂಜೂರಾತಿ ಮಾಡಲು ಅಗತ್ಯವಾದ ದಾಖಲೆಗಳನ್ನು ಒದಗಿಸುವಂತೆ ತಿಳಿಸಿದರಲ್ಲದೆ, ಆರ್.ಟಿ.ಸಿಗಳಲ್ಲಿ ಸರ್ಕಾರಿ ಭೂಮಿಗಳಿದ್ದರೆ ನಮೂದಿಸಬೇಕು ಹಾಗೂ ಆರ್.ಟಿ.ಸಿ ತಿದ್ದುಪಡಿ ಬಾಕಿ ಇರುವ ಎಲ್ಲಾ ಭೂ ಪ್ರಕರಣಗಳನ್ನು ಶೀಘ್ರವಾಗಿ ಇತ್ಯರ್ಥ ಮಾಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.
ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಕಾಮಗಾರಿಗೆ ಸಂಬಂಧಿಸಿದ ಬಹುತೇಕ ಸಮಸ್ಯೆಗಳಿಗೆ ಪರಿಹಾರವನ್ನು ನೀಡಲಾಗಿದ್ದು, ಇತರೆ ಯಾವುದೇ ಸಮಸ್ಯೆಗಳ ಇದ್ದಲ್ಲಿ ಜಿಲ್ಲಾಧಿಕಾರಿಗಳ ಅವಗಾಹನೆಗೆ ತಂದು, ತ್ವರಿತವಾಗಿ ಪರಿಹರಿಸಿಕೊಳ್ಳಬೇಕು. ಅನಗತ್ಯ ವಿಷಯಗಳ ಬಗ್ಗೆ ಕಾಲ ಹರಣ ಮಾಡದೆ, ಕಾಮಗಾರಿಯ ಕೆಲಸವನ್ನು ಶೀಘ್ರ ಪೂರ್ಣಗೊಳಿಸಿ, ಸಾರ್ವಜನಿಕರ ಬಳಕೆಗೆ ಮುಕ್ತ ಅವಕಾಶ ಕಲ್ಪಿಸಬೇಕು ಎಂದು ತಿಳಿಸಿದರು.
ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್, ಅಪರ ಪ್ರಾದೇಶಿಕ ಆಯುಕ್ತರಾದ ಇಸ್ಲಾಂಮುದ್ದಿನ್ ಜೆ. ಗದ್ಯಾಳ, ಅಪರ ಜಿಲ್ಲಾಧಿಕಾರಿ ವಿಜಯಾ.ಈ.ರವಿಕುಮಾರ್, ಉಪ ವಿಭಾಗಾಧಿಕಾರಿ ಅರುಳ್ ಕುಮಾರ್, ಡಿಡಿಎಲ್ಆರ್ ನ ಹನುಮಂತಗೌಡ, ತಹಶೀಲ್ದಾರ್ ಗಳು ಸೇರಿದಂತೆ ಕಂದಾಯ ಇಲಾಖೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.