ಉತ್ತರ ಕನ್ನಡ: ಜಿಲ್ಲೆಯಲ್ಲಿ ಕಳೆದ ಎರಡು ದಿನದಿಂದ ಸುರಿಯುತ್ತಿರುವ ಧಾರಾಕಾರ ಮಳೆಗೆ ಗುಡ್ಡ ಕುಸಿತ ಸೇರಿ ಹಲವಾರು ಅವಾಂತರಗಳು ಉಂಟಾಗುತ್ತಿದೆ. ಇದರ ಜತೆಗೆ ಪ್ರವಾಹ ಭೀತಿಯೂ ಈಗ ಜಿಲ್ಲೆಯ ಜನರನ್ನು ಕಾಡುತ್ತಿದೆ.
ಮುಂದಿನ ದಿನಗಳಲ್ಲಿ ವರುಣನ ಆರ್ಭಟ ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇದ್ದು ಇದರಿಂದ ಗಂಗಾವತಿ ನದಿಯು ಮೈದುಂಬಿ ಹರಿಯುತ್ತಿದ್ದು, ಪ್ರವಾಹ ಭೀತಿಯಲ್ಲಿ ಸಮುದ್ರ ಮತ್ತು ನದಿಪಾತ್ರದ ಜನರು ಇದ್ದಾರೆ.
ಜಿಲ್ಲೆಯ ಕರಾವಳಿ ತಾಲೂಕುಗಳಾದ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ ಭಾಗದಲ್ಲಿ ಭಾರಿ ಮಳೆಯಾಗುತ್ತಿದೆ. ಇದರಿಂದಾಗಿ ತಗ್ಗು ಪ್ರದೇಶಗಳು ಜಲಾವೃತಗೊಂಡಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ.
ನಿರಂತರವಾಗಿ ಮಳೆಯಾಗುತ್ತಿರುವುದರಿಂದ ಗಾಜನೂರು ಜಲಾಶಯಕ್ಕೆ 23,560 ಸಾವಿರ ಕ್ಯೂಸೆಕ್ ನೀರು ಹರಿದು ಬರುತ್ತಿದ್ದು, ಎಲ್ಲಾ 22 ಕ್ರಸ್ಟ್‌ಗೇಟ್‌ಗಳನ್ನು ತೆರೆದು ಅಷ್ಟೇ ಪ್ರಮಾಣದ ನೀರನ್ನು ಹೊರಬಿಡಲಾಗುತ್ತಿದೆ. ಇದರಿಂದಾಗಿ ಶಿವಮೊಗ್ಗ ನಗರದಲ್ಲಿರುವ ಐತಿಹಾಸಿಕ ಕೋರ್ಪಲಯ್ಯನ ಛತ್ರದ ಮಂಟಪವು ಮುಳುಗಲು ಎರಡು ಅಡಿಯಷ್ಟೇ ಬಾಕಿ ಇದೆ.
ಬಯಲು ಸೀಮೆ ಮಂಡ್ಯ ಮತ್ತು ಮೈಸೂರು ಭಾಗಗಳಲ್ಲೂ ಮಳೆರಾಯನ ಆರ್ಭಟ ಹೆಚ್ಚಾಗಿದೆ. ಕೇರಳ ಭಾಗದಲ್ಲಿ ಮಳೆ ಹೆಚ್ಚಾದ ಹಿನ್ನೆಲೆ, ಕಬಿನಿ ಜಲಾಶಯದ ಒಳಹರಿವಿನ ಪ್ರಮಾಣ ಹೆಚ್ಚಾಗಿದೆ. ಜಲಾಶಯದ ಒಳಹರಿವು 10 ಸಾವಿರ ಕ್ಯೂಸೆಕ್ ದಾಟಿದೆ.
ಇನ್ನೂ ನಾಲ್ಕು ದಿನಗಳ ಕಾಲ ಬಿರುಸಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಕೊಡಗಿನಲ್ಲಿ ಮುಂಗಾರು ಮಳೆ ಚುರುಕಾದ ಹಿನ್ನೆಲೆ ಮಂಡ್ಯ ಜಿಲ್ಲೆಯ ಕೆ.ಆರ್.ಎಸ್.ಜಲಾಶಯದ ಒಳಹರಿವಿನ ಪ್ರಮಾಣ ಹೆಚ್ಚಾಗಿದೆ. ಜಲಾಶಯದ ಮಟ್ಟ100 ಅಡಿ ದಾಟಿದೆ. ಜಲಾಶಯಕ್ಕೆ 9 ಸಾವಿರ ಕ್ಯೂಸೆಕ್ ನೀರಿನ ಪ್ರಮಾಣ ಏರಿಕೆಯಾಗಿದೆ.
ರಾಜ್ಯದಲ್ಲಿ ಭಾರಿ ಪ್ರಮಾಣದಲ್ಲಿ ಮಳೆಯಾಗುತ್ತಿರುವುದರಿಂದ ಬುತೇಕ ಎಲ್ಲಾ ಜಲಾಶಯಗಳು ತುಂಬಿದ್ದು, ಯಾವ ಸಮಯದಲ್ಲಿ ಬೇಕಾದರೂ ನದಿಗೆ ನೀರು ಬಿಡುಬಹುದು ಹೀಗಾಗಿ ನದಿ ಪಾತ್ರದ ಜನರು ಎಚ್ಚರಿಕೆ ವಹಿಸುವುದು ಅಗತ್ಯವಾಗಿದೆ.