ಬೆಂಗಳೂರು: ಕೊರೊನಾ ಸೋಂಕಿತರಿಗೆ ಶೇ.50ರಷ್ಟು ಹಾಸಿಗೆ ಮೀಸಲಿಡಲು ವಿಫಲವಾದ ಆಸ್ಪತ್ರೆಗಳಿಗೆ ಬಿಬಿಎಂಪಿ ಬಿಸಿ ಮುಟ್ಟಿಸುತ್ತಿದ್ದು, ಗುರುವಾರ ನಗರದ 19 ಆಸ್ಪತ್ರೆಗಳ ಪರವಾನಗಿಯನ್ನು ತಾತ್ಕಾಲಿಕವಾಗಿ ರದ್ದು ಮಾಡಿದೆ.
ಕೋವಿಡ್-19 ಸೋಂಕಿತರ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗಳಲ್ಲಿ ಶೇ. 50 ಹಾಸಿಗೆ ಮೀಸಲಿಡಲು ರಾಜ್ಯ ಸರ್ಕಾರ ಆದೇಶಿಸಿದೆ. ಈ ಸಂಬಂಧ ಗುರುವಾರ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ದಕ್ಷಿಣ ವಲಯ ವ್ಯಾಪ್ತಿಯ 5 ವಿಧಾನ ಸಭಾ ಕ್ಷೇತ್ರಗಳಲ್ಲಿ ಆರೋಗ್ಯಾಧಿಕಾರಿಗಳು ಖಾಸಗಿ ಆಸ್ಪತ್ರೆಗಳಿಗೆ ನೋಟಿಸ್ ಜಾರಿ ಮಾಡಿದ್ದರೂ ಕೂಡ ಶೇ. 50 ರಷ್ಟು ಹಾಸಿಗೆ ಮೀಸಲಿಟ್ಟಿರಲಿಲ್ಲ.
ಈ ಪರಿಣಾಮ ಕಂದಾಯ ಸಚಿವ ಆರ್. ಅಶೋಕ್ ಅವರ ಸೂಚನೆ ಮೇರೆಗೆ ಜಂಟಿ ಆಯುಕ್ತರ ನೇತೃತ್ವದಲ್ಲಿ ಆರೋಗ್ಯ ಅಧಿಕಾರಿಗಳ ತಂಡವು ಪರಿಶೀಲಿಸಿ ಹಾಸಿಗೆ ಕೊಡದ 19 ಖಾಸಗಿ ಆಸ್ಪತ್ರೆಗಳ ಮುಂಭಾಗ ಸಾರ್ವಜನಿಕ ಪ್ರಕಟಣೆಯ ಬ್ಯಾನರ್ ಅಳವಡಿಸಲಾಗಿದ್ದು, ತಾತ್ಕಾಲಿಕವಾಗಿ ಪರವಾನಗಿಯನ್ನು ರದ್ದುಪಡಿಸಿ ಆದೇಶ ಹೊರಡಿಸಿದ್ದಾರೆ.
ಅಲ್ಲದೆ ಮುಂದಿನ ಕ್ರಮಕ್ಕಾಗಿ ಸ್ಥಳೀಯ ಪೊಲೀಸ್ ಠಾಣೆಗಳಲ್ಲಿ ದೂರು ದಾಖಲಿಸಲಾಗಿದೆ ಎಂದು ದಕ್ಷಿಣ ವಲಯ ಆರೋಗ್ಯಾಧಿಕಾರಿ ಡಾ. ಶಿವಕುಮಾರ್ ತಿಳಿಸಿದ್ದಾರೆ.
ನಗರದಲ್ಲಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಈವರೆಗೆ ಬೆಂಗಳೂರು ಒಂದರಲ್ಲೇ ಸೋಂಕಿತರ ಸಂಖ್ಯೆ 53,324ಕ್ಕೆ ಏರಿಕೆಯಾಗಿದೆ ಆದರೂ ಖಾಸಗಿ ಆಸ್ಪತ್ರಗಳು ರೋಗ ನಿಯಂತ್ರಿಸುವ ನಿಟ್ಟಿನಲ್ಲಿ ಕ್ರಮಕ್ಕೆ ಮುಂದಾಗದಿರುವುದು ದುರಾದೃಷ್ಟಕರ ಸಂಗತಿಯಾಗಿದೆ.
ಕರ್ನಾಟಕ ಸರ್ಕಾರದ ಆದೇಶದಂತೆ ಕೋವಿಡ್-19 ಸೋಂಕಿತರ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗಳಲ್ಲಿ ಶೇ. 50 ಹಾಸಿಗೆ ಮೀಸಲಿಟ್ಟು, ಸರ್ಕಾರ ನಿಗದಿಪಡಿಸಿರುವ ದರವನ್ನು ಮಾತ್ರ ಕೋವಿಡ್ ಸೋಂಕಿರಿಂದ ಸಂಗ್ರಹಿಸಬೇಕು. ಇದನ್ನು ಪಾಲಿಸದಿದ್ದಲ್ಲಿ ಲೈಸೆನ್ಸ್ ರದ್ದಾಗಿ, ದೂರು ದಾಖಲಾಗುತ್ತದೆ.
ಕೋವಿಡ್ ಸೋಂಕಿತರಿಗೆ ಖಾಸಗಿ ಆಸ್ಪತ್ರೆಗಳಲ್ಲಿ ಬೆಡ್ ಸಿಗುತ್ತಿಲ್ಲ ಎಂಬ ವರದಿ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿದೆ. ಸರ್ಕಾರ ಖಾಸಗಿ ಆಸ್ಪತ್ರೆಗಳು ಬೆಡ್ ನೀಡಬೇಕು ಎಂದು ಸೂಚನೆ ನೀಡಿದೆ. ಇದನ್ನು ಉಲ್ಲಂಘನೆ ಮಾಡುವ ಆಸ್ಪತ್ರೆಗಳ ವಿರುದ್ಧ ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಿದೆ.