ಶಿವಮೊಗ್ಗ: ಕೊರೊನಾ ಸೋಂಕು ರಾಜ್ಯದಲ್ಲಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಜನ ಬೀದಿಯಲ್ಲಿ ಬಿದ್ದು ನರಳಾಡುತ್ತಿದ್ದಾರೆ. ಇಷ್ಟಾದರೂ ಕೊರೊನಾ ತಡೆಗಟ್ಟುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಆರೋಪಿಸಿದರು.
ಬಿಜೆಪಿಯವರು ಆಡಳಿತ ನಡೆಸುವುದಕ್ಕೆ ಲಾಯಕ್ಕಲ್ಲ ವಿಪಕ್ಷ ಸ್ಥಾನದಲ್ಲಿ ಕೂರುವುದಕ್ಕೆ ಲಾಯಕ್ಕು. ಅವರಿಗೆ ಅಧಿಕಾರ ನಡೆಸಲು ಬರುವುದಿಲ್ಲ ಎಂದು ಸುದ್ದಿಗಾರರೊಂದಿಗೆ ಮಾತನಾಡುವ ವೇಳೆ ಸಚಿವರ ವಿರುದ್ಧ ಕಿಡಿಕಾರಿದರು.
ಕೊರೊನಾ ಎಲ್ಲೆಡೆ ವ್ಯಾಪಕವಾಗಿ ಹರಡುತ್ತಿದೆ. ಚಿಕಿತ್ಸೆ ಸಿಗದೆ ಜನರು ಬೀದಿ ಬೀದಿಯಲ್ಲಿ ಬಿದ್ದು ನರಳಾಡುತ್ತಿದ್ದಾರೆ. ಅಷ್ಟೇ ಏಕೆ ಸಿಎಂ ಮನೆ ಬಳಿ ಹೋಗಿ ಸೂಕ್ತ ಚಿಕಿತ್ಸೆ ಕೊಡಿಸಿ ಎಂದು ಗೊಗರಿಯುತ್ತಿದ್ದಾರೆ. ಇಂಥ ಪರಿಸ್ಥಿತಿ ಇದ್ದರು ಏನು ಆಗೆಯಿಲ್ಲ ಎಂಬಂತೆ ಸಚಿವರು ನಡೆದುಕೊಳ್ಳುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಇನ್ನು ರಾಜ್ಯದಲ್ಲಿ ಸರ್ಕಾರ ಇದೆಯೋ ಇಲ್ಲವೋ ಎಂಬ ಪರಿಸ್ಥಿತಿ ನಿರ್ಮಾಣವಾಗಿದೆ. ಸದ್ಯದ ಪರಿಸ್ಥಿತಿಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಒಬ್ಬರೇ ಸಕ್ರಿಯವಾಗಿದ್ದಾರೆ. ಉಳಿದ ಸಚಿವರು ಆರಾಮಾಗಿ ಕಾಲ ಕಳೆಯುತ್ತಿದ್ದಾರೆ. ಇದಕ್ಕೆ 1,700 ಕೋಟಿ ರೂ. ವ್ಯಯಿಸಿ 17 ಶಾಸಕರನ್ನು ಖರೀದಿ ಮಾಡುವ ಅವಶ್ಯಕತೆಯಾದರೂ ಏನಿತ್ತು ಎಂದು ಕುಟುಕಿದರು.