ಹುಬ್ಬಳ್ಳಿ: ಪ್ರಜ್ವಲ್ ರೇವಣ್ಣ ಅವರಿಗೆ ಟಿಕೆಟ್ ನೀಡದಂತೆ ಹಾಸನದ ಜನರೇ ಹೇಳಿದ್ದರು. ಆದರೂ, ಆತನಿಗೆ ಟಿಕೆಟ್ ನೀಡಲಾಯಿತು. ಪ್ರಕರಣದಲ್ಲಿ ಎಚ್ಡಿ ರೇವಣ್ಣ ಅವರ ಹೆಸರು ಕೇಳಿಬಂದಿದೆ. ಪುತ್ರ ವ್ಯಾಮೋಹದಿಂದ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ಆರೋಪಿಗಳ ರಕ್ಷಣೆಗೆ ಮುಂದಾಗದಿರಲಿ. ಆರೋಪಿಗಳಿಗೆ ಶಿಕ್ಷೆಯಾಗಲಿ ಎಂದು ಆಮ್ ಆದ್ಮಿ ಪಾರ್ಟಿಯ ರಾಜ್ಯಾಧ್ಯಕ್ಷ ಡಾ. ಮುಖ್ಯಮಂತ್ರಿ ಚಂದ್ರು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮತಯಾಚನೆ ವೇಳೆ ತನ್ನ ಮಗ ಎಂದಿದ್ದ ಕುಮಾರಸ್ವಾಮಿ ಈಗ ಉಲ್ಟಾ ಹೊಡೆಯುತ್ತಿದ್ದಾರೆ. ಗ್ಯಾರಂಟಿಗಳಿಂದ ಹಳ್ಳಿ ಹೆಣ್ಣು ಮಕ್ಕಳು ದಾರಿ ತಪ್ಪಿದ್ದಾರೆ ಎಂದು ಹೇಳಿಕೆ ನೀಡಿದರು. ಈ ಚುನಾವಣೆಯಲ್ಲಿ ಬಿಜೆಪಿಯನ್ನು ಗೆಲ್ಲಿಸಿದರೆ, ಮುಂದಿನ ದಿನಗಳಲ್ಲಿ ಚುನಾವಣೆಯೇ ಇರುವುದಿಲ್ಲ. ಸರ್ವಾಧಿಕಾರ ಘೋಷಣೆಯಾಗುವುದರಲ್ಲಿ ಯಾವುದೇ ಸಂಶಯವಿಲ್ಲ ಎಂದು ಹೇಳಿದರು.
ಸಂವಿಧಾನ ಬದಲಿಸುವುದು, ಕಾನೂನನ್ನು ತಮಗೆ ಬೇಕಾದ ರೀತಿಯಲ್ಲಿ ಮಾಡಿಕೊಳ್ಳುವುದು, ಸರ್ಕಾರದ ಸ್ವಾಯತ್ತ ಸಂಸ್ಥೆಗಳನ್ನು ತಮ್ಮ ತೆಕ್ಕೆಗೆ ತೆಗೆದುಕೊಳ್ಳುವುದು ಬಿಜೆಪಿ ಗುರಿಯಾಗಿದೆ. ದೆಹಲಿ ಸರ್ಕಾರದ ಅಧಿಕಾರ ಕಿತ್ತುಕೊಳ್ಳಲಾಗಿದೆ. ರಾಜ್ಯಪಾಲರ ಮೂಲಕ ಸರ್ಕಾರಕ್ಕೆ ತೊಂದರೆ ಕೊಡಿಸಲಾಗುತ್ತಿದೆ.
ರಾಜ್ಯಕ್ಕೆ ಬರ ಪರಿಹಾರ ಬಿಡುಗಡೆಯಲ್ಲಿಯೂ ರಾಜಕೀಯ ಮಾಡಿದರು. ಈ ಬಾರಿ ಮತ ಚಲಾಯಿಸುವಾಗ ಇದೆಲ್ಲವನ್ನು ಗಮನದಲ್ಲಿಟ್ಟುಕೊಂಡು ಮತಚಲಾಯಿಸಿ. ಕಾಂಗ್ರೆಸ್ ಅಭ್ಯರ್ಥಿ ವಿನೋದ್ ಅಸೂಟಿ ಅವರಿಗೆ ಮತಹಾಕಿ ಎಂದು ಮುಖ್ಯಮಂತ್ರಿ ಚಂದ್ರು ಮನವಿ ಮಾಡಿದರು.
ಬಿಜೆಪಿಯವರು ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಸಿಬಿಐಗೆ ಒಪ್ಪಿಸುವಂತೆ ಒತ್ತಾಯಿಸುತ್ತಿದ್ದಾರೆ ಎನ್ನುವ ಕುರಿತು ಪ್ರತಿಕ್ರಿಯಿಸಿದ ಅವರು, ಸಿಬಿಐ ಕೇಂದ್ರ ಸರ್ಕಾರದ ಅಡಿಯಲ್ಲಿರುವುದರಿಂದ ಪ್ರಕರಣವನ್ನು ಮುಚ್ಚಿಹಾಕಲು ಯತ್ನಿಸುತ್ತಿದ್ದಾರೆ. 400 ಸ್ಥಾನ ಗೆದ್ದರೆ ಸಂವಿಧಾನ ಬದಲಿಸುತ್ತೇವೆ ಎನ್ನುತ್ತಾರೆ. ಸಂವಿಧಾನ ಬದಲಿಸುತ್ತೇವೆ ಎಂದವರನ್ನು ಯಾಕಿನ್ನು ಪಕ್ಷದಲ್ಲಿಟ್ಟುಕೊಂಡಿದ್ದೀರಿ ಎಂದು ಹೇಳಿದರು.
ಡಬ್ಲ್ಯುಎಫ್ಐ ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ ಕೇಳಿಬಂತು. ಆದರೆ, ಆತನನ್ನು ಕುಸ್ತಿ ಫೆಡರೇಷನ್ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಿದ್ದು ಬಿಟ್ಟರೆ ಆತನ ವಿರುದ್ಧ ಯಾವುದೇ ಕ್ರಮ ಕೈಗೊಳ್ಳಲಿಲ್ಲ. ಉನ್ನಾವೋ ಅತ್ಯಾಚಾರ ಪ್ರಕರಣದಲ್ಲಿ ಆರೋಪಿ ಕೂಡ ಬಿಜೆಪಿ ಶಾಸಕನಾಗಿದ್ದ ಕುಲದೀಪ್ ಸಿಂಗ್ ಸೆಂಗಾರ್. ಬಿಲ್ಕಿಸ್ ಬಾನು ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಅಪರಾಧಿಗಳನ್ನು ಬಿಡುಗಡೆ ಮಾಡಲಾಯಿತು.
ಪಶ್ಚಿಮ ಬಂಗಾಳದ ರಾಜ್ಯಪಾಲ ಆನಂದ ಬೋಸ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಕೇಳಿಬಂದಿದೆ. ಕರ್ನಾಟಕದಲ್ಲಿ ಹರತಾಳು ಹಾಲಪ್ಪ, ಸಿದ್ದು ಸವದಿ, ರಮೇಶ್ ಜಾರಕಿಹೊಳಿ, ಸ್ವಾಮಿ ಚಿನ್ಮಯಾನಂದ ಹೀಗೆ ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳಲ್ಲಿ ತೊಡಗಿಕೊಂಡಿರುವ ಬಹುತೇಕರು ಬಿಜೆಪಿಯವರು ಎಂದು ದೂರಿದರು.
ಹುಬ್ಬಳ್ಳಿ-ಧಾರವಾಡ ಕಾಂಗ್ರೆಸ್ ಜಿಲ್ಲಾ ಅದ್ಯಕ್ಷ ಅಲ್ತಾಫ್ ಹಲ್ಲೂರು, ಹುಬ್ಬಳ್ಳಿ ಎಎಪಿ ಜಿಲ್ಲಾ ಅಧ್ಯಕ್ಷ ಅನಂತ ಬುಗಾಡಿ ಇದ್ದರು.